ದೆಹಲಿ ದಂಡ ಯಾತ್ರೆಗೆ ಹೊರಟ ಬೊಮ್ಮಾಯಿ: ಬೆಳಗಾವಿ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಅವಕಾಶ ಸಾಧ್ಯತೆ!

4 years ago

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ಕಾಲ ದೆಹಲಿಗೆ ತೆರಳುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಈಗ ಮತ್ತೆ ಚಟುವಟಿಕೆಗಳು ಗರಿಗೆದರಲಾರಂಭಿಸಿವೆ. ಅದರಲ್ಲೂ ಪ್ರಮುಖವಾಗಿ ಬೆಳಗಾವಿ ಜಿಲ್ಲೆಯ ಹಿಡಿತ ಸಾಧಿಸುವ ವಿಷಯದಲ್ಲಿ ಲಾಭಿ ಜೋರಾಗಿದೆ.

ಸರ್ಕಾರದ ಅವಧಿ ಕೇವಲ ನಾಲ್ಕು ತಿಂಗಳು ಮಾತ್ರ ಉಳಿದಿದ್ದರೂ ಸಂಪುಟ ಸೇರುವ ಮೂಲಕ ಜಿಲ್ಲೆಯ ರಾಜಕಾರಣದ ಮೇಲೆ ಹಿಡಿತ ಸಾಧಿಸಬೇಕೆಂದು ಮಾಜಿ ಮಂತ್ರಿಗಳಾದ ಲಕ್ಷ್ಮಣ ಸವದಿ ಮತ್ತು ರಮೇಶ್ ಜಾರಕಿಹೊಳಿ ಕಸರತ್ತು ನಡೆಸಿದ್ದಾರೆ.

ಮುಖ್ಯಮಂತ್ರಿ ದೆಹಲಿ ಭೇಟಿಯ ವೇಳೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಮತ್ತಿತರ ನಾಯಕರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬೊಮ್ಮಾಯಿ ಅವರು ಸಂಪುಟ ವಿಸ್ತರಣೆ ವಿಚಾರವನ್ನು ಪ್ರಸ್ತಾಪಿಸಿದ್ದು, ಆಗಲಿ, ತ್ವರಿತವಾಗಿ ಮಾಡಿ, ಅದಕ್ಕೂ ಮುನ್ನ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಮಾತನಾಡಿ ಎಂದು ಹೇಳಿದ್ದಾಗಿ ಮೂಲಗಳು ತಿಳಿಸಿವೆ.

ಬೊಮ್ಮಾಯಿ ಸಂಪುಟದಲ್ಲಿ ಈಗ ಒಟ್ಟು ಆರು ಸಚಿವ ಸ್ಥಾನಗಳು ಖಾಲಿ ಇದ್ದು, ವಿಸ್ತರಣೆಗೆ ಹಸಿರು ನಿಶಾನೆ ಸಿಕ್ಕಿದರೆ ಯಾವುದೇ ಸಂದರ್ಭದಲ್ಲಿ ಪ್ರಮಾಣ ವಚನ ಸ್ವೀಕಾರ ನಡೆಯಬಹುದು ಎನ್ನಲಾಗುತ್ತಿದೆ.

Leave a Reply