ದೆಹಲಿಯಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್ ನಾಯಕರು

7 months ago

ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆಗೆ ಪರಿಹಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚಿಸಲು ದೆಹಲಿಗೆ ತೆರಳುತ್ತಿರುವ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆ ಸೇರಿದಂತೆ ರಾಜ್ಯ ಕಾಂಗ್ರೆಸ್ ನ ಹಲವು ವಿಚಾರಗಳ ಕುರಿತು ಹೈಕಮಾಂಡ್ ಜೊತೆ ಚರ್ಚೆ ನಡೆಸಲಿದ್ದಾರೆ.

ನಿನ್ನೆಯಷ್ಟೇ ಈ ವಿಚಾರದ ಬಗ್ಗೆ ಸಿದ್ದರಾಮಯ್ಯ ಅವರು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಜೊತೆ ಚರ್ಚೆ ಮಾಡಿದ್ದಾರೆ. ಅವರು ಈ ವಿಚಾರದ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಘಟನಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಅವರೊಂದಿಗೆ ಮಾತುಕತೆ ನಡೆಸುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಸಿಎಂ ಈ ಎಲ್ಲ ನಾಯಕರು ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದೆ.

ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳು ಸೇರಿದಂತೆ ಹಲವು ಶಾಸಕರು ಈಗಾಗಲೇ ದೆಹಲಿಗೆ ತರಲಿದ್ದಾರೆ. ಇವರ ಜೊತೆಗೆ, ಕೆಲವು ಮಂತ್ರಿಗಳು ಕೂಡ ದೆಹಲಿ ಯಾತ್ರೆ ಕೈಗೊಂಡಿದ್ದು, ತಮ್ಮ ಸ್ಥಾನ ಉಳಿಸಿಕೊಳ್ಳುವ ಮತ್ತು ನಾಯಕತ್ವ ಬದಲಾವಣೆ ವಿಚಾರ ಪ್ರಸ್ತಾಪವಾದರೆ ಯಾವ ನಿಲುವು ತೆಗೆದುಕೊಳ್ಳಬೇಕು ಎಂಬ ಕುರಿತಾಗಿ ಹೈಕಮಾಂಡ್ ಜೊತೆ ಚರ್ಚಿಸಲು ಸಜ್ಜುಗೊಂಡಿದ್ದಾರೆ.

ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ, ಬೈರತಿ ಸುರೇಶ್ ಜಮೀರ್ ಅಹ್ಮದ್ ಖಾನ್, ಶಾಸಕರಾದ ಅಶೋಕ ಪಟ್ಟಣ, ಅಜಯ್ ಸಿಂಗ್, ರಿಜ್ವಾನ್ ಹರ್ಷದ್, ಪ್ರಸಾದ್ ಅಬ್ಬಯ್ಯ, ಹಿರಿಯ ನಾಯಕ ಬಿ ಕೆ ಹರಿಪ್ರಸಾದ್ ಸೇರಿದಂತೆ ಹಲವರು ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದು ಇದೀಗ ಮಾಜಿ ಸಂಸದ ಹಾಗೂ ಡಿ ಕೆ ಶಿವಕುಮಾರ್ ಅವರ ಸೋದರ ಡಿ ಕೆ ಸುರೇಶ್ ಅವರು ಕೂಡ ದೆಹಲಿಗೆ ತೆರಳಿದ್ದಾರೆ.

ಹೈಕಮಾಂಡ್ ನಿರ್ಧಾರ: ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಸುರೇಶ್, ಸಂಪುಟ ಪುನಾರಚನೆ ವಿಸ್ತರಣೆ ನಾಯಕತ್ವ ಬದಲಾವಣೆ ಎಲ್ಲವನ್ನು ತೀರ್ಮಾನ ಮಾಡುವುದು ಹೈಕಮಾಂಡ್. ಈಗ ಈ ವಿಚಾರದಲ್ಲಿ ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದನ್ನು ಕಾದು ನೋಡುತ್ತೇವೆ ಎಂದರು.

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆ ಕುರಿತಾಗಿ ಲಾಭಿ ನಡೆಸುತ್ತಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಪಕ್ಷದ ಅಧ್ಯಕ್ಷ ಸ್ಥಾನ ‌ಸಿಎಂ ಹುದ್ದೆ ಸಂಪುಟ ವಿಸ್ತರಣೆ ಎಲ್ಲವೂ ಹೈಕಮಾಂಡ್ ಗೆ ಬಿಟ್ಟ ವಿಚಾರ. ಡಿಕೆ ಶಿವಕುಮಾರ್ ಅವರು ಸೂಚನೆ ಆಧರಿಸಿ ಕೆಲಸ ಮಾಡುತ್ತಾರೆ ಎಂದರು.

ರಾಜ್ಯದಲ್ಲಿ ಸಂಪುಟ ಪುನಾರಚನೆಯಾದರೆ ನಾಯಕತ್ವ ಬದಲಾವಣೆಯಾಗುವುದಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ತಮಗೆ ಆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ ಎಂದರು.

ನಾಯಕತ್ವ ಬದಲಾವಣೆ: ಈ ನಡುವೆ ರಾಜ್ಯ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹಮಂತ್ರಿ ಡಾ. ಜಿ. ಪರಮೇಶ್ವರ್, ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಪುಟ ಪುನಾರಚನೆ ಮಾಡಲು ಅನುಮತಿ ನೀಡಿದೆ ಎಂಬ ಮಾಹಿತಿ ಹೊರಬಿದ್ದಿದೆ. ಹೀಗೇನಾದರೂ ಆದಲ್ಲಿ ನಾಯಕತ್ವ ಬದಲಾವಣೆ ವಿಚಾರವೇ ಇರುವುದಿಲ್ಲ ಎಂದರು.

ಸಿದ್ದರಾಮಯ್ಯ ಅವರು ದೆಹಲಿಗೆ ತೆರಳುವ ಮುನ್ನ ಅವರನ್ನು ಭೇಟಿ ಮಾಡಿದ್ದೆ. ಈ ವೇಳೆ ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದರು. ಇದೀಗ ದೆಹಲಿಯಿಂದ ವಾಪಸ್ ಬಂದ ನಂತರ ಅವರ ಜೊತೆ ಮಾತನಾಡಿಲ್ಲ. ಏನೇ ಇದ್ದರೂ ಕೂಡ ಎಲ್ಲರೂ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿ ಇರುತ್ತೇವೆ ಎಂದರು.

Leave a Reply