ಡಿಸಿಎಂಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್

3 years ago

#Big #relief #DCM #DKSivakumar #ed #it #cbi #suprmecourt #highcourt

ದೆಹಲಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ನ್ಯಾ. ಬಿ.ಆರ್.ಗವಾಯಿ, ನ್ಯಾ.ಸಿ.ಟಿ.ರವಿಕುಮಾರ್, ನ್ಯಾ. ಸಂಜಯ್ ಕುಮಾರ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ಈ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಫೆಬ್ರುವರಿ 10ರಂದು ನೀಡಿದ್ದ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿ ಆದೇಶಿಸಿದೆ.

ಸಿಬಿಐ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು, ಸಂಸ್ಥೆಯ ಪರವಾಗಿ ಆದೇಶವಿದ್ದರೂ, ಹೈಕೋರ್ಟ್ ವಿಭಾಗೀಯ ಪೀಠ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ ಎಂದರು.

ಶಿವಕುಮಾರ್ ಪರ ವಾದ ಮಂಡಿಸಿದ ಅಭಿಷೇಕ್ ಮನು ಸಿಂಘ್ವಿ, ಸಿಬಿಐ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದೆ. ಆದರೆ, ಹೈಕೋರ್ಟ್ ವಿಭಾಗೀಯ ಪೀಠ ನೀಡಿದ ಮಧ್ಯಂತರ ಆದೇಶಗಳನ್ನು ಪ್ರಶ್ನಿಸಲು ನಿರಾಕರಿಸಿದೆ ಎಂದರು.

ವಾದ ಆಲಿಸಿದ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ, ಈ ವಿಚಾರದಲ್ಲಿ ತಾನು ಮಧ್ಯಪ್ರವೇಶಿಸುವುದಿಲ್ಲ ಮತ್ತು ತನ್ನ ಮುಂದಿರುವ ಪ್ರಕರಣವನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಹೈಕೋರ್ಟ್ಗೆ ಮನವಿ ಸಲ್ಲಿಸಿ ಎಂದು ಸಿಬಿಐ ಹೇಳಿತು.

ಫೆ. 10 ರಂದು ಕರ್ನಾಟಕ ಹೈಕೋರ್ಟ್ ಡಿ.ಕೆ.ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ವಿಚಾರಣೆಗೆ ಮಧ್ಯಂತರ ತಡೆ ನೀಡಿತ್ತು. ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವು ಕ್ರಮ ಕೈಗೊಂಡಿರುವ ವರದಿಯನ್ನು ಸಲ್ಲಿಸುವಂತೆ ತನಿಖಾ ಸಂಸ್ಥೆಗೆ ಹೈಕೋರ್ಟ್ ನಿರ್ದೇಶಿಸಿತ್ತು.

2017ರಲ್ಲಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಆದಾಯ ತೆರಿಗೆ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯವು ಶಿವಕುಮಾರ್ ವಿರುದ್ಧ ತನಿಖೆ ನಡೆಸುತ್ತಿದೆ. ಇ.ಡಿ ತನಿಖೆ ಆಧರಿಸಿ, ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದ ಅನುಮತಿ ಕೋರಿತ್ತು. ಈ ಸಂಬಂಧ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ 2019ರ ಸೆಪ್ಟೆಂಬರ್ 25ರಂದು ಅಧಿಸೂಚನೆ ಹೊರಡಿಸಿತ್ತು ಮತ್ತು 2020ರ ಅಕ್ಟೋಬರ್ 3ರಂದು ಸಿಬಿಐ ಎಫ್ಐಆರ್ ದಾಖಲಿಸಿತ್ತು.

ನಂತರ ತಮ್ಮ ವಿರುದ್ಧ ದಾಖಲಾದ ಎಫ್ಐಆರ್ ಅನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಬಳಿಕ ಅವರ ಅರ್ಜಿಯನ್ನು ಹೈಕೋರ್ಟ್ನ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಡಿಕೆಶಿ ಅರ್ಜಿಯನ್ನು ಪುರಸ್ಕರಿಸಿದ್ದ ಹೈಕೋರ್ಟ್, ಅವರ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿತ್ತು. ಜುಲೈ 17ರಂದು ಅದನ್ನು ಮೂರು ವಾರಗಳ ಕಾಲ ವಿಸ್ತರಣೆ ಮಾಡಿತ್ತು.

Leave a Reply