ಬಿಜೆಪಿಯವರಿಗೆ ಸಂವಿಧಾನ ಬದಲಾಯಿಸಲು ಬಹುಮತ ಬೇಕಾಗಿದೆ: ಸಿದ್ದರಾಮಯ್ಯ

2 years ago

ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗೆ ಅವರಿಗೆ ಬಹುಮತ ಬೇಕಾಗಿಲ್ಲ

ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನವಿರಬೇಕೆಂಬುದು ಬಿಜೆಪಿಯ ಒಳಸಂಚು

ಮೋದಿಯವರು ತಮ್ಮ ಸಂವಿಧಾನ ಬದಲಾವಣೆ ಯೋಚನೆಯನ್ನು ಅನಂತಕುಮಾರ್ ಹೆಗಡೆ ಮೂಲಕ ಹೇಳಿಸುತ್ತಿದ್ದಾರೆ

ಬೆಂಗಳೂರು: ಇಡೀ ದೇಶದ ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಬಿಜೆಪಿಯ ಈ ಯೋಚನೆಯನ್ನು ವಿರೋಧಿಸಬೇಕು. ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಬಿಜೆಪಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರ ಸಂವಿಧಾನ ಬದಲಾವಣೆ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸರ್ವಾಧಿಕಾರಿ ಧೋರಣೆಯ ಮೇಲೆ ನಂಬಿಕೆಯಿರಿಸಿದ್ದು, ಸಂವಿಧಾನ ಬದಲಾವಣೆ ಮಾಡುವ ಒಳಸಂಚನ್ನು ಮಾಡಿದ್ದಾರೆ. ಆದ್ದರಿಂದ ನರೇಂದ್ರ ಮೋದಿಯವರು ತಮ್ಮ ಈ ಯೋಚನೆಯನ್ನು ಅನಂತಕುಮಾರ್ ಮೂಲಕ ಹೇಳಿಸುತ್ತಿದ್ದಾರೆ ಎಂದರು.

ಇವರು ಕೇಂದ್ರ ಮಂತ್ರಿಯಾಗಿದ್ದಾಗಲೂ, ಈ ಮಾತನ್ನು ಹೇಳಿದ್ದರು. ಇದು ಬಿಜೆಪಿಯ ಒಳಸಂಚಾಗಿದೆ. ಸಂವಿಧಾನದ ಬಗ್ಗೆ ಅನಗತ್ಯವಾಗಿ ಮಾತನಾಡಿದ್ದಾರೆ. ಸಂವಿಧಾನದಲ್ಲಿ ಯಾವುದೇ ರೀತಿಯ ಬದಲಾವಣೆಯನ್ನು ತರಬೇಕಾದರೆ ಸರ್ಕಾರಕ್ಕೆ ಮೂರನೇ ಎರಡರಷ್ಟು ಬಹುಮತವಿರಬೇಕು. ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗೆ ಅವರಿಗೆ ಬಹುಮತ ಬೇಕಾಗಿಲ್ಲ, ಬದಲಾಗಿ ಸಂವಿಧಾನ ಬದಲಾಯಿಸಲು ಬಹುಮತ ಬೇಕಾಗಿದೆ. ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನವಿರಬೇಕೆಂಬುದು ಬಿಜೆಪಿಯ ಒಳಸಂಚು ಎಂದರು.

ಹಾಲಿ ಸಂಸದರಾಗಿರುವ ಅನಂತಕುಮಾರ್ ಹೆಗಡೆ ಅವರ ಹೇಳಿಕೆ ವೈಯಕ್ತಿಕವಾಗುತ್ತದೆಯೇ? ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲದೇ ಮನುಸ್ಮೃತಿಯ ತತ್ವಗಳನ್ನು ಜಾರಿಗೊಳಿಸುವ ಉದ್ದೇಶ ಹೊಂದಿದ್ದಾರೆ. ಆದರೆ ನಮ್ಮ ಸಂವಿಧಾನ ಸಮಸಮಾಜ ನಿರ್ಮಾಣದ ತತ್ವವನ್ನು ಹೊಂದಿದ್ದು, ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ಮತ್ತೊಂದಡೆ ಇಂತಹ ಹೇಳಿಕೆ ನೀಡಿರುವ ಅನಂತಕುಮಾರ್ ಹೆಗಡೆ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗ್ರಹಿಸಿದರು.

ಅಂಬೇಡ್ಕರ್ ಅವರನ್ನು ಪ್ರಧಾನಿ ನರೇಂದ್ರಮೋದಿಯವರು ಮುಕ್ತ ಕಂಠದಿಂದ ಹೊಗಳಿದ್ದಾರೆ. ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು ಪ್ರಧಾನಮಂತ್ರಿ ಆಗುತ್ತಿರಲಿಲ್ಲ ಎಂದಿದ್ದಾರೆ. ಆದರೆ ಅವರ ಪಕ್ಷದ ಸಂಸದರೊಬ್ಬರು ಪದೇಪದೇ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

ನಾನು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಪಕ್ಷಕ್ಕೆ ಮುಜುಗರ ತರುವ ಮಾತುಗಳನ್ನಾಡಿದರೆ ಸರಿಪಡಿಸಬೇಕು. ಆದರೆ, ಸಂಸದ ಅನಂತಕುಮಾರ್ ಅವರ ಹೇಳಿಕೆಯಿಂದ ದೂರ ಇದ್ದೇವೆ ಎಂದು ಹೇಳಿದರೆ ಸಾಲದು. ಅವರನ್ನು ಪಕ್ಷದಿಂದ ಹೊರಹಾಕಬೇಕು ಅಥವಾ ನಿಯಂತ್ರಿಸಬೇಕು. ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ ಎಂದರು.

Leave a Reply