ಪ್ರಜ್ವಲ್ ರೇವಣ್ಣ ಪ್ರಕರಣ ಸಿಬಿಐ ತನಿಖೆಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ

2 years ago

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪಾರದರ್ಶಕ, ಹಾಗೂ ನಿಷ್ಪಪಕ್ಷಪಾತ ತನಿಖೆ ಎಸ್‌ಐಟಿಯಿಂದ ನಡೆಯುತ್ತಿಲ್ಲ ಎಂದು ಆರೋಪಿಸಿರುವ ಜೆಡಿಎಸ್‌, ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.

ಪೆನ್ ಡ್ರೈವ್ ಹಂಚಿಕೆ ಪ್ರಕರಣದ ರೂವಾರಿ ಡಿಸಿಎಂ ಡಿ.ಕೆ.ಶಿವಕುಮಾರ್, ಅವರ ಅಣತಿಯಂತೆ ಇಡೀ ಪ್ರಕರಣ ನಡೆಯುತ್ತಿದೆ. ಎಸ್ಐಟಿ ಶಿವಕುಮಾರ್ ಅವರ ಸೂಚನೆಯ ಮೇರೆಗೆ ಕೂಡಲೇ ಅವರನ್ನು ಸಂಪುಟದಿಂದ ವಚಗೊಳಿಸಲು ಮುಖ್ಯಮಂತ್ರಿಗಳಿಗೆ ಸೂಚನೆ ನೀಡಬೇಕು ಎಂದು ಕೋರಲಾಗಿದೆ.

ಪೆನ್ ಡ್ರೈವ್ ಪ್ರಕರಣ ಬೆಳಕಿಗೆ ಬಂದ ನಂತರ ಉಂಟಾದ ಬೆಳವಣಿಗೆಗಳು ಹಾಗೂ ವಿಧಾನಪರಿಷತ್ ಚುನಾವಣೆ ಕುರಿತಂತೆ ಪಕ್ಷದ ಕೋರ್ ಕಮಿಟಿ ಸದಸ್ಯರೊಂದಿಗೆ ಸಭೆ ನಡೆಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಅನಂತರ ಜೆಡಿಎಸ್ ನ ಎಲ್ಲಾ ಶಾಸಕರು ಮತ್ತು ಕೋರ್ ಕಮಿಟಿ ಸದಸ್ಯರೊಂದಿಗೆ ರಾಜ್ಯಪಾಲ ತಾವಾರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಲೋಕಸಭೆ ಚುನಾವಣೆ ಮತದಾನಕ್ಕೂ ಮುನ್ನ 25,000ಕ್ಕೂ ಅಧಿಕ ಪೆನ್ ಡ್ರೈವ್ ಗಳನ್ನು ಹಾಸನದ ಬಸ್ ನಿಲ್ದಾಣ, ಉದ್ಯಾನವನ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಹಂಚಿಕೆ ಮಾಡಲಾಗಿದೆ. ಈ ಮೂಲಕ ಮಹಿಳೆಯರ ಘನತೆ ಗೌರವಗಳನ್ನು ಗಾಳಿಗೆ ತೂರಲಾಗಿದೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ.

ರಾಜಕೀಯ ಕಾರಣಕ್ಕಾಗಿ ಶಿವಕುಮಾರ್ ಈ ಪ್ರಕರಣವನ್ನು ಬಳಸಿಕೊಂಡಿದ್ದಾರೆ. ಸಂಬಂಧವೇ ಇಲ್ಲದಿದ್ದರೂ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪ್ರಕರಣದ ಜೊತೆಗೆ ಎಳೆದು ತರಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ರಾಜ್ಯ ಸರ್ಕಾರದಿಂದ ವರದಿ ಪಡೆದು ಕೇಂದ್ರಕ್ಕೆ ರವಾನಿಸಬೇಕು ಎಂದು ಮನವಿ ಮಾಡಲಾಗಿದೆ.

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣದ ಬಗ್ಗೆ ತಮ್ಮ ನಿಲುವು ಹಿಂದಿನಿಂದಲೂ ಅತ್ಯಂತ ಸ್ಪಷ್ಟವಾಗಿದೆ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ತಪ್ಪು ಮಾಡಿದವರು ಈ ನೆಲದ ಕಾನೂನಿನಂತೆ ಶಿಕ್ಷೆಗೆ ಒಳಪಡಲೇಬೇಕು ಎಂದರು.

ಲೈಂಗಿಕ ಕಿರುಕುಳ ಆರೋಪ ಪ್ರಕರಣದ ಬಗ್ಗೆ ತಾವೆಂದೂ ಸಮರ್ಥನೆಗೆ ನಿಂತಿಲ್ಲ. ಆದರೆ ಉಪಮುಖ್ಯಮಂತ್ರಿ ಶಿವಕುಮಾರ್ ಅವರು ರಾಜಕೀಯ ಕಾರಣಕ್ಕಾಗಿ ಈ ಪ್ರಕರಣವನ್ನು ಬಳಸುತ್ತಿರುವ ಕಾರಣಕ್ಕಾಗಿ ವಿರೋಧ ಮಾಡುತ್ತಿದ್ದೇನೆ ಎಂದರು

ಶಿವಕುಮಾರ್ ಅವರು ರಾಜಕೀಯ ಕಾರಣಕ್ಕಾಗಿ ಈ ಪ್ರಕರಣವನ್ನು ಬಳಸಿಕೊಳ್ಳುವ ಮೂಲಕ ಹೆಣ್ಣು ಮಕ್ಕಳ ಗೌರವದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ. ಹೀಗಾಗಿ ಇದರ ವಿರುದ್ಧ ಹೋರಾಟ ನಡೆಸುತ್ತಿದ್ದೇನೆ. ಇದಕ್ಕಾಗಿ ತಾನೆಂದೂ ತಮ್ಮ ಸಮುದಾಯದ ರಕ್ಷಣೆ ಪಡೆಯಲು ಮುಂದಾಗುತ್ತಿಲ್ಲ. ಒಕ್ಕಲಿಗ ಸಮುದಾಯ ಎಂಬ ರಕ್ಷಣೆಯೊಂದಿಗೆ ಹೋರಾಟ ಮಾಡುವುದಿಲ್ಲ ಎಂದರು.

Leave a Reply