ಬಳ್ಳಾರಿ: ಪುಸ್ತಕಗಳು ಜ್ಞಾನ ವೃದ್ಧಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಹಾಗಾಗಿ ಪ್ರತಿಯೊಬ್ಬರೂ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಕನ್ನಡ ಅಧ್ಯಾಪಕ ಹಾಗೂ ನಾಟಕಕಾರ ಡಾ.ರಾಜಪ್ಪ ದಳವಾಯಿ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಕನ್ನಡ ಮತ್ತು ಇಂಗ್ಲಿಷ್ ಹಾಗೂ ಪ್ರದರ್ಶನ ಕಲೆ (ನಾಟಕ) ವಿಭಾಗ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪ್ರೊ.ಎನ್.ಶಾಂತನಾಯ್ಕ ಅವರು ರಚಿಸಿರುವ ‘ಆ ದಿನಗಳ ಮಾತು ಈಗೇಕೆ?’ ಪುಸ್ತಕ ಬಿಡುಗಡೆ ಹಾಗೂ ‘ನಾಟಕ ರಚನಾ ಕಮ್ಮಟ-2024’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವಕ್ಕೆ ಕನ್ನಡ ಸಾಹಿತಿಗಳ ಕೊಡುಗೆ ಅಪಾರವಾಗಿದೆ. ನಾಟಕಗಳು ಮನುಷ್ಯನ ನಿಜ ರೂಪ ತಿಳಿಸುತ್ತವೆ. ಪ್ರಸ್ತುತ ದಿನಗಳಲ್ಲಿ ಪುಸ್ತಕ ಓದುವ ಹವ್ಯಾಸ ಕ್ಷೀಣಿಸುತ್ತಿರುವುದು ಬೇಸರದ ಸಂಗತಿಯಾಗಿದ್ದು, ಪ್ರತಿಯೊಬ್ಬರು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳವುದರಿಂದ ಜ್ಞಾನ ವೃದ್ದಿಸುತ್ತದೆ ಹಾಗೂ ಸಮಾಜದಲ್ಲಿನ ತಾರತಮ್ಯವನ್ನು ಹೋಗಲಾಡಿಸಬಹುದು ಎಂದರು.

ಬಳ್ಳಾರಿಯ ಸಾಹಿತಿ ಪಿ.ಆರ್.ವೆಂಕಟೇಶ್ ಪುಸ್ತಕ ಕುರಿತು ಮಾತನಾಡಿ, ಪುಸ್ತಕ ಓದುವಿಕೆಯಿಂದ ಬರುವ ಕಷ್ಟಗಳನ್ನು ಸುಲಭವಾಗಿ ನಿವಾರಿಸಬಹುದು. ‘ಆ ದಿನಗಳ ಮಾತು ಈಗೇಕೆ?’ ಪುಸ್ತಕವು ತಂದೆ ಮತ್ತು ಮಗನ ಬಾಂಧವ್ಯ ವ್ಯಕ್ತಪಡಿಸುತ್ತದೆ. ಇಂತಹ ಪುಸ್ತಕಗಳಿಂದ ಸಮಾಜದಲ್ಲಿ ಉತ್ತಮವಾದ ವಾತಾವರಣ ನಿರ್ಮಾಣವಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ರಮೇಶ್ ಓಲೇಕಾರ್ ಮಾತನಾಡಿ, ಇಂದಿನ ಪೀಳೆಗೆಯಲ್ಲಿ ಓದುವ, ಬರೆಯುವ ಹವ್ಯಾಸಗಳು ಕುಂಠಿತವಾಗಿವೆ. ವಿಶ್ವವಿದ್ಯಾಲಯಗಳಲ್ಲಿ ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಲ್ಲಿ ಸಾಹಿತ್ಯ, ಕಲೆಗಳ ಮಹತ್ವವನ್ನು ತಿಳಿದುಕೊಳ್ಳಲು ಸಹಕಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಕನ್ನಡ ಅಧ್ಯಯನ ವಿಭಾಗ ಮುಖ್ಯಸ್ಥ ಪ್ರೊ.ರಾಬರ್ಟ್ ಜೋಸ್, ಇಂಗ್ಲಿಷ್ ಮತ್ತು ಪ್ರದರ್ಶನ ಕಲೆ ನಾಟಕ ವಿಭಾಗದ ಮುಖ್ಯಸ್ಥ ಪ್ರೊ.ಎನ್.ಶಾಂತನಾಯ್ಕ, ನಾಟಕ ವಿಭಾಗದ ಅತಿಥಿ ಉಪನ್ಯಾಸಕ ಡಾ.ಅಣ್ಣಾಜಿ ಕೃಷ್ಣಾರೆಡ್ಡಿ ಹಾಗೂ ಡಾ.ಸಹನಾ ಪಿಂಜಾರ, ಹೇಮೇಶ್ವರ.ಕೆ ಸೇರಿದಂತೆ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.




