ಜಿಎಸ್ಟಿ ಮೋಸದ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ: ನಿರ್ಮಲಾ ಸೀತಾರಾಮನ್ ಅವರಿಗೆ ಸವಾಲೊಡ್ಡಿದ ಕೃಷ್ಣ ಬೈರೇಗೌಡ

2 years ago

ರಾಜ್ಯಕ್ಕೆ ಒಟ್ಟಾರೆ ರೂ.11495 ಕೋಟಿ ಹಣ ಕೇಂದ್ರದಿಂದ ಬಾಕಿ

ಹಣಕಾಸು ಆಯೋಗದ ಶಿಫಾರಸು ಹಿಂಪಡೆಯುವಂತೆ ಕೋರಿದ ಸೀತಾರಾಮನ್

ಓಟು ಒತ್ತೋಕೆ ಕರ್ನಾಟಕ ಬೇಕು, ನಮ್ಮ ಪಾಲಿನ ಹಣ ಕೇಳಿದರೆ ಮಾತ್ರ ಮೋಸವಾ?

ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದಿಂದ ಬಿಡಿಗಾಸೂ ಬೇಕಾಗಿಲ್ಲ: ಕೃಷ್ಣ ಬೈರೇಗೌಡ

ಬೆಂಗಳೂರು: ಕರ್ನಾಟದಿಂದ ರಾಜ್ಯಸಭೆಗೆ ಆಯ್ಕೆಯಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದಲೇ ರಾಜ್ಯಕ್ಕೆ ತೆರಿಗೆ ಹಂಚಿಕೆ ಅನುದಾನದಲ್ಲಿ ಅನ್ಯಾಯವಾಗುತ್ತಿದೆ. ಮಾರ್ಚ್ 31ಕ್ಕೆ ಅವರು ಮೈಸೂರಿಗೆ ಆಗಮಿಸುತ್ತಿದ್ದು, ಈ ಬಗ್ಗೆ ಬಹಿರಂಗ ಚರ್ಚೆಗೆ ಅವರು ಸಿದ್ದರಿದ್ದಾರಾ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸವಾಲೆಸೆದರು.

ರಾಜ್ಯಕ್ಕೆ ಜಿಎಸ್ಟಿ ತೆರಿಗೆ ಹಂಚಿಕೆ ಬಾಕಿ ಬಗ್ಗೆ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಸಚಿವೆ ನಿರ್ಮಲಾ ಸೀತಾರಾಮನ್, “ ಕರ್ನಾಟಕಕ್ಕೆ ನೀಡಬೇಕಿರುವ ತೆರಿಗೆ ಪಾಲಿನಲ್ಲಿ ಯಾವುದೇ ಹಣ ಬಾಕಿ ಇಲ್ಲ” ಎಂದಿದ್ದರು. ಈ ಹಿನ್ನೆಲೆಯಲ್ಲಿ ವಿಕಾಸಸೌಧದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಸಚಿವ ಕೃಷ್ಣ ಬೈರೇಗೌಡ, ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳನ್ನು ದಾಖಲೆ ಸಮೇತ ಬಿಚ್ಚಿಟ್ಟರು.

ಯಾವುದೇ ರಾಜ್ಯಕ್ಕೆ 2019-20ರಲ್ಲಿ ಕೊಟ್ಟಿದ್ದಕ್ಕಿಂತ ಕಡಿಮೆ ಅನುದಾನವನ್ನು ಕೊಡುವಂತಿಲ್ಲ ಎಂದು ಹಣಕಾಸು ಆಯೋಗ ಹೇಳುತ್ತದೆ. ಹಣಕಾಸು ಆಯೋಗದವರು 2019-20ರಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಬಂದ ತೆರಿಗೆ ಪಾಲಿಗಿಂತ 2020-21 ರಲ್ಲಿ ರೂ. 5495 ಕೋಟಿ ಹಣ ಕಡಿಮೆಯಾಗಿತ್ತು. ಈ ಹಣವನ್ನು ರಾಜ್ಯಕ್ಕೆ ತುಂಬಿಕೊಡಬೇಕು ಎಂದು ಸ್ವತಃ ಹಣಕಾಸು ಆಯೋಗ ಶಿಫಾರಸ್ಸು ಮಾಡಿದರೂ ಸಚಿವೆ ನಿರ್ಮಲಾ ಸೀತಾರಾಮನ್ ಇದನ್ನು ತಡೆಹಿಡಿದದ್ದು ಏಕೆ? ಎಂದು ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು.

ರಾಜ್ಯದ ಪಾಲಿನ ನ್ಯಾಯಯುತ ತೆರಿಗೆ ಹಂಚಿಕೆ ನಷ್ಟ ಪರಿಹಾರ ಕೇಳಿದರೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2021ನೇ ವರ್ಷದ ಅಂತಿಮ ವರದಿಯಲ್ಲಿ ಹಣಕಾಸು ಆಯೋಗ ಶಿಫಾರಸ್ಸು ಮಾಡಿಲ್ಲ ಎನ್ನುತ್ತಿದ್ದಾರೆ. ಆದರೆ, ಹಣಕಾಸು ಆಯೋಗದ ಅಂತಿಮ ವರದಿಯ 36ನೇ ಪುಟದಲ್ಲಿ ಕರ್ನಾಟಕಕ್ಕೆ ನಷ್ಟ ತುಂಬಿಕೊಡಬೇಕು ಎಂದು ಬರೆಯಲಾಗಿದೆಯಲ್ಲ ಇದೇನು? ಎಂದು ಪ್ರಶ್ನಿಸಿದರು.

2019-20ರಲ್ಲಿ ರಾಜ್ಯಕ್ಕೆ ಕೇಂದ್ರದಿಂದ ರೂ. 36,675 ಕೋಟಿ ತೆರಿಗೆ ಪಾಲು ಬಂದಿತ್ತು. 2020-21ಕ್ಕೆ ಕೇವಲ ರೂ.31,180 ಕೋಟಿಗೆ ಕುಸಿದಿತ್ತು. ಹೀಗಾಗಿ ರಾಜ್ಯಕ್ಕೆ ಆಗಿರುವ ನಷ್ಟ ರೂ. 5,495 ಕೋಟಿ ಹಣವನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ಹಣಕಾಸು ಆಯೋಗ ಶಿಫಾರಸು ಮಾಡಿದೆ. ಆದರೆ, ಈ ಹಣ ಈವರೆಗೆ ರಾಜ್ಯಕ್ಕೆ ಬಂದಿಲ್ಲ. 2021-26ನೇ ಸಾಲಿನಲ್ಲಿ ರೂ.6,000 ಕೋಟಿ ಶಿಫಾರಸು ಮಾಡಲಾಗಿದೆ. ಒಟ್ಟಾರೆ, ರೂ.11,495 ಕೋಟಿ ಹಣ ರಾಜ್ಯಕ್ಕೆ ಬರಬೇಕಿದೆ. ಈ ಬಗ್ಗೆ ಪ್ರಶ್ನೆ ಮಾಡಿದರೆ ನಿರ್ಮಲಾ ಸೀತಾರಾಮನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳುತ್ತಿರುವುದು ಸುಳ್ಳು ಎನ್ನುತ್ತಿದ್ದಾರೆ ಎಂದರು.

ಅಸಲಿಗೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಸೆಪ್ಟೆಂಬರ್ 17 2020ರಲ್ಲಿ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಲು ಕೋರಿದ್ದರು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದರು. ಈ ಎಲ್ಲಾ ವಿಚಾರಗಳೂ ದಿನಪತ್ರಿಕೆಗಳಲ್ಲೂ ಸಹ ವರದಿಯಾಗಿತ್ತು. ಹಾಗಾದರೆ ಯಡಿಯೂರಪ್ಪ ಹಾಗೂ ಬೊಮ್ಮಾಯಿಯವರೂ ಸಹ ಸುಳ್ಳು ಹೇಳಿದ್ದರಾ? ಎಂದು ಪ್ರಶ್ನಿಸಿದರು.

ಸಚಿವೆ ನಿರ್ಮಲಾ ಸೀತಾರಾಮನ್ ಅವರು ಒಂದೆಡೆ ಹಣಕಾಸು ಆಯೋಗದ ಒಂದೇ ಒಂದು ಶಿಫಾರಸ್ಸನ್ನು ಸಹ ನಾವು ತಿದ್ದಲು ಹೋಗುವುದಿಲ್ಲ ಎನ್ನುತ್ತಾರೆ. ಮತ್ತೊಂದೆಡೆ ರಾಜ್ಯಗಳಿಗೆ ನೀಡುವ ವಿಶೇಷ ಅನುದಾನವನ್ನು ಹಿಂಪಡೆಯುವಂತೆ ಹಣಕಾಸು ಆಯೋಗಕ್ಕೆ ಮನವಿ ಮಾಡಲಾಗಿದೆ ಎಂದು ಲೋಕಸಭೆಯಲ್ಲೇ ಉತ್ತರ ನೀಡುತ್ತಾರೆ. ಹಾಗಾದ್ರೆ ರಾಜ್ಯದ ಪಾಲಿನ ಹಣವನ್ನು ತಡೆಹಿಡಿಯಲು ಮಾತ್ರ ಇವರ ಕಾನೂನುಗಳು ಇರುವುದಾ? ಎಂದರು.

ನಾವು ಕೇಳುತ್ತಿರುವುದು ಭಿಕ್ಷೆಯಲ್ಲ!: ಹಣಕಾಸು ಆಯೋಗದ ಶಿಫಾರಸು ಮಾಡಿದ ನಮ್ಮ ಅನುದಾನವನ್ನು ನಾವು ಸಂವಿಧಾನಾತ್ಮಕವಾಗಿಯೇ ಕೇಳುತ್ತಿದ್ದೇವೆಯೇ ವಿನಃ ನಾವೇನು ಭಿಕ್ಷೆ ಕೇಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ರಾಜ್ಯದ ಹಕ್ಕನ್ನು ಕೇಳಿದರೆ ಕೇಂದ್ರ ಸರ್ಕಾರ ನಾವು ಸುಳ್ಳು ಹೇಳುತ್ತಿದ್ದೇವೆ ಎಂದು ಆರೋಪ ಹೊರಿಸಿ ಕರ್ನಾಟಕದ ಜನರಿಗೆ ಅನ್ಯಾಯ ಮಾಡುತ್ತಿದೆ. ಸ್ವತಃ ಕರ್ನಾಟಕದಿಂದ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ಅವರು ಹೀಗೆ ರಾಜ್ಯದ ಹಿತದ ವಿಚಾರದಲ್ಲಿ ಸುಳ್ಳು ಹೇಳಿ ಜನರನ್ನು ಗೊಂದಲಕ್ಕೀಡು ಮಾಡುತ್ತಿರುವುದು ಸರಿಯಲ್ಲ. ತೆರಿಗೆ ಪಾಲು ಹಂಚಿಕೆಯಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಮೈಸೂರಿನಲ್ಲಿ ಬಹಿರಂಗ ಚರ್ಚೆಯಾಗಲಿ. ಈ ಚರ್ಚೆಗೆ ನಾವು ಸಿದ್ದ ಮಾನ್ಯ ನಿರ್ಮಲಾ ಸೀತಾರಾಮನ್ ಅವರು ಸಿದ್ದವಿದ್ದಾರ? ಎಂದು ಸವಾಲು ಹಾಕಿದರು.

ಅಲ್ಲದೆ, ಈ ವಿಚಾರದಲ್ಲಿ ಕೆಸರೆರಚಾಟ, ರಾಜಕೀಯ ತೆವಲಾಟ ಆಗಬಾರದು. ಕರ್ನಾಟಕದಂತಹ ಪ್ರಗತಿಪರ ರಾಜ್ಯಗಳಿಗೆ ಮಲತಾಯಿ ಧೋರಣೆ ಅನ್ಯಾಯ ಮಾಡಬಾರದು ಎಂದು ಅವರು ಕೇಂದ್ರ ಸರ್ಕಾರವನ್ನು ವಿನಂತಿಸಿದರು.

Leave a Reply