ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಸಹೋದ್ಯೋಗಿಗಳು

2 years ago

ಬೆಂಗಳೂರು: ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಆಕ್ರಮ ಆರೋಪದಲ್ಲಿ CM ಸಿದ್ದರಾಮಯ್ಯ ವಿರುದ್ಧ ತನಿಖೆ ಕೋರಿ ಖಾಸಗಿ ದೂರು ಸಲ್ಲಿಸಲು ರಾಜ್ಯಪಾಲರು ಅನುಮತಿ ನೀಡಿರುವ ಬೆನ್ನಲ್ಲೇ DCM ಸೇರಿದಂತೆ ಸಂಪುಟದ ಎಲ್ಲ ಸದಸ್ಯರು ಸಿದ್ದರಾಮಯ್ಯ ಬೆಂಬಲಕ್ಕೆ ಧಾವಿಸಿದ್ದಾರೆ.

ರಾಜ್ಯಪಾಲರ ನಿರ್ಧಾರದ ವಿಷಯ ತಿಳಿಯುತ್ತಿದ್ದಂತೆ ಎಲ್ಲಾ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿ ಬೆಂಬಲ ಘೋಷಿಸಿದರು. ಆನಂತರ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿ ರಾಜ್ಯಪಾಲರು ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಖಾಸಗಿ ದೂರು ಸಲ್ಲಿಸಲು ರಾಜ್ಯಪಾಲರು ನೀಡಿರುವ ಕ್ರಮ ಕಾನೂನುಬಾಹಿರವಾಗಿದ್ದು, ಇದರ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದರು.

ರಾಜ್ಯಪಾಲರ ನಡೆಯನ್ನು ವಿರೋಧಿಸಿ ನಾವು ರಾಜಕೀಯ ಹೋರಾಟ ಮತ್ತು ಕಾನೂನು ಸಮರಕ್ಕೆ ಸಿದ್ದರಾಗಿದ್ದೇವೆ. ರಾಜ್ಯಪಾಲರ ನಡೆ ಸಂವಿಧಾನ ವಿರೋಧಿ. ರಾಜ್ಯ ಸರ್ಕಾರವನ್ನು ಉರುಳಿಸುವ ನಡೆಸುವ ಹುನ್ನಾರದ ಭಾಗ ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ನಾವೆಲ್ಲರೂ ಅವರ ಬೆನ್ನಿಗೆ ನಿಲ್ಲುತ್ತೇವೆ ಎಂದರು. ದೂ

ರಾಜ್ಯಪಾಲರ ಕಚೇರಿಯನ್ನು ಬಿಜೆಪಿಯವರು ದುರ್ಬಳಕೆ ಮಾಡಿಕೊಂಡಿದ್ದಾರೆ‌. ರಾಜಕೀಯ ಷಡ್ಯಂತ್ರವಿದು. ಮುಖ್ಯಮಂತ್ರಿ ತಪ್ಪು ಮಾಡದಿದ್ದರೂ ಅವರ ವಿಚಾರಣೆಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದರು.

ಸಿದ್ದರಾಮಯ್ಯ ಅವರು ನಮ್ಮ ಮುಖ್ಯಮಂತ್ರಿಗಳು, ಅವರು ಮುಖ್ಯಮಂತ್ರಿಗಳಾಗಿಯೇ ಮುಂದುವರಿಯುತ್ತಾರೆ. ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ನಾವು ಒಟ್ಟಾಗಿ ರಾಜ್ಯದ ಜನರ ಸೇವೆ ಮುಂದುವರಿಸುತ್ತೇವೆ. ಕೇವಲ ಕಾಂಗ್ರೆಸ್ ಪಕ್ಷ ಮಾತ್ರವಲ್ಲ, ಇಡೀ ಇಂಡಿಯಾ ಒಕ್ಕೂಟ ನಮ್ಮ ಮುಖ್ಯಮಂತ್ರಿಗಳ ಬೆನ್ನಿಗೆ ನಿಲ್ಲಲಿದೆ ಎಂದರು.

ಮುಖ್ಯಮಂತ್ರಿಗಳ ವಿರುದ್ಧ ಸುಳ್ಳು ಪ್ರಕರಣ ಸೃಷ್ಟಿಸಲಾಗಿದೆ. ಹೀಗಾಗಿ ಕಾನೂನು ಚೌಕಟ್ಟಿನಲ್ಲಿ ಹೋರಾಟ ಮುಂದುವರಿಸುತ್ತೇವೆ. ಇದರ ಜತೆಗೆ ರಾಜಕೀಯವಾಗಿಯೂ ಜನರ ಮಧ್ಯೆ ಹೋರಾಟ ಮಾಡಲಾಗುವುದು ಎಂದರು.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಮುಖ್ಯಮಂತ್ರಿ ಮೇಲೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿರುವುದು ಕಾನೂನು ಬಾಹಿರ ಎಂದರು.

ಈ ಷಡ್ಯಂತ್ರದಲ್ಲಿ ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಕುಮಾರಸ್ವಾಮಿ ಅವರು ಮುಂದಿನ 8-10 ತಿಂಗಳಲ್ಲಿ ಈ ಸರ್ಕಾರವನ್ನು ಕಿತ್ತೊಗೆಯುತ್ತೇವೆ ಎಂದು ಹೇಳಿಕೆ ನೀಡಿದ್ದು, ಇದಕ್ಕೆ ಪೂರಕವಾಗಿ ಈ ಷಡ್ಯಂತ್ರ ನಡೆಯುತ್ತಿದೆ ಎಂದರು.

Leave a Reply