ಕಾಂಗ್ರೆಸ್ ಲೋಕಸಭೆ ಅಭ್ಯರ್ಥಿಗಳ ಪಟ್ಟಿಗೆ ಅಂತಿಮರೂಪ

2 years ago

ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಅತ್ಯಧಿಕ ಸಂಖ್ಯೆಯಲ್ಲಿ ಸಂಸದರನ್ನು ಆಯ್ಕೆ ಮಾಡಿ ಕಳುಹಿಸಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್ ಗೆಲುವಿನ ಮಾನದಂಡ ಆಧರಿಸಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡ ಪರಿಣಾಮ ಹಲವು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಹಿನ್ನಡೆ ಅನುಭವಿಸಿತ್ತು. ಈ ಬಾರಿ ಅಂತಹ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದೆ ಪ್ರಕ್ರಿಯೆ ಪೂರ್ಣಗೊಳಿಸಲು ಪಕ್ಷದ ವತಿಯಿಂದ ತೀರ್ಮಾನಿಸಲಾಗಿದೆ.

ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಒಬ್ಬ ಸಚಿವರನ್ನು ಉಸ್ತುವಾರಿಯಾಗಿ ನಿಯೋಜನೆ ಮಾಡಲಾಗಿದೆ. ಇವರು ತಮಗೆ ಸೂಚಿಸಿದ ಕ್ಷೇತ್ರದಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ಅಭಿಪ್ರಾಯ ಆಲಿಸಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ನೀಡುವಂತೆ ಸೂಚಿಸಲಾಗಿದೆ. ಅದರಂತೆ ಬಹುತೇಕ ಎಲ್ಲ ಉಸ್ತುವಾರಿಗಳು ಸಂಭಾವ್ಯರ ಪಟ್ಟಿಯನ್ನು ಕೆಪಿಸಿಸಿಗೆ ರವಾನಿಸಿದ್ದಾರೆ.

ದೆಹಲಿಯಿಂದ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ ಸುರ್ಜೇವಾಲ ಅವರು ರಾಜ್ಯ ಚುನಾವಣಾ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಪರಮೇಶ್ವರ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ ಸೇರಿದಂತೆ ಹಲವರು ಪಾಲ್ಗೊಂಡಿದ್ದ ಈ ಸಭೆಯಲ್ಲಿ 15 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ.

ಉಳಿದ ಕ್ಷೇತ್ರಗಳಿಗೂ ಹೆಸರು ಅಂತಿಮಗೊಳಿಸಲಾಗುವುದು ಎಂದು ಉನ್ನತ ಮೂಲಗಳು ತಿಳಿಸಿವೆ. ರಾಜ್ಯ ಚುನಾವಣಾ ಸಮಿತಿ ಅಂತಿಮಗೊಳಿಸುವ ಪಟ್ಟಿಯನ್ನು ಕೇಂದ್ರ ಚುನಾವಣಾ ಸಮಿತಿಗೆ ಸಲ್ಲಿಸಲಾಗುತ್ತಿದ್ದು, ಮುಂದಿನ ವಾರ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ.

Leave a Reply