ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

4 months ago

ಡಿಸೆಂಬರ್ 27ರಂದು ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಬೆಂಗಳೂರು: ಅಧಿಕಾರ ಹಸ್ತಾಂತರ ಕುರಿತಂತೆ ರಾಜ್ಯ ಕಾಂಗ್ರೆಸ್ಸಿನಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿರುವ ಬೆನ್ನಲ್ಲೇ ಡಿಸೆಂಬರ್ 27ರಂದು ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿದೆ. ಈ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಮತ್ತು ಇತರ ಪ್ರಮುಖ ನಾಯಕರು ದೆಹಲಿಗೆ ತೆರಳುತ್ತಿದ್ದಾರೆ.

ಮುಂಬರುವ ಕೇರಳ, ತಮಿಳುನಾಡು ವಿಧಾನಸಭಾ ಚುನಾವಣೆಯ ಕಾರ್ಯತಂತ್ರ ಹಾಗೂ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹೆಸರು ಬದಲಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಹೋರಾಟಗಳನ್ನು ಆಯೋಜಿಸುವ ಕುರಿತಂತೆ ಚರ್ಚಿಸಲು ಈ ಸಭೆ ಕರೆಯಲಾಗಿದೆ.

ಜೊತೆಗೆ ಮತಗಳ್ಳತನ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಸಂಘಟನಾತ್ಮಕವಾಗಿ ಪಕ್ಷ ಕೈಗೊಳ್ಳಬೇಕಾದ ನಿರ್ಧಾರಗಳ ಕುರಿತು ಚರ್ಚಿಸಲು ಸಿಡಬ್ಲ್ಯೂಸಿ ಸಭೆ ಕರೆದಿದ್ದು, ಈ ಸಭೆಯಲ್ಲಿ ಕರ್ನಾಟಕದ ವಿದ್ಯಮಾನಗಳ ಬಗ್ಗೆ ಪ್ರತ್ಯೇಕ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.

ಹೈಕಮಾಂಡ್ ನಿರ್ಧಾರ: ರಾಜ್ಯ ಕಾಂಗ್ರೆಸ್ಸಿನಲ್ಲಿ ಉಂಟಾಗಿರುವ ಬಿಕ್ಕಟ್ಟು ರಾಜ್ಯ ನಾಯಕರೇ ಸೃಷ್ಟಿಸಿಕೊಂಡಿರುವ ಬಿಕ್ಕಟ್ಟು ಅದನ್ನು ಅವರೇ ಬಗ್ಗೆ ಹರಿಸಿಕೊಳ್ಳಬೇಕು ಈ ವಿಷಯದಲ್ಲಿ ಹೈಕಮಾಂಡ್ ಏನನ್ನೂ ಹೇಳುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ ನಂತರವೂ ಈ ವಿಷಯದಲ್ಲಿ ಹೈಕಮಾಂಡ್ ನಿರ್ಧಾರ ಅಂತಿಮ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಖರ್ಗೆಯವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ನಾಯಕತ್ವ ಬದಲಾವಣೆ ವಿಚಾರವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್‌ಗಾಂಧಿಯವರೇ ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ ಎಂದು ಹೇಳುವ ಮೂಲಕ ಕುರ್ಚಿ ಕಿತ್ತಾಟದ ಚೆಂಡನ್ನು ಮತ್ತೆ ಹೈಕಮಾಂಡ್ ಅಂಗಳಕ್ಕೆ ರವಾನಿಸಿದರು.

ರಾಜ್ಯ ಕಾಂಗ್ರೆಸ್‌ನ ಗೊಂದಲ, ನಾಯಕತ್ವ ಬದಲಾವಣೆ ಈ ಎಲ್ಲದರ ಬಗ್ಗೆ ನಾನು ಪಕ್ಷದ ವರಿಷ್ಠರ ಜತೆ ಮಾತನಾಡಿದ್ದೇನೆ. ವರಿಷ್ಠರು ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾವು ಬದ್ಧ ಎಂದು ಪುನರುಚ್ಚರಿಸಿದರು.

Leave a Reply