ಇಂಧನ ಬೆಲೆ ಇಳಿಯಲು ಬಿಜೆಪಿ ಸೋಲಿಸಿ: ಸಿದ್ದರಾಮಯ್ಯ

4 years ago

ಬೆಂಗಳೂರು: ಯುಪಿಎ ಕಾಲದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್‌ಗೆ 125 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ 65 ರೂಪಾಯಿಗಳಾಗಿತ್ತು. ಬಿಜೆಪಿ ಸರ್ಕಾರದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್‌‌ಗೆ 82 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ 100 ರೂಪಾಯಿಗೆ ಇಳಿಸಿದ್ದು ಮಹಾನ್ ಸಾಧನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ತೈಲಬೆಲೆಯ ಮೇಲಿನ ತೆರಿಗೆ ಇಳಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ. ತೈಲ ಬೆಲೆ ಇಳಿಕೆ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಚುನಾವಣೆಯಲ್ಲಿ ಮತದಾರರು ಬಿಜೆಪಿ ಸೋಲಿಸಿದರೆ ಪೆಟ್ರೋಲ್–ಡೀಸೆಲ್ ಬೆಲೆ ಇಳಿಯುತ್ತದೆ ಎನ್ನುವ ಪಾಠವನ್ನು ಹೇಳಿಕೊಟ್ಟ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದಿದ್ದಾರೆ.

ಇದು ಪ್ರಧಾನಿಗಳು ನೀಡಿದ ದೀಪಾವಳಿ ಕೊಡುಗೆ ಅಲ್ಲ, ಇದು ದೇಶದಾದ್ಯಂತ ನಡೆದ ಉಪಚುನಾವಣೆಗಳ ಕೊಡುಗೆ. ಅಡುಗೆ ಅನಿಲ ಬೆಲೆ ಸಾವಿರ ರೂಪಾಯಿ ತಲುಪಿದೆ, ಆಹಾರ ಧಾನ್ಯ, ಖಾದ್ಯತೈಲದ ಬೆಲೆ ಏರುತ್ತಲೇ ಇದೆ. ಈ ಬೆಲೆಗಳು ಕೂಡಾ ಇಳಿಯಬೇಕಾದರೆ ಬಿಜೆಪಿಯನ್ನು ಇನ್ನಷ್ಟು ಚುನಾವಣೆಗಳಲ್ಲಿ ಮತದಾರರು ಸೋಲಿಸುತ್ತಲೇ ಇರಬೇಕು ಎಂದಿದ್ದಾರೆ.

ಸದ್ಯದಲ್ಲಿಯೇ ನಮ್ಮ ರಾಜ್ಯದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಗಳಿಗೆ ಹಾಗೂ ಬೆಂಗಳೂರು ಮಹಾನಗರಪಾಲಿಕೆಗೆ ಚುನಾವಣೆಗಳು ನಡೆಯಲಿವೆ. ನರೇಂದ್ರ ಮೋದಿ ಅವರು ಹೇಳಿಕೊಟ್ಟಿರುವ ಪಾಠವನ್ನು ಮತದಾರರು ನೆನಪಲ್ಲಿಟ್ಟುಕೊಂಡು ಮತದಾನ ನಡೆಸಬೇಕು ಎಂದು ಅವರು ಕರೆ ನೀಡಿದ್ದಾರೆ.

Leave a Reply