ಬ್ಯಾನರ್ ಕಟ್ಟುವ ವಿಚಾರಕ್ಕೆ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

3 years ago

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರವಾಗಿರುವ ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು, ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಬ್ಯಾನರ್ ಕಟ್ಟುವ ವಿಚಾರಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗುತ್ತಿತ್ತು. ಇದನ್ನು ತಿಳಿದು ಸ್ಥಳಕ್ಕೆ ತೆರಳಿ‌ ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಗಾಯಗೊಂಡ ಹೆಡ್ ಕಾನ್ಸ್ ಟೇಬಲ್ ಹೆಚ್ ಸಿ ವರದರಾಜು ಗಲಾಟೆ ಸಂಬಂಧಿಸಿದಂತೆ ನೀಡಿದ ದೂರು ಆಧರಿಸಿ ಕಾಂಗ್ರೆಸ್ ಹಾಗೂ ಬಿಜೆಪಿಯ 36 ಮಂದಿ ಕಾರ್ಯಕರ್ತರ ವಿರುದ್ದ ಎಫ್ಐಆರ್ ದಾಖಲಾಗಿದೆ. ಹಾಗೆಯೇ ಕಾಂಗ್ರೆಸ್ ಕಾರ್ಯಕರ್ತೆ ಪ್ರೇಮಲತಾ ಹಾಗೂ ಬಿಜೆಪಿಯ ರಮ್ಯ ಎಂಬುವವರು ಕೂಡ ದೂರು ನೀಡಿದ್ದಾರೆ.

ವಿಜಯನಗರದ ಎಂ.ಸಿ.ಲೇಔಟ್‌ನ ಬಿಜಿಎಸ್ ಆಟದ ಮೈದಾನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿತ್ತು. ಕಾಂಗ್ರೆಸ್‌ನ ಮಾಜಿ ಶಾಸಕ ಪ್ರಿಯಕೃಷ್ಣ ಬೆಂಬಲಿಗರಿಂದ ಸಚಿವ ಸೋಮಣ್ಣ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪ ಮಾಡಲಾಗಿತ್ತು.

ಮಾರಾಮಾರಿಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ವಿಜಯನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಾರ್ಚ್ 19ರಂದು ಕಾಂಗ್ರೆಸ್ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ಕಾಂಗ್ರೆಸ್, ಪಕ್ಷದ ಕಾರ್ಯಕ್ರಮವನ್ನು ಹೊರತುಪಡಿಸಿ, ಬೇರೆ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಿದೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವೇಳೆ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು ಮಾರಾಮಾರಿ ನಡೆದಿತ್ತು.

Leave a Reply