ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕುರಿತಂತೆ ಮಾತುಕತೆ ನಡೆದಿರುವ ಬೆನ್ನಲ್ಲೇ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಜಂಟಿ ಹೋರಾಟ ನಡೆಸಲು ತೀರ್ಮಾನಿಸಿವೆ.
ಜಂಟಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರದ ವಿರುದ್ಧ ಕೇಳಿಬರುತ್ತಿರುವ ಅಕ್ರಮಗಳ ಆರೋಪ ದೌರ್ಜನ್ಯದ ನಡೆಯ ವಿರುದ್ಧ ಸದನ ಮತ್ತು ಹೊರಗಡೆ ಉಭಯ ಪಕ್ಷಗಳು ಹೋರಾಟ ನಡೆಸಲಿವೆ ಎಂದು ಹೇಳಿದರು.
ಬಸವರಾಜ ಬೊಮ್ಮಾಯಿ ಮಾತನಾಡಿ, ಜಂಟಿ ಹೋರಾಟದ ಮೊದಲ ಭಾಗವಾಗಿ ನೈಸ್ ಯೋಜನೆ ವಿರುದ್ಧ ಜೆಡಿಎಸ್ ಜತೆಗೂಡಿ ಹೋರಾಟ ಮಾಡುವುದಾಗಿ ತಿಳಿಸಿದರು.
ಬೆಂಗಳೂರು ಮೈಸೂರು ರಸ್ತೆ ಮಾಡಬೇಕು ಅಂತ ತೀರ್ಮಾನ ಮಾಡಲಾಗಿತ್ತು. ಅವರು ಅಗತ್ಯಕ್ಕಿಂತ ಹೆಚ್ಚು ಜಮೀನು ತೆಗೆದುಕೊಂಡಿದ್ದಾರೆ. ಇತ್ತೀಚಿನ ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಹೆಚ್ಚುವರಿ ಜಮೀನು ಎಷ್ಟಿದೆ ಅಂತ ನೋಡಿ ಸರ್ಕಾರ ತೀರ್ಮಾನ ಮಾಡಬೇಕು ಅಂತ ಆದೇಶ ಮಾಡಿದೆ ಎಂದರು.
ಈಗ ನೈಸ್ ನವರು ರೈತರಿಗೆ ಜಮೀನು ಭೂ ಸ್ವಾಧೀನಕ್ಕೆ ನೊಟಿಸ್ ಕೊಡುತ್ತಿದ್ದಾರೆ. ಇದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಈಗಾಗಲೇ ಬೆಂಗಳೂರು ಮೈಸೂರು ಹೈವೆ ಅಗಿರುವುದರಿಂದ ಈ ನೈಸ್ ರಸ್ತೆ ಅಗತ್ಯವಿಲ್ಲ. ಸರ್ಕಾರ ಹೆಚ್ಚವರಿ ಜಮೀನು ವಾಪಸ್ ಪಡೆಯಬೇಕು. ಹೆಚ್ಚುವರಿ ಜಮೀನು ರಸ್ತೆಯ ಬದಲು ರಿಯಲ್ ಎಸ್ಟೇಟ್ ದಂಧೆಗೆ ಬಳಕೆಯಾಗುತ್ತದೆ. ಈ ನೈಸ್ ರಸ್ತೆ ಟೋಲ್ ಹೆಚ್ಚುವರಿ ಸಂಗ್ರಹವಾಗಿದೆ. ಈ ಬಗ್ಗೆ ಆಡಿಟ್ ಮಾಡಬೇಕು ಎಂದು ಆಗ್ರಹಿಸಿದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತನಾಡಿ, ಅಕ್ರಮಗಳ ಆಗರವಾಗಿರುವ ಹಾಗೂ ರಾಜ್ಯದ ಜನತೆಗೆ ವಂಚನೆ ಎಸಗಿರುವ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ – ನೈಸ್ ಯೋಜನೆಯನ್ನು ಸಂಪೂರ್ಣವಾಗಿ ಸರಕಾರದ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.
ರಾಜ್ಯದ ಮುಖ್ಯಮಂತ್ರಿ ಭ್ರಷ್ಟಾಚಾರದ ಬಗ್ಗೆ ಉದ್ದುದ್ದ ಮಾತನಾಡುತ್ತಾರೆ. ಆದರೆ ನೈಸ್ ರಸ್ತೆಯ ಅಕ್ರಮ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಬಸವರಾಜ ಬೊಮ್ಮಾಯಿ ಅವರ ಸರಕಾರದ ಕಾಲದಲ್ಲಿ ಈ ಅಕ್ರಮಕ್ಕೆ ಸಂಬಂಧಿಸಿದಂತೆ ಅನೇಕ ಕ್ರಮಗಳು ಜರುಗಿವೆ. ನ್ಯಾಯಾಲಯಗಳಲ್ಲಿ ನೈಸ್ ವಿರುದ್ಧ, ಸರಕಾರದ ಪರವಾಗಿ ಅನೇಕ ಆದೇಶಗಳು ಬಂದಿವೆ. ಇದಕ್ಕೆ ಹಿಂದಿನ ಬಿಜೆಪಿ ಸರಕಾರದ ಶ್ರಮಿಸಿದೆ. ಅದಕ್ಕಾಗಿ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.
ನಾಡಿನ ಹಿತಾಸಕ್ತಿ ಕಾಪಾಡಲು ನಾವು ಬಿಜೆಪಿ ಜತೆ ಹೋರಾಟಕ್ಕೆ ಮುಂದಾಗಿದ್ದೇವೆ. ಜನರ ಭೂಮಿ ಕಬಳಿಸುವ ಈ ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ಹೋರಾಡುತ್ತೇವೆ. ಸರಕಾರ ಸದನ ಸಮಿತಿ ವರದಿ ಇಟ್ಟುಕೊಂಡು ಸುಮ್ಮನಿದ್ದರೆ ಯಾರಿಗೆ ಲಾಭ? ಈ ಯೋಜನೆಯನ್ನೂ ಸ್ಕ್ರಾಪ್ ಮಾಡಿದರೆ ₹30,000 ಕೋಟಿ ಹಣ ಸಿಗುತ್ತದೆ. ಭಾಗ್ಯಗಳಿಗೆ ಅದನ್ನು ಬಳಸಿ ಎಂದು ಆಗ್ರಹಿಸಿದರು.




