ಸಂಧಾನ ಸೂತ್ರದಲ್ಲಿ ಯಶಸ್ಸು ಕಂಡ ಕಾಂಗ್ರೆಸ್

2 years ago

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗೆಲ್ಲಲು ಕಾರ್ಯತಂತ್ರ ರೂಪಿಸುತ್ತಿರುವ ಕಾಂಗ್ರೆಸ್, ಬಾಗಲಕೋಟೆ, ಕೊಪ್ಪಳ, ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆ ಕಾಣಿಸಿಕೊಂಡಿರುವ ಭಿನ್ನಮತ ಶಮನಕ್ಕೆ ಕಸರತ್ತು ಆರಂಭಿಸಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಂಡಾಯ ಸಾರಿರುವ ನಾಯಕರ ಜೊತೆ ಮಾತುಕತೆ ನಡೆಸುತ್ತಿದ್ದು, ಬಹುತೇಕ ಎಲ್ಲರನ್ನು ಸಮಾಧಾನಪಡಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ ಎಂದು ಹೇಳಲಾಗಿದೆ.

ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಪಟ್ಟು ಹಿಡಿದಿದ್ದ ವೀಣಾ ಕಾಶಪ್ಪನವರ್ ಮತ್ತು ಅವರ ಪತಿ ವಿಜಯಾನಂದ ಕಾಶಪ್ಪನವರ ಜೊತೆ ಮಾತುಕತೆ ನಡೆಸಿದ ಸಿಎಂ ಮತ್ತು ಡಿಸಿಎಂ ಸಂಧಾನ ಸೂತ್ರವೊಂದನ್ನು ಮಂಡಿಸಿದ್ದಾರೆ.

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿರುವ ಪುಷ್ಪ ಅಮರ್ ನಾಥ್ ಅವರು ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ವೀಣಾ ಕಾಶಪ್ಪನವರ್ ಅವರನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಭರವಸೆ ನೀಡಿದ್ದಾರೆ. ಇದಕ್ಕೆ ಇಬ್ಬರು ಸಹಮತ ವ್ಯಕ್ತಪಡಿಸಿದ್ದು ಬಿಕ್ಕಟ್ಟು ಬಗೆಹರಿದಂತಾಗಿದೆ ಎಂದು ಹೇಳಲಾಗುತ್ತಿದೆ.

ಲೋಕಸಭೆ ಚುನಾವಣೆ ಮುಗಿದ ನಂತರ ವೀಣಾ ಕಾಶಪ್ಪನವರ್ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕವಾಗಲಿದ್ದಾರೆ. ಅಲ್ಲದೆ ಬಾಗಲಕೋಟೆ ಚುನಾವಣೆಯನ್ನು ಅವರ ನೇತೃತ್ವದಲ್ಲೇ ಎದುರಿಸಲು ನಿರ್ಧರಿಸುವ ಮೂಲಕ ಬಿಕ್ಕಟ್ಟು ಇತ್ಯರ್ಥಗೊಂಡಿದೆ.

ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಮಲ್ಲಿಕಾರ್ಜುನ ಹಿಟ್ನಾಳ್ ವಿರುದ್ಧ ಬಂಡಾಯಸಾರಿರುವ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರ ಜೊತೆ ಮಾತುಕತೆ ನಡೆಸಿದ ಸಿದ್ದರಾಮಯ್ಯ, ಅನ್ಸಾರಿ ಅವರ ಕೆಲವು ಬೇಡಿಕೆಗಳನ್ನು ಈಡೇರಿಸಲು ಸಮ್ಮತಿಸಿದ್ದು, ಇದೀಗ ಅವರು ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡಲು ಒಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲೂ ಶಾಸಕರೊಂದಿಗೆ ಮಾತುಕತೆ ನಡೆಸುವ ಮೂಲಕ ಅಭ್ಯರ್ಥಿ ಆಯ್ಕೆಯಲ್ಲಿ ಉಂಟಾಗಿದ್ದ ಗೊಂದಲ ಬಗೆಹರಿದಂತಾಗಿದೆ.

Leave a Reply