ಬೆಂಗಳೂರು: ಸರ್ಕಾರಿ ಕೆಲಸ, ಚಿನ್ನದ ಉದ್ಯಮ ಹಾಗೂ ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಹೆಸರಿನಲ್ಲಿ ಹಣ ಪಡೆದು ಹಲವರಿಗೆ ವಂಚಿಸಿದ್ದ ಖತರ್ನಾಕ್ ಖದೀಮನನ್ನು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಾಜಿ ಪಿಡಿಒ ಯೋಗೇಂದ್ರ ಬಂಧಿತ ಆರೋಪಿಯಾಗಿದ್ದು, ಆತ ನಗರದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಬಂಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿದ್ದ ಯೋಗೇಂದ್ರ, 2020ರಲ್ಲಿ ಕರ್ತವ್ಯದಿಂದ ವಜಾಗೊಂಡಿದ್ದ.
2023ರಲ್ಲಿ ಸರ್ಕಾರಿ ಕೆಲಸ ಕೊಡಿಸುವುದಾಗಿ ವ್ಯಕ್ತಿಯೊಬ್ಬರಿಂದ 17 ಲಕ್ಷ ರೂ. ಪಡೆದು ಪರಾರಿಯಾಗಿದ್ದ ಆರೋಪದ ಮೇಲೆ ಯೋಗೇಂದ್ರ ವಿರುದ್ಧ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಅಲ್ಲದೇ, ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಹಣ ಡಬಲ್ ಮಾಡಿಕೊಡುವುದಾಗಿ ವ್ಯಕ್ತಿಯೊಬ್ಬರಿಂದ 1.35 ಕೋಟಿ ರೂ ಪಡೆದು ವಂಚಿಸಿದ್ದ ಆರೋಪದ ಮೇಲೆ ಯೋಗೇಂದ್ರ ವಿರುದ್ಧ 2024ರಲ್ಲಿ ವಿ.ವಿ.ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತಮ್ಮ ವಿರುದ್ಧ ವಂಚನೆಯ ಪ್ರಕರಣ ದಾಖಲಾಗಿದ್ದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂಬ ಮಾಹಿತಿ ತಿಳಿದ ಆತ ವಿದೇಶಕ್ಕೆ ಪರಾರಿಯಾಗಿದ್ದ. ಮೊದಲು ಶ್ರೀಲಂಕಾ, ನಂತರ ಅಲ್ಲಿಂದ ದುಬೈಗೆ ತೆರಳಿ ತಲೆಮರೆಸಿಕೊಂಡಿದ್ದ.
ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದ ಪೊಲೀಸರು ಆತ ಬೆಂಗಳೂರಿಗೆ ಬರುತ್ತಿದ್ದಾನೆ ಎಂಬ ಮಾಹಿತಿ ಸಂಗ್ರಹಿಸಿ, ನಿರೀಕ್ಷೆಯಂತೆ ಆತ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಬಂಧಿಸಿದ್ದಾರೆ.
ಸುಲಭವಾಗಿ ನಂಬಿಸಬಹುದಾದ ವ್ಯಕ್ತಿಗಳನ್ನು ಟಾರ್ಗೆಟ್ ಮಾಡಿಕೊಂಡು, ಅವರ ಬಳಿ ತನಗೆ ರಾಜಕಾರಣಿಗಳ ಪರಿಚಯವಿದೆ, ಪ್ರಭಾವಿ ವ್ಯಕ್ತಿಗಳು ನನಗೆ ಗೊತ್ತು ಎಂದು ವಿವಿಧ ಆಮಿಷವೊಡ್ಡಿ ಹಣ ಪಡೆದು ವಂಚಿಸುತ್ತಿದ್ದ. ಸದ್ಯ ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.
ಕೆಲಸ ಕೊಡಿಸುವುದಾಗಿ, ಹಣ ದುಪ್ಪಟ್ಟು ಮಾಡಿಕೊಡುವುದಾಗಿ ಬರುವ ಆಮಿಷಗಳಲ್ಲಿ ವಂಚನೆಯ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ಅಂತಹ ಆಮಿಷಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ. ಜಗಲಾಸರ್ ಮನವಿ ಮಾಡಿದ್ದಾರೆ.




