ಮತಾಂತರ ನಿಷೇಧ ಕಾಯ್ದೆ ಅಮಾನವೀಯ, ಸಂವಿಧಾನ ಬಾಹಿರ, ವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧ: ಸಿದ್ದು

4 years ago

ಬೆಳಗಾವಿ: ಬಲವಂತವಾಗಿ, ಆಸೆ ಆಮಿಷ ಒಡ್ಡಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅದು ಶಿಕ್ಷಾರ್ಹ ಅಪರಾಧ ಎಂದು ನಮ್ಮ ಸಂವಿಧಾನದಲ್ಲೇ ಸ್ಪಷ್ಟವಾಗಿ ಇರುವುದರಿಂದ ರಾಜ್ಯ ಸರ್ಕಾರದ ನೂತನ ಮತಾಂತರ ನಿಷೇಧ ಕಾಯ್ದೆಯ ಅಗತ್ಯವೇನಿದೆ? ಇದೇ ಕಾರಣಕ್ಕೆ ನಾವು ವಿರೋಧ ಮಾಡುತ್ತಿದ್ದೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯ ಸರ್ಕಾರದ ಮತಾಂತರ ನಿಷೇಧ ಮಸೂದೆ ಕುರಿತು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಮಾತಾಡಿದ ಅವರು, ನಮ್ಮ ಸರ್ಕಾರದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಯ ಕರಡು ಸಂಪುಟದಲ್ಲಿ ಚರ್ಚೆಯೂ ಆಗಿಲ್ಲ, ಅನುಮೋದನೆಯೂ ಆಗಿಲ್ಲ. ಕೇವಲ ಸಂಪುಟದ ಚರ್ಚೆಗೆ ತನ್ನಿ ಎಂದು ಸಹಿ ಹಾಕಿದ ಕಡತಗಳೆಲ್ಲವೂ ಸರ್ಕಾರದ ನಿಲುವು ಆಗುವುದಿಲ್ಲ ಎಂದರು.

ಸಂಸದೀಯ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ಎಂದರೆ ಸಮಾನರಲ್ಲಿ ಮೊದಲಿಗ ಎಂಬ ವ್ಯಾಖ್ಯಾನವಿದೆ. ಮುಖ್ಯಮಂತ್ರಿಯಾಗಿ ನಾನೊಬ್ಬನೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲು ಬರಲ್ಲ, ಕರಡು ಪ್ರತಿ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿ ಎಂಬ ಕಾರಣಕ್ಕೆ ಸಹಿ ಮಾಡಿದ್ದೆ. ಸಹಿ ಮಾಡಿದ ಮಾತ್ರಕ್ಕೆ ಒಪ್ಪಿದ್ದೆ ಎಂದಲ್ಲ ಎಂದರು.

ನಾನು ಮತಾಂತರ ನಿಷೇಧ ಕಾಯಿದೆಯ ಕಡತವನ್ನು ಸಂಪುಟದ ಮುಂದೆ ತರುವಂತೆ ಸಹಿ ಹಾಕಿದ್ದು 2015ರ ನವೆಂಬರ್ ತಿಂಗಳಿನಲ್ಲಿ. ಅದಾಗಿ ಎರಡೂವರೆ ವರ್ಷ ನಾವು ಅಧಿಕಾರದಲ್ಲಿ ಇದ್ದರೂ ಒಮ್ಮೆಯೂ ಅದನ್ನು ಸಂಪುಟದ ಮುಂದೆ ತರುವ ಪ್ರಯತ್ನ ಮಾಡಲಿಲ್ಲ. ಕಾರಣ ನಮ್ಮ ಸರ್ಕಾರಕ್ಕೆ ಇಂಥಾ ಮಸೂದೆಯ ಬಗ್ಗೆ ಆಸಕ್ತಿ ಇರಲಿಲ್ಲ ಎಂದರು.

ಮತಾಂತರ ನಿಷೇಧ ಕುರಿತ ಈ ಹಿಂದಿನ ಕರಡು ಪ್ರತಿಗೂ, ಈಗಿನ ಮಸೂದೆಗೂ ಇರುವ ಪ್ರಮುಖ ವ್ಯತ್ಯಾಸಗಳೆಂದರೆ, ಮೊದಲನೆಯದು ಹಿಂದಿನ ಕರಡು ಪ್ರತಿಯ ನಿಯಮ 3ರಲ್ಲಿ  ವಿವಾಹ ಎಂಬ ಪದ ಬಳಕೆ ಇರಲಿಲ್ಲ. ಬಿಜೆಪಿಯವರು ತಮ್ಮ ಕಾಯ್ದೆಯಲ್ಲಿ ವಿವಾಹವನ್ನು ಹೊಸದಾಗಿ ಸೇರಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಪ್ರಕಾರ ಸಾಕ್ಷಾಧಾರಗಳ ಕೊರತೆ ಕಂಡುಬಂದರೆ ಆರೋಪಿಯನ್ನು ತಪ್ಪಿತಸ್ಥ ಎಂದು ಪರಿಗಣಿಸಲು ಸಾಧ್ಯವಿಲ್ಲ. ಆದರೆ ಈ ಹೊಸ ಕಾಯ್ದೆಯ ನಿಯಮ 12ರ ಪ್ರಕಾರ ಸಾಕ್ಷಾಧಾರ ಕೊರತೆ ಇದ್ದರೂ ಅದು ದೂರುದಾರನಿಗೆ ಅನುಕೂಲ ಮಾಡಿಕೊಡಲಿದೆ. ಹೀಗಾಗಿ ಕಾಯ್ದೆಯು ಕಾನೂನಿನ ನಿಯಮಗಳಿಗೆ ವಿರುದ್ಧವಾಗಿದೆ ಎಂದರು.

ಸಂವಿಧಾನದ 21 ಮತ್ತು 25ನೇ ವಿಧಿಯನ್ವಯ ಒಬ್ಬ ವ್ಯಕ್ತಿ ತನಗಿಷ್ಟವಾದ (ಯಾವುದೇ ಧರ್ಮಕ್ಕೆ ಸೇರಿದವರಾದರೂ ಸರಿ) ವ್ಯಕ್ತಿಯನ್ನು ಪ್ರೀತಿಸಿ ಮದುವೆಯಾಗಲು ಸಂಪೂರ್ಣ ಸ್ವಾತಂತ್ರ್ಯ ನೀಡಿರುವಾಗ, ಅದನ್ನು ಬೇಡ ಎನ್ನಲು ಸರ್ಕಾರಕ್ಕೇನು ಹಕ್ಕಿದೆ? ಇದೇ ಕಾರಣಕ್ಕೆ ಗುಜರಾತ್ ಸರ್ಕಾರ ಜಾರಿಗೊಳಿಸಲು ಹೊರಟಿದ್ದ ಮತಾಂತರ ನಿಷೇಧ ಕಾಯ್ದೆಗೆ ತಡೆಯಾಜ್ಞೆ ನೀಡಿರುವ ಅಲ್ಲಿನ ಹೈಕೋರ್ಟ್, ಅಲ್ಲಿನ ಸರ್ಕಾರಕ್ಕೆ ಛೀಮಾರಿ ಹಾಕಿದೆ ಎಂದು ಟೀಕಿಸಿದರು.

ಗುಜರಾತ್, ಉತ್ತರ ಪ್ರದೇಶ ಸರ್ಕಾರಗಳ ಮತಾಂತರ ನಿಷೇಧ ಕಾಯ್ದೆಯಲ್ಲಿ ಬಳಕೆ ಮಾಡಿರುವ ಪದಗಳು, ವಾಕ್ಯಗಳೇ ಇಲ್ಲಿಯೂ ಯಥಾವತ್ತಾಗಿವೆ. ಈ ಎಲ್ಲಾ ಸರ್ಕಾರಗಳ ಕರಡು ತಯಾರಿಕೆಯ ಹಿಂದೆ ಯಾವುದೋ ಒಂದು ಕಾಣದ ಕೈ ಇದೆ ಎಂಬ ಅನುಮಾನ ನನಗಿದೆ. ಅದು ಯಾವುದು ಎಂದು ಸರ್ಕಾರವೇ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

ದೇಶದಲ್ಲಿ ಶತಮಾನಗಳ ಹಿಂದಿನಿಂದ ಮತಾಂತರ ನಡೆದುಕೊಂಡು ಬಂದಿದೆ. ಬ್ರಾಹ್ಮಣ ಜಾತಿಯಲ್ಲಿ ಹುಟ್ಟಿದ ಪಂಪ ಜೈನ ಧರ್ಮಕ್ಕೆ ಮತಾಂತರಗೊಂಡರು. ಸಾಮ್ರಾಟ್ ಅಶೋಕ ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಹೋಗಿಲ್ಲವೇ? ಇದಕ್ಕೆ ಕಾರಣವೇನು ಎಂಬುದು ಯಾರಿಗೂ ತಿಳಿಯದ ವಿಷಯವಲ್ಲ. ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣನವರು ಬ್ರಾಹ್ಮಣರಾಗಿ ಹುಟ್ಟಿ ಲಿಂಗಾಯತ ಧರ್ಮ ಸ್ಥಾಪನೆ ಮಾಡಿಲ್ಲವೇ? ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್  ಲಕ್ಷಾಂತರ ಜನರ ಜೊತೆಗೆ ಬೌದ್ಧ ಧರ್ಮಕ್ಕೆ ಮತಾಂತರ ಆಗಿಲ್ಲವೇ? ಇವರ್ಯಾರು ಅಧಿಕಾರವೋ ಅಥವಾ ಇನ್ಯಾವುದೋ ಕಾರಣಕ್ಕೆ ಮತಾಂತರಗೊಂಡವರಲ್ಲ ಎಂದರು.

ರಾಜ್ಯದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿದೆ, ಕ್ರಿಶ್ಚಿಯನ್ ಮತ್ತು ಮುಸ್ಲಿಂಮರ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ.  2001 ಮತ್ತು 2011ರ ಜನಗಣತಿಯನ್ನು ನೋಡಿದರೆ ಸತ್ಯ ಏನೆಂದು ಅರಿವಾಗುತ್ತದೆ. 2001ರ ಜನಗಣತಿ ಪ್ರಕಾರ ರಾಜ್ಯದ ಜನಸಂಖ್ಯೆಯಲ್ಲಿ 83.86% ಹಿಂದೂಗಳ ಪ್ರಮಾಣ ಇತ್ತು, ಅದು 2011 ಕ್ಕೆ ಶೇ. 84 ಕ್ಕೆ ಏರಿಕೆಯಾಗಿದೆ. ಮುಸ್ಲಿಮರ ಪ್ರಮಾಣ 12.23% ಇಂದ 12.92 ಹೆಚ್ಚಾಗಿದೆ.  ಕ್ರೈಸ್ತರ ಪ್ರಮಾಣ 1.91% ಇಂದ 1.87% ಗೆ ಇಳಿಕೆಯಾಗಿದೆ. ಇದು ನಮ್ಮ ರಾಜ್ಯದ ವಾಸ್ತವ ಸ್ಥಿತಿ ಎಂದರು.

ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬುದು ಸಂವಿಧಾನದ ಮೂಲ ನಿಯಮ. ಆದರೆ ರಾಜ್ಯ ಸರ್ಕಾರದ ಮತಾಂತರ ನಿಷೇಧ ಕಾಯ್ದೆಯಲ್ಲಿ ಮಹಿಳೆಯರು, ಅಪ್ರಾಪ್ತರು, ಬುದ್ಧಿಭ್ರಮಣೆಯಾದವರು, ಪರಿಶಿಷ್ಟ ಜಾತಿ ಮತ್ತು ವರ್ಗದವರನ್ನು ಕಾನೂನು ಬಾಹಿರವಾಗಿ ಮತಾಂತರ ಮಾಡಿದರೆ ಮಾತ್ರ ಗರಿಷ್ಠ ಶಿಕ್ಷೆ ವಿಧಿಸಲಾಗಿದೆ. ಈ ಅಸಮಾನತೆಗೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂದರು.

ಹಿಂದೂ ಧರ್ಮದ ಜಾತೀತಿಯತೆ, ಅಸ್ಪೃಶ್ಯತೆ, ಅಸಮಾನತೆಗಳನ್ನು ಕಿತ್ತುಹಾಕಲು ಪ್ರಯತ್ನ ಮಾಡಿದ ಬಾಬಾ ಸಾಹೇಬರು, ಅದು ಸಾಧ್ಯವಾಗದಿದ್ದಾಗ “ಹಿಂದೂವಾಗಿ ಹುಟ್ಟಿದ್ದೇನೆ, ಹಿಂದೂವಾಗಿ ಸಾಯಲಾರೆ” ಎಂದು ಬೌದ್ಧ ಧರ್ಮಕ್ಕೆ ಮತಾಂತರಗೊಂಡರು. ಜೊತೆಗೆ ಲಕ್ಷಾಂತರ ಜನರಿಗೆ ಸ್ವ ಇಚ್ಛೆಯಿಂದ ಮತಾಂತರಗೊಳ್ಳಲು ಕರೆನೀಡಿದ್ದು ನಿಜವಲ್ಲವೇ? ಎಂದು ಪ್ರಶ್ನಿಸಿದರು.

ಬಲವಂತದಿಂದ, ಆಸೆ ಆಮಿಷ ಒಡ್ಡಿ, ಹೆದರಿಸಿ ಬೆದರಿಸಿ, ಮೋಸದ ಮೂಲಕ ಮತಾಂತರ ಮಾಡುವುದನ್ನು ನಾನು ವಿರೋಧಿಸುತ್ತೇನೆ. ಇದರ ಜೊತೆಗೆ ಜಾತೀಯತೆ, ಅಸ್ಪೃಶ್ಯತೆ ಅನುಸರಿಸುತ್ತಿರುವವರಿಗೂ ಕಠಿಣ ಶಿಕ್ಷೆಯಾಗಬೇಕು ಎಂಬುದು ನನ್ನ ಒತ್ತಾಯ ಎಂದರು.

ಮತಾಂತರವನ್ನು ದೂಷಿಸುವ ಬದಲು, ಮತಾಂತರವಾಗಲು ನಮ್ಮಲ್ಲಿರುವ ದೋಷಗಳೇನು ಎಂಬುದನ್ನು ಗುರುತಿಸಿ ಸರಿಪಡಿಸುವ ಕೆಲಸವನ್ನು ಮಾಡಬೇಕು ಎಂದು ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಇದು ನಿಜವಾಗಿ ಈಗ ನಾವು ಮಾಡಲೇಬೇಕಾದ ಕೆಲಸ ಎಂದರು.

ರಾಜ್ಯ ಸರ್ಕಾರದ ಮತಾಂತರ ನಿಷೇಧ ಕಾಯ್ದೆ ಅಮಾನವೀಯ, ಸಂವಿಧಾನ ಬಾಹಿರ ಮತ್ತು ವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು, ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದರು.

Leave a Reply