ಹಾವೇರಿ: ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪ್ರಚೋದನಾಚಾರಿ ಹೇಳಿಕೆ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಮೂವರು ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಎರಡು ಗುಂಪುಗಳ ನಡುವೆ ದ್ವೇಷ ಬಿತ್ತುವ ರೀತಿಯಲ್ಲಿ ಭಾಷಣ ಮಾಡಿದ ಆರೋಪದಡಿ ಸಂಸದ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾಜಿ ಸಂಸದ ಪ್ರತಾಪ ಸಿಂಹ ವಿರುದ್ಧ ಶಿಗ್ಗಾವಿ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲಾಗಿವೆ.
ವಕ್ಫ್ ಆಸ್ತಿ ಕಬಳಿಕೆ ಮಾಡಲಾಗಿದೆ ಎಂದು ಆರೋಪಿಸಿ ರೈತರಿಗೆ ನೊಟೀಸ್ ಜಾರಿ ಮಾಡಲಾಗಿದೆ ಎಂದು ಬಿಜೆಪಿ ವತಿಯಿಂದ ನವೆಂಬರ್ ನಾಲ್ಕರಂದು ಶಿಗ್ಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಭಾಷಣ ಮಾಡಿರುವ ಬಸವರಾಜ ಬೊಮ್ಮಾಯಿ, ಬಿಜೆಪಿ ಮುಖಂಡರಾದ ಪ್ರತಾಪ್ ಸಿಂಹ ಹಾಗೂ ಸಿ.ಟಿ. ರವಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಎರಡು ಸಮುದಾಯಗಳ ನಡುವೆ ದ್ವೇಷ ಬಿತ್ತುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಇವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಇದೇ ಸಂದರ್ಭದಲ್ಲಿಯೇ, ಎರಡು ಗುಂಪುಗಳ ನಡುವೆ ದ್ವೇಷ ಉಂಟು ಮಾಡುವ ರೀತಿಯಲ್ಲಿ ಆರೋಪಿಗಳು ಭಾಷಣ ಮಾಡಿದ್ದರು. ಹೀಗಾಗಿ, ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಾವೇರಿ ಎಸ್ಪಿ ಅಂಶುಕುಮಾರ್ ತಿಳಿಸಿದರು.




