ಬಳ್ಳಾರಿ, ರಾಯಚೂರು ಲೋಕಸಭೆ ಚುನಾವಣೆ ರದ್ದುಗೊಳಿಸಿ: ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಿಜೆಪಿ

2 years ago

ಬೆಂಗಳೂರು: ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರದ ಹಣದಲ್ಲಿ ಬಳ್ಳಾರಿ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.

ಮಾಜಿ ಸಚಿವ ರಮೇಶ ಜಾರಕಿಹೊಳಿ, ಬಸನಗೌಡ ಪಾಟೀಲ ಯತ್ನಾಳ್, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್, ಅಣ್ಣಾ ಸಾಹೇಬ್ ಜೊಲ್ಲೆ, ಬಿ.ವಿ.ನಾಯಕ್ ನೇತೃತ್ವದಲ್ಲಿ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಅಕ್ರಮದ ಹಿನ್ನೆಲೆಯಲ್ಲಿ ಈ ಎರಡು ಕ್ಷೇತ್ರಗಳ ಚುನಾವಣೆಯನ್ನು ರದ್ದುಗೊಳಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡುವಂತೆ ಮನವಿ ಸಲ್ಲಿಸಿದೆ.

ಪ್ರಕರಣದ ತನಿಖೆ ನಡೆಸಿರುವ ಜಾರಿ ನಿರ್ದೇಶನಾಲಯ ಮಾಜಿ ಸಚಿವ ಬಿ.ನಾಗೇಂದ್ರ ಅವರೇ ಪ್ರಮುಖ ಆರೋಪಿ ಎಂದು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖ ಮಾಡಿದ್ದಾರೆ. ನಿಗಮದ ಹಣವನ್ನು ಬಳ್ಳಾರಿ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರಗಳಿಗೆ ಬಳಸಿಕೊಂಡಿರುವುದು ಪತ್ತೆಯಾಗಿದೆ. ಹೀಗಾಗಿ ಈ ಎರಡೂ ಲೋಕಸಭಾ ಕ್ಷೇತ್ರಗಳ ಚುನಾವಣೆಯನ್ನು ರದ್ದುಗೊಳಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡುವಂತೆ ಮನವಿ ಸಲ್ಲಿಸಿದರು.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ರ ಪ್ರಕಾರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ. ಸಂವಿಧಾನ ಪರಿಚ್ಛೇದ 46 ಮತ್ತು 14ರ ಪ್ರಕಾರ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆದಿಲ್ಲ ಎಂಬುದು ಸ್ಪಷ್ಟವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸದನದಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ಒಪ್ಪಿಕೊಂಡಿದ್ದರು. ಇ.ಡಿ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲೂ ಇದು ಸಾಬೀತಾಗಿರುವುದರಿಂದ ಮಾಜಿ ಸಚಿವ ಹಾಗೂ ಹಾಲಿ ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರ ಸದಸ್ಯತ್ವವನ್ನು ಅನರ್ಹಗೊಳಿಸಲು ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ. 

ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅರುಣ್.ಎಸ್ ಹಿರೇಹಾಳ್ ಎಂಬುವವರು ಮತಗಳ ಎಣಿಕೆ ಮುಗಿಯುವ ಮೊದಲೇ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಈ ಎಲ್ಲವನ್ನು ಪರಿಗಣಿಸಿ ನಾಗೇಂದ್ರ ಸದಸ್ಯತ್ವ ಅನರ್ಹಗೊಳಿಸುವುದು ಮತ್ತು ಬಳ್ಳಾರಿ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರಗಳ ಚುನಾವಣೆಯನ್ನು ರದ್ದುಮಾಡುವಂತೆ ಕೋರಲಾಗಿದೆ. 

ರಾಜ್ಯಪಾಲರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಅರವಿಂದ ಲಿಂಬಾವಳಿ, ವಾಲ್ಮೀಕಿ ನಿಗಮದ ಹಗರಣದ ಹಣವನ್ನು ಚುನಾವಣೆಗೆ ಬಳಸಿದ್ದು, ಗ್ಯಾರಂಟಿಗಳಿಗೆ 16 ಸಾವಿರ ಕೋಟಿ ಹಣ ದುರುಪಯೋಗವಾಗಿದೆ ಎಂದು ದೂರು ಕೊಟ್ಟಿದ್ದೇವೆ ಎಂದರು.

Leave a Reply