ಬಳ್ಳಾರಿ: ಪ್ರತಿಯೊಬ್ಬ ವ್ಯಕ್ತಿಗೂ ಜೀವನದ ಯಾವುದಾದಾರೂ ಸನ್ನಿವೇಶಗಳಲ್ಲಿ ಮಾನಸಿಕ ಆರೋಗ್ಯ ಸಮಸ್ಯೆ ಕಂಡುಬರುವ ಸಾಧ್ಯತೆ ಇದ್ದು, ಅಂತಹ ಸಂದರ್ಭದಲ್ಲಿ ಇನ್ನೊಬ್ಬರ ಜೊತೆ ವಿಷಯ ಹಂಚಿಕೊಳ್ಳುವ ಅಥವಾ ಸಮಸ್ಯೆಯ ತೀವ್ರತೆ ಹೆಚ್ಚಾದಾಗ ಮಾನಸಿಕ ತಜ್ಞರೊಂದಿಗೆ ತಪ್ಪದೇ ಸಮಾಲೋಚಿಸಿ ಅಥವಾ ಟೆಲಿಮನಸ್ ಸಹಾಯವಾಣಿ 14416 ಗೆ ಕರೆ ಮಾಡಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ.ರಮೇಶಬಾಬು ಮನವಿ ಮಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಕಾರ್ಯಕ್ರಮ ವಿಭಾಗ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಕ್ಷೇತ್ರ ಮಟ್ಟದ ಸಿಬ್ಬಂದಿಗೆ ಮಾನಸಿಕ ಆರೋಗ್ಯದ ನಿರ್ವಹಣೆ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ರಾಷ್ಟ್ರೀಯ ಟೆಲಿ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಟೆಲಿ ಮೆನಸ್ ಎಂಬ 14416 ಉಚಿತ ಸಹಾಯವಾಣಿ ಆರಂಭಿಸಿದ್ದು, ಯಾರಾದರೂ ವ್ಯಥೆಗೆ ಒಳಪಟ್ಟವರು, ಪರೀಕ್ಷಾ ಒತ್ತಡಕೊಳ್ಳಗಾದವರು, ಕೌಟುಂಬಿಕ ಸಮಸ್ಯೆಗೊಳಗಾದವರು, ಆತ್ಮಹತ್ಯೆ ಆಲೋಚನೆ ಮಾಡುವರು, ಮಾದಕ ವಸ್ತು ವ್ಯಸನಿಗಳು, ಸಂಬಂಧಗಳ ಸಮಸ್ಯೆಯಲ್ಲಿ ಸಿಲುಕಿರುವವರು, ಜ್ಞಾಪಕ ಶಕ್ತಿ ತೊಂದರೆ ಉಳ್ಳವರು, ಆರ್ಥಿಕ ಒತ್ತಡದಲ್ಲಿ ಇರುವವರು ಅಥವಾ ಇತರೆ ಯಾವುದೇ ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಈ ಸಹಾಯವಾಣಿಗೆ ಕರೆ ಮಾಡುವುದರ ಮೂಲಕ ಸೌಲಭ್ಯ ಪಡೆಯಬಹುದು. ಕರೆ ಮಾಡಿದವರ ವಿವರ ಗೌಪ್ಯವಾಗಿ ಇಡಲಾಗುವುದು. ಧ್ವನಿಮುದ್ರಣ ಮಾಡುವುದಿಲ್ಲ ಎಂದರು.
ಜಿಲ್ಲಾ ಮಾನಸಿಕ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ವಿರೇಂದ್ರ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಮಾನಸಿಕ ಆರೋಗ್ಯ ಸೇವೆಗಳನ್ನು ನೀಡಲು ಜಿಲ್ಲಾ ಮಟ್ಟದಿಂದ ಮನೋರೋಗ ತಜ್ಞ ಡಾ.ರೋಹನ್ ವನಗುಂದಿ ಅವರ ನೇತೃತ್ವದಲ್ಲಿ ಪ್ರತಿ ತಿಂಗಳ ಮೊದಲ ಮಂಗಳವಾರ ಸಿರುಗುಪ್ಪ, ಎರಡನೇ ಮಂಗಳವಾರ ಸಂಡೂರು, ಮೂರನೇ ಮಂಗಳವಾರ ಕಂಪ್ಲಿ, ನಾಲ್ಕನೇ ಮಂಗಳವಾರ ಕುರುಗೋಡು ಹಾಗೂ ಪ್ರತಿ ತಿಂಗಳ 16ನೇ ತಾರೀಖಿನಂದು ಮೋಕ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಪ್ತ ಸಮಾಲೋಚನೆ ಸೇವೆ ನೀಡಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಕಾರ್ಯಾಗಾರದಲ್ಲಿ ಮನೋರೋಗ ತಜ್ಞ ಡಾ.ರೋಹನ್ ವನಗುಂದಿ ಮಾನಸಿಕ ಆರೋಗ್ಯ ನಿರ್ವಹಣೆ ಕುರಿತು ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಮನೋ ಸಾಮಾಜಿಕ ಸಮಾಲೋಚಕ ಶಾಂತಕುಮಾರ್, ಮನೋಶಾಸ್ತ್ರಜ್ಞೆ ಡಾ.ಕಾವ್ಯ, ಮನೋ ಶುಶ್ರೂಷಣಾಧಿಕಾರಿ ರಂಜೀತಾ, ಈ-ಹಾಸ್ಪಿಟಲ್ ವ್ಯವಸ್ಥಾಪಕ ವೀರಭದ್ರಪ್ಪ ಸೇರಿದಂತೆ ಜಿಲ್ಲೆಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ಆಶಾ ಮೇಲ್ವಿಚಾರಕರು, ಕ್ಷಯರೋಗ ವಿಭಾಗದ ಸಿಬ್ಬಂದಿ ವರ್ಗದವರು, ಆಪ್ತಸಮಾಲೋಚಕರು ಹಾಜರಿದ್ದರು.




