ಬೆಂಗಳೂರು: ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಮತದಾರರಿಗೆ ನೀಡಿದ ಭರವಸೆಯಂತೆ ರಾಜ್ಯಸರ್ಕಾರ ಜನರಿಗೆ ನೀಡುತ್ತಿರುವ ಗ್ಯಾರಂಟಿ ಯೋಜನೆಗಳನ್ನು ಸಹಿಸಲಾಗದೆ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನುಡಿದಂತೆ ನಡೆಯುತ್ತಿರುವ ಸರ್ಕಾರದ ಪರವಾಗಿ ರಾಜ್ಯದ ಜನತೆ ಒಲವು ತೋರುತ್ತಿದ್ದಾರೆ. ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಅಸಹಕಾರ ತೋರಿದರೂ ರಾಜ್ಯ ಸರ್ಕಾರ ತಲೆ ಕೆಡಿಸಿಕೊಂಡಿಲ್ಲ ಇದು ಬಿಜೆಪಿ ನಾಯಕರಿಗೆ ಸಹಿಸಲಾಗುತ್ತಿಲ್ಲ ಎಂದು ದೂರಿದರು.
ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಜನತೆಗೆ ಕೊಟ್ಟಿದ್ದ ಭರವಸೆಗಳನ್ನು ಅಧಿಕಾರಕ್ಕೆ ಬಂದ ನಂತರ ಈಡೇರಿಸುತ್ತಿದೆ. ಇದು ಕಾಂಗ್ರೆಸ್‍ಗೆ ಅನುಕೂಲವಾಗಲಿದೆ ಎಂಬ ಕಾರಣಕ್ಕೆ ಬಿಜೆಪಿಗೆ ಸಹಿಸಲಾಗುತ್ತಿಲ್ಲ. ಅದಕ್ಕಾಗಿಯೇ ಅವರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು.
ಗ್ಯಾರಂಟಿ ಯೋಜನೆ ಸಮರ್ಪಕವಾಗಿ ಅನುಷ್ಠಾನವಾದರೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಅನುಕೂಲವಾಗಲಿದೆ. ಬಿಜೆಪಿಗೆ ಲಾಭವಾಗುವುದಿಲ್ಲ ಎಂಬ ಕಾರಣಕ್ಕಾಗಿ ಪ್ರತಿಭಟನೆ ಹಾದಿ ಹಿಡಿದಿದ್ದಾರೆ ಎಂದು ಟೀಕಿಸಿದರು.
ಸಾರಿಗೆ ಸಂಸ್ಥೆಗಳ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಪ್ರಾರಂಭವಾಗಿದ್ದು, ಅದರ ಪ್ರಯೋಜನವನ್ನು ಮಹಿಳೆಯರು ಪಡೆಯುತ್ತಿದ್ದಾರೆ. ಆದಷ್ಟು ಶೀಘ್ರವಾಗಿ ಉಳಿದ ಎಲ್ಲಾ ಗ್ಯಾರಂಟಿ ಯೋಜನೆಗಳು ಅನುಷ್ಠಾನವಾಗಲಿವೆ ಎಂದು ಹೇಳಿದರು.
ಬಿಟ್ ಕಾಯಿನ್: ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದ ಬಹುದೊಡ್ಡ ಹಗರಣವಾದ ಬಿಟ್ ಕಾಯಿನ್ ಪ್ರಕರಣದ ತನಿಖೆಯನ್ನು ಎಸ್‍ಐಟಿ ನಿನ್ನೆಯಿಂದ ತನಿಖೆ ಆರಂಭ ಮಾಡಿದೆ. ಎಸ್‍ಐಟಿಗೆ ತನಿಖೆ ನಡೆಸಲು ನಿರ್ದಿಷ್ಟವಾದ ಯಾವುದೇ ಗಡುವನ್ನು ನೀಡಿಲ್ಲ ಎಂದು ತಿಳಿಸಿದರು.
ಈ ತನಿಖೆಯಲ್ಲಿ ಸರ್ಕಾರ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ. ಎಸ್.ಐ.ಟಿ.ಗೆ ಮುಕ್ತ ಸ್ವಾತಂತ್ರ್ಯ ನೀಡಲಾಗಿದ್ದು ಎಲ್ಲವೂ ಬಹಿರಂಗವಾಗಬೇಕು ಎಂದರು.



