ಬೆಂಗಳೂರು: ವಿಧಾನ ಪರಿಷತ್‍ನ ಐದು ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಧಿಕೃತ ಅಭ್ಯರ್ಥಿಗಳನ್ನು ಘೋಷಿಸಿದೆ.
ಬೆಂಗಳೂರು ಪದವಿಧರರ ಕ್ಷೇತ್ರಕ್ಕೆ ರಾಮೋಜಿ ಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ ಮಂಜುನಾಥ್, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ ಶ್ರೀನಿವಾಸ್, ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಡಾ. ಚಂದ್ರಶೇಖರ್ ಬಿ. ಪಾಟೀಲ್ ಅವರಿಗೆ ಟಿಕೇಟ್ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ವ್ಯಾಪ್ತಿಯನ್ನೊಳಗೊಂಡ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಸ್ರ್ಪಧಿಸಲು ಕೆ.ಕೆ. ಮಂಜುನಾಥ್ ಅವರಿಗೆ ಅವಕಾಶ ನೀಡಿದೆ.
ಕೋಲಾರ, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆಯ ಕೆಲವು ಭಾಗಗಳ ವ್ಯಾಪ್ತಿಯನ್ನು ಒಳಗೊಂಡ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಿ.ಟಿ. ಶ್ರೀನಿವಾಸ್ ಅವರಿಗೆ ಈ ಬಾರಿ ಟಿಕೆಟ್ ನೀಡಲಾಗಿದೆ.
ಹಿರಿಯೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ತಮ್ಮ ಪತಿ ಶ್ರೀನಿವಾಸ್ ಅವರೊಂದಿಗೆ ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದರು. ತಿಂಗಳ ಒಳಗಾಗಿಯೇ ಕಾಂಗ್ರೆಸ್ ಶ್ರೀನಿವಾಸ್ ಅವರಿಗೆ ಟಿಕೆಟ್ ಘೋಷಣೆ ಮಾಡುವ ಮೂಲಕ ಅಚ್ಚರಿ ಮೂಡಿಸಿದೆ
ಬೀದರ್, ಕಲಬುರಗಿ, ಯಾದಗಿರ್, ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ ಜಿಲ್ಲಾ ವ್ಯಾಪ್ತಿಗಳನ್ನೊಳಗೊಂಡ ಈಶಾನ್ಯ ಪದವಿಧರರ ಕ್ಷೇತ್ರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ಚಂದ್ರಶೇಖರ್ ಪಾಟೀಲ್ ಅವರಿಗೆ ಟಿಕೆಟ್ ನೀಡಲಾಗಿದೆ.



