ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

2 years ago

ಬೆಂಗಳೂರು: ಕ್ಷೇತ್ರದ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬಿಡುಗಡೆ ಹಾಗೂ ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಹಲವು ವಿಷಯಗಳ ಕುರಿತು ಅಸಮಾಧಾನಗೊಂಡ ಶಾಸಕರ ಅಹವಾಲು ಆಲಿಸಿ, ಅವುಗಳಿಗೆ ಪರಿಹಾರ ಕಲ್ಪಿಸಲು ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಮುಂಬರುವ ಲೋಕಸಭಾ ಚುನಾವಣೆ ಸಿದ್ಧತೆ, ಅಭ್ಯರ್ಥಿಗಳ ಆಯ್ಕೆ ಹಾಗೂ ನಿಗಮ ಮಂಡಳಿಗಳ ನೇಮಕ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪರ ಅಭಿಪ್ರಾಯ ಮೂಡಿಸಲು ಕ್ಷೇತ್ರದ ವ್ಯಾಪ್ತಿಯಲ್ಲಿ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಬೇಕು, ಇದಕ್ಕಾಗಿ ಕನಿಷ್ಠ ಐವತ್ತು ಕೋಟಿ ರೂಪಾಯಿ ಅನುದಾನ ನೀಡಬೇಕು ಎಂಬ ಬೇಡಿಕೆ ಮಂಡಿಸಿರುವ ಶಾಸಕರು ಅನುದಾನ ಬಿಡುಗಡೆಗೆ ಬಿಗಿಪಟ್ಟು ಹಿಡಿದಿದ್ದಾರೆ.

ಬರಗಾಲ ಹಿನ್ನೆಲೆಯಲ್ಲಿ ಹಲವೆಡೆ ಕುಡಿಯುವ ನೀರು ಮತ್ತು ದನಕರುಗಳ ಮೇವಿಗೆ ಹಾಹಾಕಾರ ಉಂಟಾಗಿದೆ. ಈ ಸಮಸ್ಯೆ ಪರಿಹರಿಸುವ ದೃಷ್ಟಿಯಿಂದ ಸಮರೋಪಾದಿಯಲ್ಲಿ ಬರ ಪರಿಹಾರ ಕಾಮಗಾರಿ ಕೈಗೊಳ್ಳಬೇಕಿದೆ ಎಂದು ಶಾಸಕರು ಆಗ್ರಹಿಸಿದ್ದು, ಇದಕ್ಕಾಗಿ ಹೆಚ್ಚಿನ ನೆರವು ನೀಡುವಂತೆ ಕೋರಿದ್ದಾರೆ.

ಜೊತೆಗೆ ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಪ್ರಾಬಲ್ಯ ಸಾಧಿಸಿರುವುದರಿಂದ ಶಾಸಕರನ್ನು ತಮ್ಮತ್ತ ಸಳೆಯಲು ಬಿಜೆಪಿ ನಾಯಕರು ಪ್ರಯತ್ನ ನಡೆಸಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಯಾರೂ ಕೂಡ ಆಮಿಷಗಳಿಗೆ ಬಲಿಯಾಗದಂತೆ ಮನವಿ ಮಾಡಲು ಕೂಡ ತೀರ್ಮಾನ ಮಾಡಲಾಗಿದೆ.

ಒಟ್ಟಾರೆ ಬಿಜೆಪಿಯ ಆಮಿಷಗಳಿಂದ ಶಾಸಕರನ್ನು ನಿಯಂತ್ರಿಸುವ ಜೊತೆಗೆ ಅವರ ಕ್ಷೇತ್ರದ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬಿಡುಗಡೆ, ಅಧಿಕಾರಿಗಳ ವರ್ಗಾವಣೆ ಪ್ರಮುಖ ವಿಷಯಗಳಾಗಿ ನಾಳಿನ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

Leave a Reply