ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ
ಕಾಂಗ್ರೆಸ್ ಗೆ ಇಕ್ಕಟ್ಟು
3 ತಿಂಗಳ ಒಳಗೆ ವರದಿ ಸಲ್ಲಿಸುವಂತೆ ಸೂಚಿಸಿದ ಕೋರ್ಟ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ಕುರಿತು ಲೋಕಾಯುಕ್ತ ತನಿಖೆ ನಡೆಸುವಂತೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ನೇತೃತ್ವದ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದಂತಾಗಿದೆ.
- ಚಿತ್ರದುರ್ಗ ಜಿಲ್ಲೆಯ ವಸತಿ ರಹಿತರಿಗೆ ಸುವರ್ಣಾವಕಾಶ
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ನ ನ್ಯಾ.ನಾಗಪ್ರಸನ್ನ ಅವರ ಪೀಠ ಮಾನ್ಯಮಾಡಿತ್ತು.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರದ ಕುರಿತು ತನಿಖೆಯ ಅಗತ್ಯವಿದೆ ಎಂದು ಮೈಸೂರಿನ ಸ್ನೇಹಮಯಿ ಕೃಷ್ಣ ಮತ್ತು ಟಿ ಜೆ ಅಬ್ರಾಹಂ ಸಲ್ಲಿಸಿದ್ದ ಖಾಸಗಿ ದೂರುಗಳ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿ ತೀರ್ಪು ನೀಡಿತು.
ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶಿಸಿದೆ. ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ 3 ತಿಂಗಳ ಒಳಗೆ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿದೆ.
ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ತನಿಖೆ ನಡೆಸಲು ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಮರುದಿನವೇ ಈ ಆದೇಶ ಬಂದಿದೆ.
ಸಿದ್ದರಾಮಯ್ಯ ವಿರುದ್ಧದ ದೂರುಗಳ ತೀರ್ಪನ್ನು ಮುಂದೂಡುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದ್ದ ಆಗಸ್ಟ್ 19ರ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವು ಮಾಡಿದ್ದು, ತನಿಖೆಗೆ ಆದೇಶಿಸಲು ಹಸಿರು ನಿಶಾನೆ ಸಿಕ್ಕಿದೆ.
ರಾಜ್ಯಪಾಲರ ಕ್ರಮವನ್ನು ಸಿದ್ದರಾಮಯ್ಯ ಅವರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಸದರಿ ಅರ್ಜಿ ವಿಚಾರಣೆ ಮುಕ್ತಾಯದವರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.
ತೀರ್ಪಿನ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೈಸೂರು ಲೋಕಾಯುಕ್ತಕ್ಕೆ ತನಿಖೆಗೆ ಆದೇಶ ನೀಡಿರುವ ವಿಚಾರ ಮಾಧ್ಯಮಗಳ ಮೂಲಕ ತಿಳಿಯಿತು. ಆದೇಶದ ಪೂರ್ಣ ಪ್ರತಿ ಓದಿ ವಿಸ್ತೃತವಾಗಿ ಪ್ರತಿಕ್ರಿಯೆ ನೀಡುತ್ತೇನೆ ಎಂದಿದ್ದಾರೆ.
ಕಾನೂನು ರೀತಿಯ ಹೋರಾಟ ಮಾಡಲು, ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ. ಈ ಮಾತನ್ನು ನಿನ್ನೆಯೂ ಹೇಳಿದ್ದೆ, ಅದನ್ನೆ ಈಗಲೂ ಪುನರುಚ್ಚರಿಸುತ್ತಿದ್ದೇನೆ. ತನಿಖೆಗೆ ಹೆದರುವ ಪ್ರಶ್ನೆ ಇಲ್ಲ, ಎಲ್ಲವನ್ನು ಎದುರಿಸಲು ನಿರ್ಧರಿಸಿದ್ದೇನೆ. ಕಾನೂನು ಪರಿಣಿತರ ಜೊತೆ ಚರ್ಚೆ ಮಾಡಿ ಮುಂದಿನ ನಡೆಯ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದಿದ್ದಾರೆ.




