ಬಿಜೆಪಿ ಅವಧಿಯಲ್ಲಿ ನಡೆದ ಹಗರಣಗಳ ಕುರಿತು ತನಿಖೆಗೆ ಕಾಂಗ್ರೆಸ್ ನಿರ್ಧಾರ

3 years ago

ಬೆಂಗಳೂರು: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಶೇಕಡ 40ರಷ್ಟು ಕಮಿಷನ್ ಆರೋಪ ಸೇರಿದಂತೆ ಹಲವು ಭ್ರಷ್ಟಾಚಾರ ಆರೋಪಗಳನ್ನು ಮಾಡಿದ್ದ ಕಾಂಗ್ರೆಸ್ ಪಕ್ಷ ಇದೀಗ, ತನ್ನ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಅವುಗಳ ಬಗ್ಗೆ ತನಿಖೆಗೆ ಮುಂದಾಗಿದೆ.

ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಶಾಸಕರು ಮತ್ತು ಹೊಸದಾಗಿ ನೇಮಕವಾಗಿರುವ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರ ಜೊತೆ ಮಾತನಾಡಿ ಅಕ್ರಮ ಆರೋಪಗಳ ಕುರಿತು ತನಿಖೆ ನಡೆಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಕಮಿಷನ್ ಹಾಗೂ ಕೆಲವೆಡೆ ನಡೆದಿರುವ ಕಳಪೆ ಕಾಮಗಾರಿಗಳು ಟೆಂಡರ್ ಅಂತಿಮಗೊಳಿಸುವ ಪ್ರಕ್ರಿಯೆ ವೇಳೆ ನಡೆದಿರುವ ಲೋಪ ದೋಷಗಳ ಬಗ್ಗೆ ವರದಿ ತರಿಸಿಕೊಂಡು ಉನ್ನತ ಮಠದ ತನಿಖೆಗೆ ಆದೇಶಿಸುವ ಕುರಿತಂತೆ ಪರಿಶೀಲಿಸಲು ನಿರ್ಧರಿಸಿರುವುದಾಗಿ ಸಿಎಂ ಹೇಳಿದರೆಂದು ಉನ್ನತ ಮೂಲಗಳು ತಿಳಿಸಿವೆ.

ಆಯೋಗ ರಚಿಸಿ: ಈ ನಡುವೆ ಮುಖ್ಯಮಂತ್ರಿಗಳನ್ನು ಭೇಟಿಯಾದ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ, ಹಿಂದಿನ ಸರ್ಕಾರಗಳ ಹಗರಣಗಳನ್ನು ತನಿಖೆ ನಡೆಸಲು ಆಯೋಗ ರಚನೆ ಮಾಡಬೇಕು ಎಂದು  ಮನವಿ ಮಾಡಿದ್ದಾರೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಗುತ್ತಿಗೆ ನಿರ್ವಹಣೆ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಏಕಾಏಕಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಒಂದು ತನಿಖಾ ಆಯೋಗ ರಚಿಸಬೇಕು. ಸಮಗ್ರ ತನಿಖೆ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಿದರು.

ಹಲವಾರು ಇಲಾಖೆಗಳಲ್ಲಿ ಭ್ರಷ್ಟಾಚಾರಗಳು ಮಿತಿಮೀರಿದ್ದವು ಎಂಬ ಆರೋಪಗಳು ಮೊದಲಿನಿಂದಲೂ ಕೇಳಿಬಂದಿವೆ. ನಾವು ಚುನಾವಣೆ ವೇಳೆ ಈ ಬಗ್ಗೆ ಹೆಚ್ಚು ಪ್ರಚಾರ ಮಾಡಿದ್ದೇವೆ. ನಮ್ಮ ಭರವಸೆಗಳಲ್ಲಿ ಭ್ರಷ್ಟಾಚಾರ ನಿಯಂತ್ರಣವೂ ಒಂದು ಎಂದು ಹೇಳಿದರು.

ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ವೇಳೆ ಭ್ರಷ್ಟಾಚಾರ ರಹಿತ ಆಡಳಿತ ನಡೆಸುವ ಅಗತ್ಯವಿದೆ ಎಂದು ಸಲಹೆ ನೀಡಿದ್ದೇನೆ. ಅದಕ್ಕೆ ಅವರು ಒಪ್ಪಿದ್ದಾರೆ ಎಂದು ಸ್ಪಷ್ಟಪಡಿಸಿದರು. 

ಪರಿಶೀಲನೆಗೆ ಸೂಚನೆ: ಈ ವಿದ್ಯಮಾನಗಳ ನಡುವೆ, ಈ ಹಿಂದಿನ ಸರ್ಕಾರದ ಗುತ್ತಿಗೆ ಕಾಮಗಾರಿಗಳಲ್ಲಿನ ಹಗರಣಗಳ ಕುರಿತು ಪರಿಶೀಲನೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮಗೆ ಸೂಚನೆ ನೀಡಿದ್ದಾರೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. 

ಸಿಎಂ ನಿವಾಸದ ಮುಂಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಕಾಮಗಾರಿಗಳ ಗುತ್ತಿಗೆ ನಿರ್ವಹಣೆಯಲ್ಲಿ ಯೋಜನಾ ವೆಚ್ಚವನ್ನು ವಾಸ್ತವಕ್ಕಿಂತಲೂ ಹೆಚ್ಚಿಸಲಾಗಿದೆ. ಈ ಬಗ್ಗೆ ಪರಿಶೀಲನೆ ಮಾಡುವಂತೆ ಮುಖ್ಯಮಂತ್ರಿಯವರು ತಮಗೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ಯಾರೇ ತಪ್ಪು ಮಾಡಿದರೂ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದು ಸರ್ಕಾರದ ಆದ್ಯತೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಹಣಕಾಸು ಪರಿಸ್ಥಿತಿಯನ್ನು ತಮ್ಮ ಕುಟುಂಬದಂತೆಯೇ ನಿರ್ವಹಣೆ ಮಾಡುತ್ತಾರೆ. ಒಂದು ರೂಪಾಯಿ ಕೂಡ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಹೇಳಿದರು.

ತಾವು ಮುಖ್ಯಮಂತ್ರಿಯವರ ಸೂಚನೆ ಮೇರೆಗೆ ತಜ್ಞರ ಜತೆ ಸಮಾಲೋಚನೆ ನಡೆಸುತ್ತಿದ್ದು, ಶೀಘ್ರವೇ ಸ್ಪಷ್ಟ ಮಾಹಿತಿ ನೀಡಲಾಗುವುದು ಮತ್ತು ಭ್ರಷ್ಟಾಚಾರದ ವಿರುದ್ಧ ತಾತ್ವಿಕ ಅಂತ್ಯ ಕಾಣಿಸುವುದಾಗಿ ತಿಳಿಸಿದರು.

ತನಿಖೆಗೆ ಸ್ವಾಗತ: ಈ ಹಿಂದಿನ ಸರ್ಕಾರದ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರ ಆರೋಪಗಳ ಬಗ್ಗೆ ಕಾಂಗ್ರೆಸ್ ಸರ್ಕಾರ ತನಿಖೆಗೆ ಆದೇಶಿಸುವ ಯಾವುದೇ ನಿರ್ಧಾರವನ್ನು ಬಿಜೆಪಿ ಸಂಪೂರ್ಣವಾಗಿ ಮುಕ್ತ ಮನಸ್ಸಿನಿಂದ ಸ್ವಾಗತಿಸಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ರವಿಕುಮಾರ್ ಹೇಳಿದ್ದಾರೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರ ಯಾವುದೇ ತನಿಖೆ ನಡೆಸಲಿ ಅದು ಜನರ ಮುಂದೆ ಬರಲಿ. ಅದಕ್ಕೆ ನಾವು ಸಂಪೂರ್ಣ ಬದ್ಧರಾಗಿದ್ದೇವೆ. ಕೇವಲ ಹೇಳಿಕೆ ನೀಡಿದರೆ ಸಾಲದು, ಮಾಡಲಿ ತೋರಿಸಲಿ ಎಂದು ಸವಾಲು ಹಾಕಿದರು.

ಇದು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುವಂತಿದೆ. ಶೇ. 40ರಷ್ಟು ಕಮಿಷನ್ ಹೆಸರಿನಲ್ಲಿ ದೊಡ್ಡ ಮಾತುಗಳನ್ನೇ ಆಡಿದರು. ಯಾವುದಕ್ಕೂ ಪುರಾವೆ ನೀಡಲಿಲ್ಲ. ಅವರ ಕಾಲದಲ್ಲಿಯೇ ದೊಡ್ಡ ದೊಡ್ಡ ಹಗರಣಗಳು ನಡೆದಿರುವುದು ಎಲ್ಲಾ ಜನರಿಗೆ ಗೊತ್ತಿದೆ.ಲೋಕಾಯುಕ್ತದಲ್ಲೂ ಹಲವಾರು ಪ್ರಕರಣಗಳು ಬಾಕಿ ಉಳಿದಿವೆ. ಇವೆಲ್ಲವೂ ತನಿಖೆಯಾಗಲಿ ನಾವು ಕೂಡ ಅದಕ್ಕೆ ಸಿದ್ಧವಿದ್ದೇವೆ. ಯಾರ್ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆಯಾಗಲಿ ಎಂದು ತಿರುಗೇಟು ನೀಡಿದ್ದಾರೆ.

Leave a Reply