ಬೆಳಗಾವಿ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ನಂತರ ಬಿಪಿಎಲ್ ಪಡಿತರ ಚೀಟಿಗೆ ತೀವ್ರ ಬೇಡಿಕೆ ಉಂಟಾಗಿದೆ. ಈಗ ಎಲ್ಲಾ ಅರ್ಹರಿಗೆ ಬಿಪಿಎಲ್ ಪಡಿತರ ಚೀಟಿ ನೀಡುವ ದೃಷ್ಟಿಯಿಂದ ಬಿಪಿಎಲ್ ಕಾರ್ಡು ಪಡೆಯಲು ನಿಗದಿಪಡಿಸಿರುವ ಆದಾಯ ಮಿತಿ ಪ್ರಮಾಣ ಹೆಚ್ಚಳ ಮಾಡಲು ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ ಎಚ್ ಮುನಿಯಪ್ಪ ವಿಧಾನಸಭೆಗೆ ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ರಾಜೇಶ್ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಪಿಎಲ್ ಕಾರ್ಡ್ ನೀಡಲು ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡ ಅನುಸರಿಸಲಾಗುತ್ತದೆ. ಕೇಂದ್ರ ವಾರ್ಷಿಕ 1,20,000 ಆದಾಯ ಇರುವ ಕುಟುಂಬವನ್ನು ಬಿಪಿಎಲ್ ಎಂದು ಘೋಷಿಸಿದೆ. ಇದು ಅವೈಜ್ಞಾನಿಕ ಎಂದು ಹೇಳಿದರು.
ಕೂಲಿ ಕಾರ್ಮಿಕರಿಗೆ ಪ್ರತಿದಿನ 500 ರೂಪಾಯಿ ಕೂಲಿ ಸಿಗಲಿದೆ. ಇದನ್ನು ಲೆಕ್ಕ ಹಾಕಿದರೆ ಇವರ ಆದಾಯ ವಾರ್ಷಿಕ ಒಂದು ಲಕ್ಷ ಎಂಬತ್ತು ಸಾವಿರ ದಾಟಲಿದೆ. ಹೀಗಾಗಿ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ನೀಡಲು ನಿಗದಿಪಡಿಸಿರುವ ಆದಾಯ ಮಿತಿ ಹೆಚ್ಚಳ ಮಾಡಲು ಸಿದ್ಧತೆ ನಡೆಸಿದೆ ಎಂದರು.
ರಾಜ್ಯದಲ್ಲಿ ಆದ್ಯತಾ ಪಡಿತರ ಚೀಟಿಗಳನ್ನು ಪಡೆಯುವ ಹಾಗೂ ಹೊರಗಿಡುವ ಬಗ್ಗೆ 2017ರಲ್ಲಿ ಮಾನದಂಡಗಳನ್ನು ರೂಪಿಸಲಾಗಿದೆ. ಇದರ ಅನ್ವಯ ಸರ್ಕಾರಿ, ಅನುದಾನಿತ ಸಂಸ್ಥೆಗಳು, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ನೌಕರರು, ಆದಾಯ, ಸೇವಾ ಹಾಗೂ ಜಿಎಸ್ಟಿ ತೆರಿಗೆ ಪಾವತಿ ಮಾಡುವ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಲಾಗುವುದಿಲ್ಲ. ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿರುವುದರಿಂದ, ತಾತ್ಕಾಲಿಕವಾಗಿ ಯಾವುದೇ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಸದ್ಯ ವೈದ್ಯಕೀಯ ಆಧಾರದಲ್ಲಿ ಮಾತ್ರ ಬಿಪಿಎಲ್ ಕಾರ್ಡ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಕುಟುಂಬದ ಸದಸ್ಯರು ನೌಕರಿಗೆ ಸೇರಿದ್ದಾರೆ ಎನ್ನುವ ಕಾರಣದಿಂದ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ, ಬಾಧಿತ ಕುಟುಂಬದವರು ನೌಕರಿಗೆ ಸೇರಿದವರು ತಮ್ಮೊಂದಿಗೆ ವಾಸವಾಗಿಲ್ಲ ಎನ್ನುವ ಕಾರಣ ನೀಡಿದಲ್ಲಿ, ಸಂಬಂಧಪಟ್ಟ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಿದರೆ 15 ದಿನದ ಒಳಗಾಗಿ ಬಿಪಿಎಲ್ ಕಾರ್ಡ್ ಪುನಃ ನೀಡಲಾಗುವುದು ಎಂದರು.




