ಬರ ಪರಿಹಾರ ಬಿಡುಗಡೆಗೆ ಕೇಂದ್ರದ ಸಮ್ಮತಿ: ದೇಶದ ಇತಿಹಾಸದಲ್ಲೇ ಹೊಸ ಮೈಲಿಗಲ್ಲು

2 years ago

ಬೆಂಗಳೂರು: ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರ ಕಾಮಗಾರಿ ಕೈಗೊಳ್ಳಲು ಆರ್ಥಿಕ ನೆರವು ಬಿಡುಗಡೆ ಮಾಡಲು ಮಾಡಲು ಚುನಾವಣಾ ಆಯೋಗ ಒಪ್ಪಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದ್ದು, ಒಂದು ವಾರದಲ್ಲಿ ಅನುದಾನ ಬಿಡುಗಡೆ ಮಾಡುವುದಾಗಿ ಪ್ರಮಾಣ ಪತ್ರ ಸಲ್ಲಿಸಿದೆ.

ಪ್ರಾಕೃತಿಕ ವಿಕೋಪ ನಿಧಿ ಅಡಿಯಲ್ಲಿ ರಾಜ್ಯದ ಬರ ಪೀಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರ ಕಾಮಗಾರಿ ಕೈಗೊಳ್ಳಲು ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡುತ್ತಿಲ್ಲ ಎಂದು ಆರೋಪಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ರಿಟ್ ಅರ್ಜಿವಿಚಾರಣೆ ವೇಳೆ ಕೇಂದ್ರ ಸರ್ಕಾರ ಈ ಹೇಳಿಕೆ ಕೊಟ್ಟಿದ್ದು, ಅರ್ಜಿ ವಿಚಾರಣೆ ಕೈಗೆತ್ತಿಕೊಂಡ, ನ್ಯಾಯಮೂರ್ತಿ ಬಿ.ಆರ್ ಗವಾಯಿ ಹಾಗೂ ಸಂದೀಪ್ ಮೆಹ್ತಾ ಅವರಿದ್ದ ಪೀಠಕ್ಕೆ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ಈ ವಿಷಯ ತಿಳಿಸಿದರು.

ಈ ಸಂಬಂಧ ಚುನಾವಣಾ ಆಯೋಗ ಒಪ್ಪಿಗೆ ನೀಡಿದ್ದರಿಂದ ಹೆಚ್ಚಿನ ವಾದ ಅಗತ್ಯವಿಲ್ಲ. ಅಗತ್ಯವಾದ ಕ್ರಮವನ್ನು ಶೀಘ್ರವೇ ತೆಗೆದುಕೊಳ್ಳಲಾಗುವುದು ಎಂದು ಪೀಠಕ್ಕೆ ತಿಳಿಸಿದ ಅವರು, ಸೋಮವಾರಕ್ಕೆ ವಿಚಾರಣೆ ಮುಂದೂಡುವಂತೆ ಮನವಿ ಮಾಡಿಕೊಂಡರು.

ಎ.ಜಿ ತೋರಿಸಿದ ವಿಶ್ವಾಸದ ಹಿನ್ನೆಲೆಯಲ್ಲಿ ಮುಂದೂಡಲು ಯಾವುದೇ ಸಮಸ್ಯೆ ಇಲ್ಲ ಎಂದು ಕರ್ನಾಟಕದ ಪರ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಹೇಳಿದರು. ಕರ್ನಾಟಕ ವಕೀಲರ ಸಮ್ಮತಿ ಹಿನ್ನೆಲೆಯಲ್ಲಿ ನ್ಯಾಯ ಪೀಠ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.

ಪರಿಹಾರ ಬಿಡುಗಡೆ ವಿಷಯದಲ್ಲಿ ಸುಪ್ರೀಂ ಕೋರ್ಟ್ಗೆ ಕೇಂದ್ರ ಭರವಸೆ ನೀಡಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಸಂತಸ ಹಂಚಿಕೊಂಡಿರುವ ಅವರು, ಬರ ಪರಿಹಾರ ವಿಚಾರದಲ್ಲಿ ಮಧ್ಯ ಪ್ರವೇಶಿಸಿದ್ದಕ್ಕಾಗಿ ಸುಪ್ರೀಂಕೋರ್ಟ್ ಗೆ ಧನ್ಯವಾದ ತಿಳಿಸುವುದಾಗಿ ಹೇಳಿದ್ದಾರೆ.

2023ರ ಸೆಪ್ಟೆಂಬರ್ನಲ್ಲಿ ಸಲ್ಲಿಸಲಾಗಿದ್ದ ನಮ್ಮ ಮನವಿ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳದ ಕಾರಣ ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಇದೊಂದು ಮೈಲಿಗಲ್ಲು. ನ್ಯಾಯ ರಕ್ಷಣೆ ಹಾಗೂ ರಾಜ್ಯದ ಜನರ ಬರ ಪರಿಹಾರಕ್ಕಾಗಿ ನಡೆಸಿದ ಸುದೀರ್ಘ ಹೋರಾಟಕ್ಕೆ ಯಶಸ್ಸು ಸಿಕ್ಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅರ್ಜಿ ವಿಚಾರಣೆ ವೇಳೆ ಕೋರ್ಟ್ ನಲ್ಲಿ ಹಾಜರಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರತಿಕ್ರಿಯೆ ನೀಡಿ, ಕರ್ನಾಟಕ ರಾಜ್ಯಕ್ಕೆ ಬರ ನಿರ್ವಹಣೆ ಅನುದಾನ ಪಾವತಿ ವಿಚಾರವಾಗಿ ಒಂದು ವಾರದೊಳಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ಇದಕ್ಕೆ ಸಂಬಂಧಪಟ್ಟಂತಹ ಪೂರ್ವಾನುಮತಿಗಳನ್ನು ಚುನಾವಣಾ ಆಯೋಗಗಳಿಂದ ಪಡೆಯಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿದ್ದು, ರಾಜ್ಯಸರ್ಕಾರದ ಕಾನೂನು ಸಮರಕ್ಕೆ ಜಯ ಸಿಕ್ಕಿದೆ ಎಂದರು.

ದೇಶದ ಇತಿಹಾಸದಲ್ಲೇ ಇಂತಹ ಸಂದರ್ಭಗಳು ಒದಗಿಬಂದಿರಲಿಲ್ಲ. ನಿಯಮಾನುಸಾರ ರಾಜ್ಯದ ಜನರಿಗೆ ದೊರೆಯಬೇಕಾಗಿದ್ದ ಪರಿಹಾರಕ್ಕಾಗಿ ನ್ಯಾಯಾಲಯದ ಮೆಟ್ಟಿಲು ಹತ್ತುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈಗ ಪ್ರಕರಣ ಒಂದು ಹಂತಕ್ಕೆ ಬಂದಿದೆ. ಕೇಂದ್ರ ಸರ್ಕಾರ ಒತ್ತಡಕ್ಕೆ ಮಣಿದು ತನ್ನ ಅಭಿಪ್ರಾಯವನ್ನು ತಿಳಿಸಿದೆ. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಗೆ ಧನ್ಯವಾದ ಎಂದರು.

Leave a Reply