ಬೆಂಗಳೂರು: ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣದಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ತಿಳಿಸಿ ಇದು ತಮ್ಮ ಸರ್ಕಾರದ ಸಾಧನೆ ಎಂದು ಬಿಂಬಿಸಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯಪಾಲರ ಭಾಷಣಕ್ಕೆ ಪ್ರತಿಕ್ರಿಯಿಸಿರುವ ಅವರು ರಾಜ್ಯಪಾಲರು ತಮ್ಮ ಭಾಷಣದ ಪ್ಯಾರಾ ಸಂಖ್ಯೆ 39ರಲ್ಲಿ ನಾಡಪ್ರಭು ಕೆಂಪೇಗೌಡ, ಅರ್ಕಾವತಿ, ಡಾ.ಶಿವರಾಮ ಕಾರಂತ ಬಡಾವಣೆಗಳ ಪ್ರಸ್ತಾಪಿಸಿದ್ದಾರೆ. ಈ ಎಲ್ಲ ಬಡಾವಣೆಗಳು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಾರಂಭಗೊಂಡಿದ್ದವು ಎಂದು ವಿವರಿಸಿದ್ದಾರೆ.
ಒಟ್ಟಾರೆ, ಬಿಜೆಪಿ ಸರ್ಕಾರವು ನಾಲ್ಕು ವರ್ಷಗಳಲ್ಲಿ ಏನನ್ನೂ ಮಾಡಿಲ್ಲ. ಭ್ರಷ್ಟಾಚಾರ, ಧರ್ಮ-ಜಾತಿ ಸಂಘರ್ಷವನ್ನು ಬೆಳೆಸಿದ್ದು ಹೊರತುಪಡಿಸಿದರೆ ಬೇರೆ ಸಾಧನೆಗಳನ್ನು ಮಾಡಿಲ್ಲ ಎನ್ನುವುದನ್ನು ರಾಜ್ಯಪಾಲರ ಭಾಷಣದಲ್ಲಿ ಒಪ್ಪಿಕೊಳ್ಳಲಾಗಿದೆ. ತನ್ನ ವೈಫಲ್ಯವನ್ನು ಒಪ್ಪಿಕೊಂಡಿರುವುದಕ್ಕೆ ರಾಜ್ಯಪಾಲರು ಮತ್ತು ಸರ್ಕಾರವನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.
ಸರ್ಕಾರ ಯಾವುದೇ ಕಾರ್ಯಕ್ರಮಗಳನ್ನು ರೂಪಿಸಿಲ್ಲ ಎನ್ನುವುದು ಸ್ಪಷ್ಟವಾಗಿದೆ. ರಾಜ್ಯವು ಇಂದು ಅನುಭವಿಸುತ್ತಿರುವ ದೊಡ್ಡ ಸಮಸ್ಯೆ ಭ್ರಷ್ಟಾಚಾರದ್ದು. ಈ ಸಮಸ್ಯೆಯನ್ನು ಹೋಗಲಾಡಿಸಲು ಸರ್ಕಾರ ಏನು ಕ್ರಮ ಕೈಗೊಂಡಿದೆ ಎನ್ನುವ ಬಗ್ಗೆ ಒಂದೂ ಮಾತು ಪ್ರಸ್ತಾಪಿಸಿಲ್ಲ. ಆದ್ದರಿಂದ, ಸರ್ಕಾರ ಭ್ರಷ್ಟಾಚಾರದ ಪರವಾಗಿರುವುದನ್ನು ರಾಜ್ಯಪಾಲರ ಭಾಷಣವು ದೃಢೀಕರಿಸುತ್ತಿದೆ ಎಂದು ತಿಳಿಸಿದ್ದಾರೆ.
ಭತ್ತ ಕುಟ್ಟಿದರೆ ಅಕ್ಕಿ ಬರುತ್ತದೆ. ತೌಡು ಕುಟ್ಟಿದರೆ ಬರಿ ಉಬ್ಬಲು ಬರುತ್ತದೆ. ಯಾವ ಸಾಧನೆ ಮಾಡದಿರುವುದನ್ನು ಸರ್ಕಾರವೇ ಸ್ವತಃ ಒಪ್ಪಿಕೊಂಡಿದೆ. ಹೀಗಾಗಿ, ಸರ್ಕಾರ ಸಿದ್ಧಪಡಿಸಿದ ಈ ಭಾಷಣವನ್ನು ಬೂಸಾ ಅಥವಾ ತೌಡು ಕುಟ್ಟುವ ಭಾಷಣವೆಂದು ಕರೆಯುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.




