ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆ ವಿಚಾರವಾಗಿ ವಿವಿಧ ಸಂಘಟನೆಗಳು ಕರೆ ನೀಡಿರುವ ಬೆಂಗಳೂರು ಬಂದ್ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಾರ್ವಜನಿಕ ಆಸ್ತಿಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬಂದ್ ಕರೆಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತಾಗಿ ಪೊಲೀಸ್ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು. ಈ ವೇಳೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು. ಬಂದ್ಗೆ ಸರ್ಕಾರ ಅಡ್ಡಿಪಡಿಸುವುದಿಲ್ಲ. ಆದರೆ ಸಾರ್ವಜನಿಕ ಆಸ್ತಿ, ನೆಮ್ಮದಿಗೆ ಭಂಗ ಬರಬಾರದು. ಹೀಗಾಗಿ ಅಗತ್ಯ ಇರುವ ಕಡೆಗೆ ಸೂಕ್ತ ಬಂದೋಬಸ್ತ್ ಮಾಡುವಂತೆ ತಾಕೀತು ಮಾಡಿದ್ದಾರೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧ ಸುಪ್ರೀಂಕೋರ್ಟ್ ಆದೇಶ ನೀಡಿದೆ. ನಾಳೆ ಸುಪ್ರೀಂಕೋರ್ಟ್ನಲ್ಲಿ ಮತ್ತೆ ಕಾವೇರಿ ವಿಚಾರ ವಿಚಾರಣೆಗೆ ಬರಲಿದೆ ಎಂದರು.
ನೀರು ಹರಿಸಲು ಸಾಧ್ಯವಿಲ್ಲ ಎಂಬ ವಾದ ಮಂಡಿಸಲಾಗಿದೆ. ಸುಪ್ರೀಂಕೋರ್ಟ್ ತಮ್ಮ ಅರ್ಜಿ ಮತ್ತು ತಮಿಳುನಾಡಿನ ಅರ್ಜಿಯನ್ನು ತಿರಸ್ಕರಿಸಿದೆ. ನಮ್ಮ ಬಳಿ ನೀರಿಲ್ಲ ಎಂದು ನಾವು ವಾದ ಮಂಡಿಸಿದ್ದೇವೆ. ನಾಳೆಯೂ ಬಲವಾದ ವಾದವನ್ನು ಸುಪ್ರೀಂಕೋರ್ಟ್ನಲ್ಲಿ ಮಂಡಿಸಲಾಗುವುದು ಎಂದು ಹೇಳಿದರು.
ಹಿಂದೆಲ್ಲ ಕಾವೇರಿ ನದಿ ನೀರಿನ ವಿವಾದ ಹುಟ್ಟಿಕೊಂಡಾಗ ಎಲ್ಲ ರಾಜಕೀಯ ಪಕ್ಷಗಳು ತಮ್ಮ ನಡುವಿನ ಭಿನ್ನಾಭಿಪ್ರಾಯವನ್ನು ಪಕ್ಕಕ್ಕಿಟ್ಟು ಒಗ್ಗಟ್ಟಿನಿಂದ ನಡೆದುಕೊಂಡಿವೆ. ಈ ವರೆಗಿನ ಎಲ್ಲ ಪಕ್ಷಗಳ ಸರ್ಕಾರಗಳು ಅನಿವಾರ್ಯವಾಗಿ ನ್ಯಾಯಾಲಯದ ಆದೇಶ ಪಾಲನೆ ಮಾಡಿರುವ ಇತಿಹಾಸ ಕೂಡಾ ನಮ್ಮ ಕಣ್ಣ ಮುಂದಿದೆ. ಈಗಿನ ವಿವಾದವನ್ನು ರಾಜ್ಯದ ಹಿತ ಮತ್ತು ನ್ಯಾಯಾಂಗದ ಗೌರವಕ್ಕೆ ಧಕ್ಕೆಯಾಗದಂತೆ ಸೂಕ್ಷ್ಮವಾಗಿ ನಿರ್ವಹಿಸಬೇಕಾಗಿದೆ’ ಎಂದು ಹೇಳಿದರು.




