ದೆಹಲಿ: ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸ್ಥಿತಿಗತಿಯ ಮಾಹಿತಿ ಅತ್ಯಗತ್ಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ದೆಹಲಿಯ ಕರ್ನಾಟಕ ಭವನದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಮ್ಮ ಸಂವಿಧಾನ ಸಾಮಾಜಿಕ ನ್ಯಾಯವನ್ನು ಬೆಂಬಲಿಸುತ್ತದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಸಮಾನತೆಯೆಂಬುದು ದೇಶದಲ್ಲಿ ಸ್ಥಾಪಿತವಾಗಿದೆಯೇ ಎಂಬ ಬಗ್ಗೆ ತಿಳಿದುಕೊಳ್ಳಲು ಇಂತಹ ಸಮೀಕ್ಷೆ ನಡೆಸಲೇಬೇಕಾಗುತ್ತದೆ ಎಂದರು.
ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸಬೇಕೆಂಬುದಕ್ಕೆ ರಾಹುಲ್ ಗಾಂಧಿಯವರು ಬದ್ಧರಾಗಿದ್ದಾರೆ. ಜಾತಿಗಣತಿ ಮಾಡುವ ಜೊತೆಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿದಾಗ ಮಾತ್ರ ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತದೆ. ಇದು ಭಾಗೀಧಾರಿ ನ್ಯಾಯ ಸಮ್ಮೇಳನದ ಮೂಲ ಉದ್ದೇಶವೂ ಆಗಿದೆ. ಮುಂದಿನ ದಿನಗಳಲ್ಲಿ ದೇಶದೆಲ್ಲೆಡೆ ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ ಎಂದರು.
ನಮ್ಮನ್ನು ಟೀಕಿಸುವ ಬಿಜೆಪಿಯವರು ಸಾಮಾಜಿಕ ನ್ಯಾಯದ ಪರವಾಗಿ ಎಂದೂ ಇರಲಿಲ್ಲ. ಮಂಡಲ್ ಆಯೋಗದ ವರದಿಯನ್ನು ಬಿಜೆಪಿ ವಿರೋಧಿಸಿತ್ತು. ಮಂಡಲ್ ಗೆ ಪ್ರತಿಯಾಗಿ ಕಮಂಡಲ ಯಾತ್ರೆ ಶುರು ಮಾಡಿದ್ದು ಯಾರು? ಆ ಸಂದರ್ಭದಲ್ಲಿ 200 ಆತ್ಮಹತ್ಯೆಗಳಿಗೆ ಪ್ರಚೋದನೆ ಕೊಟ್ಟವರು ಯಾರು? 1993 ನಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಜಾರಿಗೆ ತಂದಾಗ ಅದನ್ನು ವಿರೋಧಿಸಿದ್ದು ಯಾರು? ಸಂವಿಧಾನದ 74ನೇ ತಿದ್ದುಪಡಿಯನ್ನು ವಿರೋಧಿಸಿದವರು ಯಾರು? ಬಿಜೆಪಿಯವರು ಸಂವಿಧಾನವನ್ನು ಯಾವಾಗ ಗೌರವಿಸಿದ್ದಾರೆ? ಸಂವಿಧಾನ ಜಾರಿಗೆ ಬಂದಾಗ ಆರ್ಗನೈಸರ್ ಪತ್ರಿಕೆಯಲ್ಲಿ ಸಾವರ್ಕರ್, ಗೋಲ್ವಾಲ್ಕರ್ ಅವರ ಹೇಳಿಕೆಗಳನ್ನು ಗಮನಿಸಬೇಕು ಎಂದರು.
ಎಐಸಿಸಿ ಓಬಿಸಿ ಸಲಹಾ ಮಂಡಳಿಯಲ್ಲಿ ನಾನು ಓರ್ವ ಸದಸ್ಯನಾಗಿದ್ದು, ಜುಲೈ 15 ಹಾಗೂ 16 ರಂದು ಬೆಂಗಳೂರಿನಲ್ಲಿ ಮಂಡಳಿಯ ಪ್ರಥಮ ಸಭೆ ನಡೆದಿತ್ತು. ಆ ಸಭೆಯಲ್ಲಿ ಬೆಂಗಳೂರು ಘೋಷಣೆ ಸೇರಿದಂತೆ ಮೂರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು ಎಂದರು.
2015ರಲ್ಲಿ ಸಾಮಾಜಿಕ ಆರ್ಥಿಕ ಸಮೀಕ್ಷೆಯನ್ನು ಪ್ರಾರಂಭಿಸಿದ ರಾಜ್ಯ ಕರ್ನಾಟಕ. 2018ರಲ್ಲಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಈ ಜಾತಿಗಣತಿ ವರದಿಯನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ. ಹತ್ತು ವರ್ಷಗಳ ಹಳೆಯ ಅಂಕಿಅಂಶಗಳಾದ್ದರಿಂದ ಕಾನೂನಿನನ್ವಯ ಮರುಗಣತಿ ಮಾಡುವ ಅಗತ್ಯವಿದ್ದ ಕಾರಣ ಸರ್ಕಾರ ಕರ್ನಾಟಕದಲ್ಲಿ ಮರುಗಣತಿ ಮಾಡಲು ಕ್ರಮ ಕೈಗೊಳ್ಳುತ್ತಿದೆ. ಇದೇ ರೀತಿ ಎಲ್ಲ ರಾಜ್ಯಗಳಲ್ಲಿಯೂ ತೆಲಂಗಾಣ ಮಾದರಿಯಲ್ಲಿ ಜಾತಿಗಣತಿಯನ್ನು ಮಾಡಬೇಕೆಂದು ನಿರ್ಣಯಿಸಲಾಗಿದೆ ಎಂದರು.
ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿಯವರು ಹಿಂದುಳಿದ ವರ್ಗದ ಏಳಿಗೆಯ ವಿಷಯವನ್ನು ಮುಂಚೂಣಿಗೆ ತಂದ ನಂತರವಷ್ಟೇ ಕೇಂದ್ರ ಸರ್ಕಾರ ಜಾತಿಗಣತಿಯನ್ನು ತಾನು ಮಾಡುವುದಾಗಿ ಹೇಳಿದೆ. 1931ನೇ ಇಸವಿಯ ನಂತರ ದೇಶದಲ್ಲಿ ಜಾತಿಗಣತಿ ನಡೆದಿಲ್ಲ. ಈ ಸಮೀಕ್ಷೆ ಕೇವಲ ಓಬಿಸಿ ವರ್ಗಕ್ಕೆ ಸಂಬಂಧಿಸಿದ್ದಲ್ಲ, ಕರ್ನಾಟಕದ ಎಲ್ಲ ಏಳು ಕೋಟಿ ಜನರ ಸಮೀಕ್ಷೆ ನಡೆಯುತ್ತದೆ ಎಂದರು.
ಕರ್ನಾಟಕದಲ್ಲಿ ಮತಗಳವು ಆಗಿದೆ ಎಂಬ ರಾಹುಲ್ ಗಾಂಧಿಯವರ ಹೇಳಿಕೆ ಸತ್ಯವಾದುದ್ದು. ಕಳೆದ ಲೋಕಸಭಾ ಚುನಾವಣೆಯಲ್ಲಿ ಅರ್ಹ ಮತದಾರರನ್ನು ಪಟ್ಟಿಯಿಂದ ತೆಗೆಯಲಾಗಿತ್ತು ಮತ್ತು ಚುನಾವಣಾ ಕ್ಷೇತ್ರಕ್ಕೆ ಸಂಬಂಧಪಡದ ಹೊಸ ಮತದಾರರನ್ನು ಪಟ್ಟಿಯಲ್ಲಿ ಸೇರಿಸಲಾಗಿತ್ತು. ಈ ರೀತಿ ಇಡೀ ದೇಶದಲ್ಲಿ ನಡೆದಿರುವ ಸಾಧ್ಯತೆಯಿದೆ. ಆದ್ದರಿಂದ ರಾಹುಲ್ ಗಾಂಧಿಯವರು ಈ ಗಂಭೀರ ವಿಚಾರವನ್ನು ಸದನದ ಒಳಗೆ ಹಾಗೂ ಹೊರಗೆ ಪ್ರಸ್ತಾಪಿಸಿದ್ದಾರೆ ಎಂದರು.




