ಬೆಂಗಳೂರು: ಮಾನ್ಯ @siddaramaiah ನವರೇ, ರಾಜ್ಯ ಹಾಗೂ ಜನರ ಹಿತಾಸಕ್ತಿಯೇ ನಮ್ಮ ಮೊದಲ ಆದ್ಯತೆ, ದೇಶ ದ್ರೋಹಿ ಉಗ್ರರು ಹಾಗೂ ಪಾತಕಿಗಳಿಗೆ ಕರ್ನಾಟಕ ನೆಲೆಯಾಗಬಾರದೆಂಬುದಷ್ಟೇ ನಮ್ಮ ಪ್ರಾಮಾಣಿಕ ಕಾಳಜಿ, ಪ್ರಜಾಪ್ರಭುತ್ವದ ಹೃದಯ ಮಂದಿರ ವಿಧಾನ ಸೌಧಕ್ಕೆ ಧಾವಿಸಿ ಬಂದು ಪೋಲಿಸರ ಎದುರೇ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗುವಷ್ಟರ ಮಟ್ಟಿಗೆ ವಿದ್ರೋಹಿಗಳು ಧೈರ್ಯತೋರುತ್ತಾರೆ, ಇದರ ಬೆನ್ನಲೇ ರಾಜಧಾನಿಯಲ್ಲಿ ಬಾಂಬ್ ಸ್ಫೋಟವಾಗುತ್ತದೆ ಎಂದರೆ ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿ ಅಡಗಿ ಕುಳಿತಿದೆ ? ಎಂಬುದು ಬಹುದೊಡ್ಡ ಪ್ರಶ್ನೆಯಾಗಿ ರಾಜ್ಯದ ಜನರನ್ನು ಕಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅನಧಿಕೃತ ಎಫ್ ಎಸ್ ಎಲ್ ವರದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭೂಗತ ಶಕ್ತಿಗಳಿಗೆ ಸ್ವತಂತ್ರ್ಯ ದೊರೆತ ವಾತಾವರಣ ನಿರ್ಮಾಣವಾಗಿದೆ, ಜನರು ಆತಂಕದ ನೆರಳಿನಲ್ಲಿ ಬದುಕುವ ಸ್ಥಿತಿ ಬಂದೊದಗಿದೆ ಎಂದು ಅವರು ಹೇಳಿದ್ದಾರೆ.
‘ಬೆಂದ ಮನೆಯಲ್ಲಿ ಗಳ ಇರಿಯುವ’ ರಾಜಕಾರಣ ಮಾಡುವ ದುರ್ಗತಿ ಬಿಜೆಪಿಗೆ ಬಂದಿಲ್ಲ ವಿಧಾನ ಸೌಧದಲ್ಲೇ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೇಳಿಬಂದರೆ ನಾವು ಕೈಕಟ್ಟಿ ಕೂರಬೇಕೇ ? ಈ ಸಂಬಂಧ ಮಾಧ್ಯಮಗಳ ವರದಿ ನೀವು ನಂಬಲ್ಲಿಲ್ಲ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಆಲಿಸಲಿಲ್ಲ, ರಾಷ್ಟ್ರ ಹಿತಾಸಕ್ತಿಯ ಈ ಗಂಭೀರ ಪ್ರಕರಣದ ಬಗ್ಗೆ ತಾತ್ಸಾರ ತೋರುತ್ತಿರುವುದರ ನಿಮ್ಮ ವರ್ತನೆ ರಾಷ್ಟ್ರ ದ್ರೋಹಿಗಳನ್ನು ರಕ್ಷಿಸಲು ಆದ್ಯತೆ ನೀಡುತ್ತಿರುವಂತಿದೆ ಎಂದಿದ್ದಾರೆ.

ಖಾಸಗಿ FSL ವರದಿ ಈಗಾಗಲೇ ಈ ಕುರಿತು ಧೃಡೀಕರಣ ನೀಡಿಯಾಗಿದೆ, ಸರ್ಕಾರಿ ವರದಿ ಕೂಡ ನಿಮ್ಮ ಕೈ ಸೇರಿದೆ ಆದಾಗ್ಯೂ ವರದಿ ಇನ್ನೂ ತಲುಪಿಲ್ಲ ಎಂಬ ಹಸೀ ಸುಳ್ಳು ಹೇಳುತ್ತಿರುವ ನಿಮ್ಮ ನಡೆ, ನಿಮ್ಮ ರಾಷ್ಟ್ರ ಬದ್ಧತೆಯನ್ನು ಪ್ರಶ್ನಿಸುವಂತಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.




