ಆತ್ಮಸಾಕ್ಷಿ ಮತ: ಬಿಜೆಪಿ – ಜೆಡಿಎಸ್ ಮೈತ್ರಿಗೆ ಏಟು ಕೊಟ್ಟ ಸೋಮಶೇಖರ್

2 years ago

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮಾಜಿ ಸಚಿವ ಹಾಗೂ  ಯಶವಂತಪುರ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಬಿಜೆಪಿಗೆ ಕೈಕೊಟ್ಟಿದ್ದಾರೆ.

ಈ ಚುನಾವಣೆಯಲ್ಲಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡಬಹುದು ಎಂಬ ನಿರೀಕ್ಷೆ ಇಟ್ಟುಕೊಂಡಿದ್ದ ಬಿಜೆಪಿ ನಾಯಕರು ತಮ್ಮ ಅಭ್ಯರ್ಥಿ ನಾರಾಯಣ ಸಾ ಬಾಂಡೆಗೆ ಅವರ ಗೆಲುವಿಗಾಗಿ ಹೆಚ್ಚುವರಿ ಮತಗಳನ್ನು ನಿಯೋಜಿಸಿದ್ದರು.

ಅದರಂತೆ ತಮ್ಮ ಪಕ್ಷದ ಶಾಸಕರಾಗಿರುವ ಸೋಮಶೇಖರ್ ಅವರಿಗೆ ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಸೂಚಿಸಲಾಗಿತ್ತು. ಪಕ್ಷ ಸೂಚಿಸಿದಂತೆ ಸೋಮಶೇಖರ್ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ

ಆದರೆ ಅವರು ಬಿಜೆಪಿ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿಲ್ಲ ಎಂದು ಬಿಜೆಪಿಯ  ಚುನಾವಣಾ ಏಜೆಂಟ್ ಆಗಿರುವ ಶಾಸಕ ಅರವಿಂದ ಬೆಲ್ಲದ್ ತಿಳಿಸಿದ್ದಾರೆ .

ಮತದಾನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್ ಅವರು  ಚುನಾವಣೆಯಲ್ಲಿ ಆತ್ಮಸಾಕ್ಷಿಯ ಮತ ಹಾಕಿದ್ದೇನೆ ಎಂದರು.

ನಿಯಮಾವಳಿ ಪ್ರಕಾರ ತಾವು ಮತ ಚಲಾಯಿಸಿ ಏಜೆಂಟ್ ಗೆ ತೋರಿಸಬೇಕು ಅದರಂತೆ ತಾವು ತಮ್ಮ ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್ ಗೆ ತೋರಿಸಿದ್ದೇನೆ ಎಂದರು.

ಸೋಮಶೇಖರ್ ಅವರು ಅಡ್ಡ ಮತದಾನದ ಕುರಿತು ಸ್ಪಷ್ಟವಾಗಿ ಏನನ್ನೂ ಹೇಳಲಿಲ್ಲ. ಆದರೆ, ಅವರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿರುವ ಸಾಧ್ಯತೆ ಇದೆ ಎಂಬ ಚರ್ಚೆ ಶಾಸಕರ ಮಧ್ಯೆ ನಡೆದಿದೆ.

ಮತ ಚಲಾಯಿಸುವ ಮೊದಲು ಮಾತನಾಡಿದ್ದ ಸೋಮಶೇಖರ್, ಕ್ಷೇತ್ರದ ಹಲವು ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವ ಕುರಿತಂತೆ ತಾವು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಮಾಡಲು ಪ್ರಯತ್ನಿಸಿದ್ದೆ‌. ಆದರೆ ಅವರು ಕಾಲಾವಕಾಶ ನೀಡಲಿಲ್ಲ ಎಂದು ಆರೋಪಿಸಿದರು. ಅಲ್ಲದೆ, ಅಭಿವೃದ್ಧಿಗೆ ಯಾರು ಅನುದಾನ ಕೊಡುತ್ತಾರೋ ಅವರಿಗೆ ಮತ ಹಾಕುತ್ತೇನೆ’ ಎಂದರು.

ಕಳೆದ ಕೆಲವು ದಿನಗಳಿಂದ ಬಿಜೆಪಿ ನಾಯಕತ್ವದ ವಿರುದ್ಧ ಮೂನಿಸಿಕೊಂಡಿರುವ ಸೋಮಶೇಖರ್ ಅವರು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಜೊತೆ ಗುರುತಿಸಿಕೊಂಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮೈಸೂರು ಇಲ್ಲವೇ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗುತ್ತಿದೆ.

ಬಿಜೆಪಿ ಚುನಾವಣಾ ಏಜೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅರವಿಂದ್ ಬೆಲ್ಲದ್ ಪಕ್ಷದ ಮುಖಂಡರನ್ನು ಸಂಪರ್ಕಿಸಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡಿರುವ ಕುರಿತಂತೆ ಮಾಹಿತಿ ನೀಡಿದರು.

ಕೂಡಲೇ ಕಾರ್ಯೋನ್ಮುಖರಾದ ವಿಪಕ್ಷ ನಾಯಕ ಆರ್.ಅಶೋಕ ಮತ್ತು ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರು ಜೆಡಿಎಸ್ ನಾಯಕ ಕುಮಾರ ಸ್ವಾಮಿ ಅವರೊಂದಿಗೆ ಸಮಾಲೋಚನೆ ನಡೆಸಿ ಬಿಜೆಪಿ ಅಭ್ಯರ್ಥಿಗೆ ಮತ್ತೆ ಎರಡು ಹೆಚ್ಚುವರಿ ಮತಗಳನ್ನು ನಿಯೋಜಿಸಿಕೊಂಡರು.

ಇದರ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ನಮ್ಮ ಶಾಸಕ ಎಸ್ ಟಿ ಸೋಮಶೇಖರ್ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇವೆ. ಈ ಸಂಬಂಧ ಕಾನೂನು ತಜ್ಞರೊಂದಿಗೆ ಸಮಾಲೋಚನೆಯನ್ನು ನಡೆಸಲಾಗುತ್ತಿದೆ ಎಂದರು.

ಸೋಮಶೇಖರ್ ಅವರು ಪಕ್ಷದ ವಿಪ್ ಉಲ್ಲಂಘಿಸುವ ಮೂಲಕ ಅಶಿಸ್ತು ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಮ್ಮ ಪಕ್ಷದ ಶಾಸಕಾಂಗ ಕಾರ್ಯದರ್ಶಿ ವಿಧಾನಸಭೆಯ ಅಧ್ಯಕ್ಷರಿಗೆ ದೂರು ನೀಡಲಿದ್ದಾರೆ ಎಂದರು.

Leave a Reply