ಅಲ್ಪಸಂಖ್ಯಾತರ ಮೇಲಿನ ದಾಳಿ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ

4 years ago

ಬೆಂಗಳೂರು: ಅಲ್ಪಸಂಖ್ಯಾತರ ಮೇಲಿನ ದಾಳಿ ಮತ್ತು ಅವರ ಸಾಂವಿಧಾನಿಕ ಹಕ್ಕುಗಳನ್ನು ದಮನ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಿಪಿಐ(ಎಂ) ಕೇಂದ್ರ ಸಮಿತಿಯ ಕರೆಯ ಮೇರೆಗೆ ದೇಶದಾದ್ಯಂತ ಪ್ರತಿಭಟನೆ ಭಾಗವಾಗಿ ಬೆಂಗಳೂರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲಾ ಸಮಿತಿ ಅಡಿಯಲ್ಲಿ ಪ್ರತಿಭಟನೆ ನಡೆಸಿತು.

ಭಾರತದ ಬಹುತ್ವ ಸಂಸ್ಕೃತಿಯನ್ನು ನಾಶ ಮಾಡಲು ಯತ್ನ ನಡೆಯುತ್ತಿದೆ. ಬಿಜೆಪಿ ಮತ್ತದರ ಗುಂಪುಗಳು ದೇಶದ ಎಲ್ಲ ಕಡೆಗಳಲ್ಲೂ ಅಲ್ಪಸಂಖ್ಯಾತ ಸಮುದಾಯದವರ ಮೇಲೆ ಹಿಂಸೆ, ಹಲ್ಲೆ, ದಾಳಿ ನಡೆಸುತ್ತಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಎಲ್ಲಾ ಸಮಸ್ಯೆಗಳಿಗೂ ‘ಮುಸ್ಲಿಮರೇ’ ಕಾರಣ ಎಂದು ಜನಮಾನಸದಲ್ಲಿ ದ್ವೇಷದ ಬೀಜ ಬಿತ್ತುತ್ತಿರುವ ಕೋಮುವಾದಿ ಶಕ್ತಿಗಳನ್ನು ಹಿಮ್ಮೆಟ್ಟಿಸಬೇಕೆಂದು ಕರೆ ನೀಡಿದರು. ಅಲ್ಪಸಂಖ್ಯಾತರ ಮಧ್ಯೆ ಇರುವ ಮೂಲಭೂತವಾದಿ ಪ್ರವೃತ್ತಿಯನ್ನು ತೊಡೆದುಹಾಕಬೇಕೆಂದು ಕೂಡ ವಿನಂತಿ ಮಾಡಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐ(ಎಂ) ರಾಜ್ಯ ಸಮಿತಿ ಸದಸ್ಯೆ ವಿಮಲಾ ಕೆ ಎಸ್, ದಕ್ಷಿಣ ಜಿಲ್ಲಾ ಕಾರ್ಯದರ್ಶಿ ಬಿ.ಎನ್. ಮಂಜುನಾಥ್, ಉತ್ತರ ಜಿಲ್ಲಾ ಕಾರ್ಯದರ್ಶಿ ಪ್ರತಾಪ್ ಸಿಂಹ, ಉತ್ತರ ದಕ್ಷಿಣ ಜಿಲ್ಲಾ ಮುಖಂಡರಾದ ಮುನಿರಾಜು ಮತ್ತು ಬಿ.ರಾಜಶೇಖರ್ ಮೂರ್ತಿ ಮಾತನಾಡಿದರು. ಉತ್ತರ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯೆ ಟಿ.ಲೀಲಾವತಿ ಕಾರ್ಯಕ್ರಮ ನಡೆಸಿಕೊಟ್ಟರು.

Leave a Reply