ಬೆಂಗಳೂರು: ಬೆಂಗಳೂರು ಹೊರತುಪಡಿಸಿ ರಾಜ್ಯದಲ್ಲಿ ಅತಿಹೆಚ್ಚಿನ ವಿಧಾನಸಭಾ ಕ್ಷೇತ್ರಗಳಿರುವ ಬೆಳಗಾವಿಯಲ್ಲಿ ಪ್ರಾಬಲ್ಯ ಸಾಧಿಸಲು ಕಾಂಗ್ರೆಸ್ ರಣತಂತ್ರ ರೂಪಿಸಿದೆ. ಬಿಜೆಪಿ ಹಿರಿಯ ನಾಯಕ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಬಿಜೆಪಿಯ ಮತ್ತಷ್ಟು ಅತೃಪ್ತ ನಾಯಕರಿಗೆ ಕಾಂಗ್ರೆಸ್ ಗಾಳ ಹಾಕಿದೆ. ಹೈಕಮಾಂಡ್ ಸೂಚನೆಯ ಮೇರೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್, ಚೆನ್ನರಾಜ್ ಹಟ್ಟಿಹೊಳಿ, ಮಾಜಿ ಶಾಸಕ ರಾಜು ಕಾಗೆ, ವೀರ ಕುಮಾರ್ ಪಾಟೀಲ್ ಜಿಲ್ಲೆಯ ಬಿಜೆಪಿ ನಾಯಕರನ್ನು ಕಾಂಗ್ರೆಸ್ ನತ್ತ ಸೆಳೆಯಲು ಪ್ರಯತ್ನ ನಡೆಸಿದ್ದಾರೆ.

ಪ್ರಮುಖವಾಗಿ ಟಿಕೆಟ್ ಕೈತಪ್ಪಿರುವ ಬಿಜೆಪಿ ನಾಯಕರಾದ ರಾಮದುರ್ಗ ಕ್ಷೇತ್ರದ ಹಾಲಿ ಶಾಸಕ ಮಹದೇವಪ್ಪ ಯಾದವಾಡ ಮತ್ತು ಬೆಳಗಾವಿ ಉತ್ತರ ಕ್ಷೇತ್ರದ ಅನಿಲ್ ಬೆನಕೆ, ಬೈಲಹೊಂಗಲದ ಡಾ. ವಿಶ್ವನಾಥ ಪಾಟೀಲ ಅವರಿಗೆ ಪಕ್ಷ ಸೇರುವಂತೆ ಕಾಂಗ್ರೆಸ್ ನಾಯಕರು ಆಹ್ವಾನ ನೀಡಿದ್ದಾರೆ. ಅದರಲ್ಲಿ ಬೆಳಗಾವಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅನಿಲ್ ಬೆನಕೆ ಅವರಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮಹಾದೇವಪ್ಪ ಯಾದವಾಡ ಮತ್ತು ಡಾ. ವಿಶ್ವನಾಥ ಪಾಟೀಲ್ ಅವರಿಗೆ ಬೇರೆ ರೀತಿಯಲ್ಲಿ ಪ್ರಾತಿನಿಧ್ಯ ಕೊಡುವ ಭರವಸೆಯನ್ನು ಕಾಂಗ್ರೆಸ್ ನಾಯಕರು ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಪ್ರಧಾನ್ ರಂಗ ಪ್ರವೇಶ: ಬೆಳಗಾವಿ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲ ಬಗೆಹರಿಸಲು ಇದೀಗ ಪಕ್ಷದ ನಾಯಕ ಹಾಗೂ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ರಂಗ ಪ್ರವೇಶ ಮಾಡಿದ್ದಾರೆ. ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಬೆಳಗಾವಿಯ ಹಲವು ನಾಯಕರೊಂದಿಗೆ ಮಾತುಕತೆ ನಡೆಸಿದ್ದು, ಪಕ್ಷ ತೊರೆಯದಂತೆ ಅತೃಪ್ತರ ಮನವೊಲಿಸುತ್ತಿದ್ದಾರೆ.
ಬೇಸರ ತಂದಿದೆ: ಈ ನಡುವೆ ಎಲ್ಲ ವಿದ್ಯಮಾನಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಮ್ಮ ಪಕ್ಷದ ಮುಖಂಡ ಹಾಗೂ ಆತ್ಮೀಯರೂ ಆಗಿದ್ದ ಲಕ್ಷ್ಮಣ್ ಸವದಿ ಬಿಜೆಪಿ ಬಿಟ್ಟು ಹೋಗುತ್ತಿರುವುದು ಮನಸ್ಸಿಗೆ ತುಂಬ ನೋವು ತಂದಿದೆ ಎಂದು ಹೇಳಿದ್ದಾರೆ
ಲಕ್ಷ್ಮಣ ಸವದಿ ಅವರನ್ನು ಬಿಜೆಪಿಯಲ್ಲಿ ಅವರನ್ನು ಉಳಿಸಿಕೊಳ್ಳಲು ನಾವು ಕೊನೆ ಕ್ಷಣದವರೆಗೂ ಎಲ್ಲ ಪ್ರಯತ್ನಗಳನ್ನು ನಡೆಸಿದೆವು. ಆದರೆ ಕಾಂಗ್ರೆಸ್‍ನಲ್ಲಿ ಭವಿಷ್ಯವಿದೆ ಎಂದು ಅಲ್ಲಿಗೆ ಹೋಗಿದ್ದಾರೆ. ಅವರು ಪಕ್ಷ ಬಿಡುತ್ತಿರುವುದು ವೈಯಕ್ತಿಕವಾಗಿ ನನಗೆ ತುಂಬ ನೋವು ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಾನು ಪಕ್ಷ ಬಿಡದಂತೆ ಅವರನ್ನು ಮನವೊಲಿಸುವ ಪ್ರಯತ್ನ ಮಾಡಿದೆ. ಜೊತೆಗೆ ಅನೇಕ ಮುಖಂಡರು ಸಹ ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಮನವಿ ಮಾಡಿದೆವು. ಅವರು ತೆಗೆದುಕೊಂಡ ನಿಲುವು ಸರಿಯಲ್ಲ ಎಂದರು.
ಬಿಜೆಪಿ ಮೂರನೇ ಪಟ್ಟಿ ಅತಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಪಕ್ಷದ ವರಿಷ್ಠರು ಈಗಾಗಲೇ ಚರ್ಚಿಸಿ ಯಾರಿಗೆ, ಯಾವ ಕಡೆ ಟಿಕೆಟ್ ಕೊಡಬೇಕು ಎಂಬುದನ್ನು ತೀರ್ಮಾನಿಸಿದ್ದಾರೆ. ಅಕೃತವಾಗಿ ಬಿಡುಗಡೆಯಾಗುವುದು ಬಾಕಿ ಉಳಿದಿದೆ ಎಂದು ತಿಳಿಸಿದರು.




