ಬೆಳಗಾವಿ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಭೂಮಿ ಸ್ವಾಧೀನ ಪ್ರಕ್ರಿಯೆ
ಬೆಂಗಳೂರು: ಕುಂದಾನಗರಿ, ಗಡಿ ಜಿಲ್ಲೆ ಬೆಳಗಾವಿಯಲ್ಲಿನ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಭೂಮಿ ನೀಡಿರುವ ಭೂಮಾಲೀಕರಿಗೆ ಪರಿಹಾರವನ್ನು ಹೆಚ್ಚಳ ಮಾಡುವ ನಿರ್ಧಾರ ಕೈಗೊಳ್ಳುವ ವಿಚಾರವನ್ನು ಸಚಿವ ಸಂಪುಟದಲ್ಲಿ ಚರ್ಚಿಸಲು ನಿರ್ಧರಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸಂಸ್ಕರಣಾ ಘಟಕ ಸ್ಥಾಪನೆಗೆ ಭೂಸ್ವಾಧೀನ ಮಾಡಿಕೊಳ್ಳಲಾಗಿದೆ. ಇದಕ್ಕೆ ಪರಿಹಾರ ನೀಡುವ ಬಗ್ಗೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಅವರು ಲೋಕೋಪಯೋಗಿ ಹಾಗೂ ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೊಂದಿಗೆ ನಗರಾಭಿವೃದ್ಧಿ, ಆರ್ಥಿಕ ಮತ್ತು ನಗರ ನೀರು ಸರಬರಾಜು ಇಲಾಖೆ ಉನ್ನತಾಧಿಕಾರಿಗಳ ಸಭೆ ನಡೆಸಿದರು.
ಬೆಳಗಾವಿಯಲ್ಲಿ 70 ದಶಲಕ್ಷ ಲೀಟರ್ ಸಾಮರ್ಥ್ಯದ ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಾಣಕ್ಕಾಗಿ ಹಲಗಾ ಗ್ರಾಮದ 17 ಎಕರೆ 37 ಗುಂಟೆ ಮತ್ತು ಬೆಳಗಾವಿಯ 1 ಎಕರೆ ಮತ್ತು 12 ಗುಂಟೆ ಜಮೀನನ್ನು ವಶಪಡಿಸಿಕೊಳ್ಳಲಾಗಿತ್ತು. ಹತ್ತು ವರ್ಷಗಳ ಹಿಂದೆ ಒಟ್ಟು 19 ಎಕರೆ 9 ಗುಂಟೆ ಜಮೀನನ್ನು ಸ್ವಾಧೀನಪಡಿಸಿಕೊಂಡು ಅದಕ್ಕೆ ಪರಿಹಾರವನ್ನೂ ಘೋಷಿಸಲಾಗಿತ್ತು.
ಆದರೆ, ಅಂದು ಸರ್ಕಾರ ಘೋಷಿಸಿದ ಪರಿಹಾರದ ಮೊತ್ತವನ್ನು ಭೂಮಾಲೀಕರು ಒಪ್ಪದ ಕಾರಣ ನ್ಯಾಯಾಲಯದಲ್ಲಿ ಪರಿಹಾರದ ಮೊತ್ತವನ್ನು ಜಮಾ ಮಾಡಲಾಗಿತ್ತು. ಅಲ್ಲದೇ, ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ಕ್ರಮಬದ್ಧವಾಗಿದೆ ಎಂದು ರಾಜ್ಯ ಹೈಕೋರ್ಟ್ ಸರ್ಕಾರದ ಪರ ತೀರ್ಪನ್ನು ನೀಡಿತ್ತು.
ಪರಿಹಾರ ಮೊತ್ತ ಹೆಚ್ಚಳ ಮಾಡಬೇಕೆಂದು ಒತ್ತಾಯಗಳು ಕೇಳಿ ಬಂದ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಬೆಳಗಾವಿ ಜಿಲ್ಲೆಯ ಇಬ್ಬರು ಸಚಿವರೊಂದಿಗೆ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬೈರತಿ ಸುರೇಶ್, ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಜಮೀನು ನೀಡಿರುವ ರೈತರ ಬಗ್ಗೆ ತಮಗೆ ಮತ್ತು ಸರ್ಕಾರಕ್ಕೆ ಸಹಾನುಭೂತಿ ಇದೆ. ರೈತರ ಹಿತರಕ್ಷಣೆ ಜೊತೆ ಜೊತೆಯಲ್ಲೇ ಬೆಳಗಾವಿ ನಗರದ ನೈರ್ಮಲ್ಯ ಕಾಪಾಡುವುದೂ ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಭೂಮಿ ಕಳೆದುಕೊಂಡಿರುವ ರೈತರಿಗೆ ನಿಯಮಾವಳಿಯಲ್ಲಿ ಅವಕಾಶವಿದ್ದರೆ ಪರಿಹಾರ ಹೆಚ್ಚಳ ಮಾಡಬಹುದಾಗಿದೆ ಎಂದರು.
ಇದೇ ವೇಳೆ, ಅಧಿಕಾರಿಗಳು ಹತ್ತು ವರ್ಷಗಳಿಗೂ ಹಿಂದೆಯೇ ಪರಿಹಾರ ಘೋಷಣೆ ಮಾಡಿರುವುದರಿಂದ ಮತ್ತೆ ಪರಿಷ್ಕರಣೆ ಮಾಡಲು ನಿಯಮಾವಳಿಯಲ್ಲಿ ಅವಕಾಶವಿಲ್ಲ ಎಂದರು.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಎಸ್ ಟಿ ಪಿ ಘಟಕವನ್ನು ಸ್ಥಾಪನೆ ಮಾಡದಿದ್ದರೆ ನಾಗರಿಕರು ಮಲಿನ ನೀರನ್ನು ಬಳಸಬೇಕಾಗುತ್ತದೆ. ತ್ವರಿತವಾಗಿ ಯೋಜನೆಯನ್ನು ಕಾರ್ಯಗತಗೊಳಿಸಬೇಕು ಮತ್ತು ಪರಿಹಾರ ಹೆಚ್ಚಳದ ವಿಚಾರದ ಬಗ್ಗೆ ಸಚಿವ ಸಂಪುಟ ಸಭೆಯ ಮುಂದಿಟ್ಟು ನಿರ್ಧಾರ ಕೈಗೊಳ್ಳುವುದು ಸೂಕ್ತ ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ತಮ್ಮ ಮತ ಕ್ಷೇತ್ರದ ರೈತರು ಜಮೀನನ್ನು ನೀಡಿದ್ದಾರೆ. ಅವರಿಗೆ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಬೇಕು ಎಂದರು.
ನಂತರ ಮಾತನಾಡಿದ ಸಚಿವ ಬೈರತಿ ಸುರೇಶ್, ಇದೊಂದು ಅತ್ಯಂತ ಸೂಕ್ಷ್ಮ ವಿಚಾರವಾಗಿದೆ. ನಿಯಮಾವಳಿಯಲ್ಲಿ ಪರಿಹಾರ ಹೆಚ್ಚಳಕ್ಕೆ ಅವಕಾಶವಿಲ್ಲ. ಈ ಹಿನ್ನೆಲೆಯಲ್ಲಿ ಪರಿಹಾರ ಹೆಚ್ಚಳದ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸುವಂತೆ ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಆ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಬಹುದಾಗಿದೆ ಎಂದರು.
ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್, ಆರ್ಥಿಕ ಇಲಾಖೆ (ವೆಚ್ಚ) ಕಾರ್ಯದರ್ಶಿ ರೇಜು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಸೆಲ್ವಮಣಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.








