ಜಾತಿಗಣತಿ ಕುರಿತು ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಸಂಚಲನ

1 year ago

ಬೆಂಗಳೂರು: ಕಳೆದ ಒಂದು ದಶಕದಿಂದ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸುತ್ತಿರುವ ಜಾತಿವಾರು ಜನಗಣತಿ ವಿಚಾರ ಇದೀಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ಜಾತಿವಾರು ಜನಗಣತಿ ವರದಿ ತೆರೆಯಲಾಗುತ್ತದೆ.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ನೇತೃತ್ವದಲ್ಲಿ ನಡೆದ ಸಮೀಕ್ಷೆಯನ್ನು ಜಯ ಪ್ರಕಾಶ್ ಹೆಗಡೆ ಅವರ ಅವಧಿಯಲ್ಲಿ ಪೂರ್ಣಗೊಳಿಸಿದ್ದು, ಮುಚ್ಚಿದ ಲಕೋಟೆಯಲ್ಲಿ ಅದನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ.

ಈ ಲಕೋಟೆಯನ್ನು ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ಧರೆಯಲಾಗುತ್ತದೆ ಎಂದು ಸಂಪುಟ ಸಭೆಯ ಮುಂದೆ ಚರ್ಚಿಸಲಾಗುತ್ತಿರುವ ವಿಷಯಗಳ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಸಂಪುಟ ಸಭೆಯಲ್ಲಿ ಈ ವರದಿಯನ್ನು ತೆರೆಯಲಾಗುತ್ತಿದ್ದು ಆನಂತರ ಅದನ್ನು ಅನುಷ್ಠಾನಗೊಳಿಸುವ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ಸಂಪುಟ ಉಪ ಸಮಿತಿ ರಚಿಸುವ ಸಾಧ್ಯತೆ ಇದೆ.

ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಜಾತಿಗಣತಿ ವರದಿಯ ಮುಚ್ಚಿದ ಲಕೋಟೆಯನ್ನು ನಾಳೆ ಸಚಿವ ಸಂಪುಟದಲ್ಲಿ ತೆರೆಯಲಾಗುತ್ತದೆ. ವರದಿಯಲ್ಲಿ ಏನೆಲ್ಲಾ ಇದೆ ಎಂಬುದು ಯಾರಿಗೂ ಗೊತ್ತಿಲ್ಲ. ನಾಳೆಯೇ ಆ ಬಗ್ಗೆ ಮಾಹಿತಿ ಸಿಗಲಿದೆ ಎಂದರು.

ಜಾತಿ ಗಣತಿ ವರದಿಯನ್ನು ಸಂಪುಟದ ಮುಂದೆ ಮಂಡಿಸಿದ ನಂತರ ಅದರ ಬಗ್ಗೆ ಏನು ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ಸರ್ಕಾರ ತೀರ್ಮಾನಿಸುತ್ತದೆ. ಜಾತಿಗಣತಿಯನ್ನು 160 ಕೋಟಿ ರೂ.ಗಳನ್ನು ಖರ್ಚು ಮಾಡಿ ಸಿದ್ಧಪಡಿಸಲಾಗಿದೆ. ಈ ವರದಿಯಲ್ಲಿ ಮಾಹಿತಿಯನ್ನಾದರೂ ಸಾರ್ವಜನಿಕಗೊಳಿಸಲೇಬೇಕು ಎಂದರು.

ವರದಿಯ ಮೇಲೆ ಯಾವ ಕ್ರಮ ಕೈಗೊಳ್ಳಬೇಕು ಎಂಬುದನ್ನು ಸರ್ಕಾರ ತೀರ್ಮಾನಿಸುತ್ತದೆ ನಿಜ. ಆದರೆ, ವರದಿಯಲ್ಲಿ ಏನಿದೆ, ಯಾವ ಅಂಕಿಅಂಶಗಳಿವೆ ಎಂಬುದನ್ನು ಎಲ್ಲವನ್ನೂ ಸಾರ್ವಜನಿಕಗೊಳಿಸಬೇಕಾಗುತ್ತದೆ ಎಂದರು.

ಆದರೆ ಇದಕ್ಕೆ ವ್ಯತಿರಿಕ್ತವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ಈ ಬಗ್ಗೆ ಯಾವುದೇ ಚರ್ಚೆ ನಡೆಸುವುದಿಲ್ಲ ಎಂದಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿಯ ವಿಚಾರ ಚರ್ಚೆಗೆ ಬರುವುದಿಲ್ಲ. ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಎಲ್ಲಾ ಬೆಳವಣಿಗೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಅವರಿಗೆ ಜಾತಿ ಜನಗಣತಿ ನೆನಪಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

ಜಾತಿಗಣತಿ ಎನ್ನುವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಟ ಬಂದಾಗ ವೆಂಕಟರಮಣ ಎಂಬಂತಾಗಿದೆ. ಜಾತಿ ಜನಗಣತಿ ಬಗ್ಗೆ ಬಿಜೆಪಿ ಪಕ್ಷಕ್ಕಾಗಲಿ ಅಥವಾ ವೈಯಕ್ತಿಕವಾಗಿ ನನಗಾಗಲಿ ಯಾವ ತಕರಾರು ಇಲ್ಲ ಅಥವಾ ವಿರೋಧವೂ ಇಲ್ಲ ಎಂದಿದ್ದಾರೆ.

ಬಿಜೆಪಿಯ ಮೂಲ ಸಿದ್ಧಾಂತವಾದ ‘ಅಂತ್ಯೋದಯ’ದ ಪರಿಕಾಲ್ಪನೆಯಲ್ಲೇ ತಳ ಸಮುದಾಯಗಳನ್ನ ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಸಾಮಾಜಿಕ ನ್ಯಾಯದ ಬದ್ಧತೆ ಅಡಗಿದೆ. ಅದನ್ನ ಸಾಕಾರಗೊಳಿಸುವ ಯಾವ ಪ್ರಾಮಾಣಿಕ ಪ್ರಯತ್ನಕ್ಕಾದರೂ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂದಿದ್ದಾರೆ.

ಆದರೆ ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯ ಹಾವು-ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೇಳಲು, ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನ ಏಣಿಯಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ ಎಂದಿದ್ದಾರೆ.

Leave a Reply