ಡಿಸೆಂಬರ್ ತಿಂಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪತ್ರ: ಎಂ.ಸಿ.ಸುಧಾಕ‌ರ್

2 years ago

#Appointment #Letter #AssistantProfessor #MCSudhakar #GFGC

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಡಿಸೆಂಬರ್‌ ತಿಂಗಳಲ್ಲಿ ನೇಮಕಾತಿ ಆದೇಶ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮಾಹಿತಿ ನೀಡಿದರು.

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಗೆ ಚುರುಕು ನೀಡಿ ಪರಿಷ್ಕೃತ ಪಟ್ಟಿ ಬಿಡುಗಡೆಗೊಳಿಸಿದಕ್ಕೆ ಉದ್ಯೋಗ ಆಕಾಂಕ್ಷಿಗಳು ಉನ್ನತ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಹರ್ಷವ್ಯಕ್ತಪಡಿಸಿ ಮುಂದಿನ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸಲು ಮನವಿ ಮಾಡಿದರು.

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸುಧಾಕರ್ ಅವರು, ಮೂರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ. 1,242 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. 1,208 ಅಭ್ಯರ್ಥಿಗಳನ್ನು ಮೆರಿಟ್ ಮತ್ತು ರೋಸ್ಟ‌ರ್ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

ನೇಮಕಾತಿ ಪ್ರಕ್ರಿಯೆಗೆ ಯಾವುದೇ ಅಡಚಣೆ ಇಲ್ಲ, ಸಿಂಧುತ್ವ ಪ್ರಮಾಣಪತ್ರ, ಪೊಲೀಸ್ ಪರಿಶೀಲನೆ, ವೈದ್ಯಕೀಯ ಪರಿಶೀಲನಾ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಕಾರದಿಂದ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲಾಗಿದೆ. ಭವಿಷ್ಯದ ಕನಸು ಕಟ್ಟಿಕೊಂಡಿದ್ದ ಪ್ರತಿಭಾವಂತರ ಕುಟುಂಬಗಳ ಬದುಕು ಹಸಿವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಆಯ್ಕೆಯಾದವರು ಕಡ್ಡಾಯವಾಗಿ ಗ್ರಾಮೀಣ ಪ್ರದೇಶಕ್ಕೆ ತೆರಳಿ ಸೇವೆ ಸಲ್ಲಿಸಬೇಕು. ನೆಪಗಳನ್ನು ಹೇಳಿಕೊಂಡು ವರ್ಗಾವಣೆಗೆ ಒತ್ತಡ ಮಾಡುವ ಕೆಲಸಕ್ಕೆ ಮುಂದಾಗಬಾರದು. ಕಷ್ಟಪಟ್ಟು ಕೆಲಸ ಮಾಡಬೇಕು, ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.

Leave a Reply