ಬೆಂಗಳೂರು: ಐದು ವರ್ಷ ಕಾಲ ನಾನೇ ರಾಜ್ಯದ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಘೋಷಿಸುವ ಮೂಲಕ ಅಧಿಕಾರ ಹಸ್ತಾಂತರ ಪ್ರಕ್ರಿಯೆ ತೆರೆಮರೆಗೆ ಸರಿಯಿತು ಎಂದು ಹೇಳುತ್ತಿರುವಾಗಲೇ ಮತ್ತೊಮ್ಮೆ ಈ ವಿಚಾರ ಪ್ರತಿಧ್ವನಿಸತೊಡಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಭಾಗೀದಾರ ನ್ಯಾಯ ಸಮ್ಮೇಳನ ಸೇರಿದಂತೆ ಹಲವಾರು ವಿಚಾರಗಳ ಕುರಿತಂತೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಜೊತೆ ಮಾತುಕತೆ ನಡೆಸಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿರುವ ಬೆನ್ನಲ್ಲೇ ಮತ್ತೆ ಈ ಕುರಿತ ಚರ್ಚೆ ಆರಂಭಗೊಂಡಿದೆ.
ಆಗಸ್ಟ್ ಎರಡರಂದು ಗೃಹಮಂತ್ರಿ ಡಾ. ಜಿ ಪರಮೇಶ್ವರ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಎಲ್ಲಾ ಮಂತ್ರಿಗಳು ಮತ್ತು ಶಾಸಕರು ಸಭೆ ಸೇರುತ್ತಿದ್ದಾರೆ. ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಒಳ ಮೀಸಲಾತಿ ನೀಡುವ ಸಂಬಂಧ ರಚನೆಯಾಗಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಆಯೋಗ ಆಗಸ್ಟ್ ನಾಲ್ಕರಂದು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸಮುದಾಯದ ಹಿತ ಕಾಪಾಡುವ ದೃಷ್ಟಿಯಿಂದ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಕುರಿತು ಚರ್ಚಿಸಲು ಸಭೆ ಸೇರಲಾಗುತ್ತಿದೆ ಎಂದು ಹೇಳಲಾಗಿದೆ.
ನಾಗಮೋಹನ್ ದಾಸ್ ನೇತೃತ್ವದ ಆಯೋಗದ ವರದಿ ಸರ್ಕಾರಕ್ಕೆ ಸಲ್ಲಿಕೆಯಾದ ಒಂದೆರಡು ವಾರಗಳಲ್ಲಿಯೇ ಅಧ್ಯಯನ ಪೂರ್ಣಗೊಳಿಸಿ ಒಳ ಮೀಸಲಾತಿ ಜಾರಿಗೊಳಿಸುವ ಕುರಿತಂತೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರಲು ಕೈಗೊಳ್ಳಬೇಕಾದ ಕ್ರಮಗಳ ಕುರಿತಾಗಿ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಒಳ ಮೀಸಲಾತಿ ವಿಚಾರದಲ್ಲಿ ಪರಿಶಿಷ್ಟ ಜಾತಿಯ ಎಡಗೈ ಮತ್ತು ಬಲಗೈ ಹಾಗೂ ಸ್ಪೃಶ್ಯ ಸಮುದಾಯ ಎಂದು ಹೇಳಲಾಗುತ್ತಿರುವ ಲಂಬಾಣಿ ಹಾಗೂ ಬೋವಿ ಸಮುದಾಯ ವಿಭಿನ್ನ ಅಭಿಪ್ರಾಯಗಳನ್ನು ಹೊಂದಿವೆ. ಹೀಗಾಗಿ ಎಲ್ಲರನ್ನು ಒಗ್ಗೂಡಿಸಿ ಒಮ್ಮತದೊಂದಿಗೆ ಒಳ ಮೀಸಲಾತಿ ಕುರಿತು ತೀರ್ಮಾನ ತೆಗೆದುಕೊಳ್ಳಲು ಸರ್ಕಾರದ ಮೇಲೆ ಒತ್ತಡ ಹೇರಲು ಸಭೆ ಆಯೋಜಿಸಲಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಇದನ್ನು ಹೊರತಾಗಿ ಈ ಸಭೆಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಕೂಡ ಪ್ರಮುಖವಾಗಿ ಚರ್ಚೆಗೆ ಬರಲಿದೆ ಎಂದು ಹೇಳಲಾಗುತ್ತಿದೆ.
ದಲಿತ ಸಿಎಂ ವಿಷಯ ಮತ್ತೆ ಮುನ್ನೆಲೆಗೆ: ಕಳೆದ ವಿಧಾನಸಭೆ ಚುನಾವಣೆ ಮುಗಿದ ನಂತರ ಅಧಿಕಾರ ಹಸ್ತಾಂತರ ಕುರಿತು ಒಪ್ಪಂದ ಆಗಿದ್ದರೆ ಅದನ್ನು ಹೈಕಮಾಂಡ್ ಜಾರಿಗೆ ತರಬೇಕು. ಸಿಎಂ ಸಿದ್ದರಾಮಯ್ಯ ಅವರಿಂದ ತೆರವಾಗುವ ಸ್ಥಾನಕ್ಕೆ ದಲಿತ ಸಮುದಾಯಕ್ಕೆ ಸೇರಿದ ಯಾವುದೇ ನಾಯಕನನ್ನು ನೇಮಕ ಮಾಡಬಹುದು ಎಂದು ಒಮ್ಮತದಿಂದ ಹೈಕಮಾಂಡ್ ಗಮನಕ್ಕೆ ತರಲು ಸಭೆ ತೀರ್ಮಾನ ಕೈಗೊಳ್ಳಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಇಲ್ಲಿಯವರೆಗೆ ದಲಿತ ಸಮುದಾಯಕ್ಕೆ ಸೇರಿದ ಯಾವುದೇ ನಾಯಕರು ಮುಖ್ಯಮಂತ್ರಿ ಹುದ್ದೆ ಅಲಂಕರಿಸಿಲ್ಲ. ಈಗ ಕಾಂಗ್ರೆಸ್ ಪಕ್ಷಕ್ಕೆ ಅಂತಹ ಇತಿಹಾಸ ನಿರ್ಮಿಸುವ ಅವಕಾಶ ಲಭಿಸಿದೆ. ಕಾಂಗ್ರೆಸ್ಸಿನಿಂದ ಅತ್ಯಧಿಕ ಸಂಖ್ಯೆಯ ಶಾಸಕರು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ದಲಿತ ಸಮುದಾಯಕ್ಕೆ ಸೇರಿದವರೊಬ್ಬರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಒತ್ತಡ ಇರಲು ಸಭೆಯಲ್ಲಿ ನಿರ್ಧರಿಸಲು ಚಿಂತನೆ ನಡೆದಿದೆ.
ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಒಂದು ಅವಧಿಯನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಅವರನ್ನು ರಾಜ್ಯ ರಾಜಕಾರಣಕ್ಕೆ ಬಿಡುಗಡೆ ಮಾಡಿ ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಬೇಕು. ಒಂದು ವೇಳೆ ಅವರು ಒಪ್ಪದೇ ಹೋದಲ್ಲಿ ದಲಿತ ಸಮುದಾಯಕ್ಕೆ ಸೇರಿದ ಜಿ ಪರಮೇಶ್ವರ್, ಕೆ ಎಚ್ ಮುನಿಯಪ್ಪ ಅಥವಾ ಎಚ್ ಎಸ್ ಸಿ ಮಹದೇವಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಹೈಕಮಾಂಡ್ ಗೆ ಮನವರಿಕೆ ಮಾಡಿಕೊಳ್ಳಲು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಈ ಸಭೆ ಚರ್ಚೆ ನಡೆಸಲಿದೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.




