ಖುದ್ದು ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ಸೂಚಿಸಿದ ಕೋರ್ಟ್

2 years ago

ಬೆಂಗಳೂರು: ರಾಜಕೀಯ ಕಾರಣಕ್ಕಾಗಿ ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಜನಸಾಮಾನ್ಯರಿಗೆ ತೊಂದರೆ ಮಾಡಿದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನ 4 ಹಿರಿಯ ನಾಯಕರಿಗೆ ರಾಜ್ಯ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿದೆ.

ತಮ್ಮ ವಿರುದ್ಧ ಸಲ್ಲಿಕೆಯಾಗಿದ್ದ ಪ್ರಕರಣ ರದ್ದುಗೊಳಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಉಳಿದ ಮೂವರು ಮುಂದಿನ ವಿಚಾರಣೆ ವೇಳೆ ನ್ಯಾಯ ಪೀಠದ ಮುಂದೆ ಖುದ್ದು ಹಾಜರಾಗಿ ಹೇಳಿಕೆ ನೀಡಬೇಕು ಎಂದು ಸೂಚಿಸಿರುವ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ, ಮಾ.7ರಂದು ರಾಮಲಿಂಗಾರೆಡ್ಡಿ, ಮಾ.11 ಸುರ್ಜೆವಾಲಾ, ಮಾ.15ರಂದು ಎಂ.ಬಿ. ಪಾಟೀಲ್ ಅವರಿಗೆ ಖುದ್ದು ಹಾಜರಾಗಲು ಸೂಚನೆ ನೀಡಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಂಚಾಯತ್ ರಾಜ್ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರ ಕಿರುಕುಳದಿಂದ ಬೇಸತ್ತು ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂಬ ಆರೋಪದ ಪ್ರಕರಣ ಕುರಿತು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗಿತ್ತು.

ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ಯತ್ನಿಸಿದ್ದರು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶವಿದೆ. ಆದರೆ ಅಂದು ಇವರು ರೇಸ್ ಕೋರ್ಸ್ ರಸ್ತೆಯಲ್ಲಿನ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ಮೆರವಣಿಗೆಯಲ್ಲಿ ತೆರಳಿದ್ದರು. ಅದಕ್ಕೆ ಅಂದು ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಪೊಲೀಸರು ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಕೊಟ್ಟಿದ್ದು, ಕಾನೂನು ಸುವ್ಯಸ್ಥೆಗೆ ಭಂಗ ಉಂಟು ಮಾಡಿದ್ದು, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಸೇರಿದಂತೆ ಹಲವು ಆರೋಪಗಳಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ರದ್ದು ಕೋರಿ ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ, ಎಂ.ಬಿ ಪಾಟೀಲ, ಸುರ್ಜೆವಾಲ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ, 10 ಸಾವಿರ ದಂಡ ವಿಧಿಸಿ ಅರ್ಜಿಗಳನ್ನು ವಜಾಗೊಳಿಸಿದೆ. ಅಲ್ಲದೆ ಸಂಬಂಧಪಡದ ಪೊಲೀಸ್ ಅಧಿಕಾರಿಯನ್ನು ಪ್ರತಿವಾದಿಯನ್ನಾಗಿ ಮಾಡಿದ್ದಕ್ಕೆ ಎಲ್ಲರಿಗೂ ತಲಾ 10 ಸಾವಿರ ರೂ. ದಂಡ ವಿಧಿಸಿದೆ.

ಜನಪ್ರತಿನಿಧಿಗಳು ಕಾನೂನು ಪಾಲಿಸಿದರೆ ಜನ ಕೂಡಾ ಪಾಲಿಸುತ್ತಾರೆ. ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರೆ ಜನರಿಗೆ ಸಂಕಷ್ಟ ಎದುರಾಗುತ್ತದೆ. ಸಿಟಿ ಲೈಫ್ ಈಸ್ ಟಾರ್ಚರ್, ಪ್ರತಿಭಟನೆಗಳಿಂದ ಜನರಿಗೆ ಮತ್ತಷ್ಟು ತ್ರಾಸದಾಯಕ. ಜನಪ್ರತಿನಿಧಿಯಾದ ಕಾರಣಕ್ಕೆ ರಸ್ತೆ ಅಡ್ಡಗಟ್ಟುವುದನ್ನು ಒಪ್ಪಲು ಸಾಧ್ಯವಿಲ್ಲ. ಜನ ನಾಯಕರಾದವರು ಮೊದಲು ಕಾನೂನು ಪಾಲಿಸಬೇಕು ಎಂದು ನ್ಯಾಯಮೂರ್ತಿಗಳು ತಮ್ಮ ಆದೇಶದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

Leave a Reply