ಬೆಳಗಾವಿ ಪತ್ರಿಕಾ ಭವನಕ್ಕೆ ಶಂಕುಸ್ಥಾಪನೆ
ಬೆಳಗಾವಿ: ಮಾಧ್ಯಮ ಪ್ರತಿನಿಧಿಗಳ ಬಹುದಿನಗಳ ಆಶಯದಂತೆ ಬೆಳಗಾವಿಯಲ್ಲಿ ಸುಸಜ್ಜಿತ ಪತ್ರಿಕಾ ಭವನ ನಿರ್ಮಾಣ ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಇಲ್ಲಿನ ವಿಶ್ವೇಶ್ವರಯ್ಯ ನಗರದಲ್ಲಿ ಪತ್ರಿಕಾ ಭವನ ಹಾಗೂ ತೋಟಗಾರಿಕೆ ಇಲಾಖೆ ಕಚೇರಿ ಕಟ್ಟಡಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯ ನಿವೇಶನವನ್ನು ಒದಗಿಸುವ ಮೂಲಕ ಅನೇಕ ದಿನಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಅದೇ ರೀತಿ ಅಗತ್ಯ ಅನುದಾನ ಒದಗಿಸುವ ಮೂಲಕ ಸುಸಜ್ಜಿತ ಪತ್ರಿಕಾ ನಿರ್ಮಾಣ ಮಾಡಲಾಗುವುದು ಎಂದರು.
ಇದೇ ಸ್ಥಳದಲ್ಲಿ ತೋಟಗಾರಿಕೆ ಇಲಾಖೆಯ ಕಟ್ಟಡ ನಿರ್ಮಾಣ ಮಾಡುವದರ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲಾಗುವುದು. ಇಂತಹ ಉತ್ತಮ ಕಟ್ಟಡಗಳನ್ನು ನಿರ್ಮಿಸುವುದರಿಂದ ಎರಡನೇ ರಾಜಧಾನಿ ಬೆಳಗಾವಿಯನ್ನು ಅಭಿವೃದ್ಧಿಪಡಿಸಲು ಅನುಕೂಲವಾಗಲಿದೆ ಎಂದರು.
ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮಾತನಾಡಿ, ಬೆಳಗಾವಿಯಲ್ಲಿ ಸಾರ್ವಜನಿಕರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಉತ್ತಮ ಕಟ್ಟಡಗಳನ್ನು ನಿರ್ಮಾಣ ಮಾಡುತ್ತಿರುವುದು ಸಂತಸದ ಸಂಗತಿಯಾಗಿದೆ. ಇದರಿಂದ ಬೆಳಗಾವಿ ಅಭಿವೃದ್ಧಿ ಪಥದತ್ತ ಸಾಗಲಿದೆ ಎಂದರು.
ಪತ್ರಿಕಾ ಭವನ ಹಾಗೂ ತೋಟಗಾರಿಕೆ ಇಲಾಖೆ ಕಚೇರಿ ಕಟ್ಟಡಗಳು ಸುಸಜ್ಜಿತ ಕಟ್ಟಡಗಳಾಗುವ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವಂತಾಗಲಿ ಎಂದರು.
ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ಪತ್ರಿಕಾಭವನದ ಶಂಕುಸ್ಥಾಪನೆಯ ಮೂಲಕ ಮಾಧ್ಯಮ ಪ್ರತಿನಿಧಿಗಳ ಬಹುದಿನಗಳ ಕನಸು ನನಸಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ, ಕಿತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಬಾಬಾಸಾಹೇಬ್ ಪಾಟೀಲ, ಸವದತ್ತಿ ವಿಧಾನಸಭಾ ಮತಕ್ಷೇತ್ರದ ಶಾಸಕ ವಿಶ್ವಾಸ ವೈದ್ಯ, ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್, ತೋಟಗಾರಿಕೆ ಇಲಾಖೆ ನಿರ್ದೇಶಕ ಡಿ.ಎಸ್.ರಮೇಶ, ಮಹಾನಗರ ಪಾಲಿಕೆ ಮಹಾಪೌರರಾದ ಸವಿತಾ ಕಾಂಬಳೆ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ್ ಡೊಳ್ಳಿನ, ಹಿರಿಯ ಸಹಾಯಕ ನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಹಾಂತೇಶ ಮುರಗೋಡ ಮತ್ತಿತರರು ಹಾಜರಿದ್ದರು.
ಇದೇ ಸಂದರ್ಭದಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯ ನಿವೇಶನವನ್ನು ಒದಗಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಿಲೀಪ್ ಕುರಂದವಾಡೆ ಹಾಗೂ ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ ಸನ್ಮಾನಿಸಿದರು. ಸರ್ವೋತ್ತಮ ಜಾರಕಿಹೊಳಿ, ಪತ್ರಕರ್ತರಾದ ರಾಜು ಗವಳಿ, ಮುರುಗೇಶ ಶಿವಪೂಜಿ ವೇದಿಕೆಯಲ್ಲಿದ್ದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ತೋಟಗಾರಿಕೆ ಇಲಾಖೆ ಸಿಬ್ಬಂದಿ ಮತ್ತು ಬೆಳಗಾವಿಯ ಸಮಸ್ತ ಪತ್ರಿಕಾ ಬಳಗದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.















