ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಕಳೆದ ವಿಧಾನಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿ ಅಕ್ರಮವೆಸಗಿದ ಆರೋಪದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಡಿ.ಸಿ.ಗೌರಿಶಂಕರ್ ಅವರನ್ನು ಶಾಸನಸಭಾ ಸದಸ್ಯತ್ವವನ್ನು ರಾಜ್ಯ ಹೈಕೋರ್ಟ್ ಅಸಿಂಧುಗೊಳಿಸಿದೆ.
ಪರಾಜಿತ ಅಭ್ಯರ್ಥಿ ಬಿಜೆಪಿಯ ಸುರೇಶ್ ಗೌಡ ಸಲ್ಲಿಸಿದ ತಕರಾರು ಅರ್ಜಿ ವಿಚಾರಣೆ ನಡೆಸಿದ
ನ್ಯಾಯಮೂರ್ತಿ ಸುನೀಲ್‍ದತ್ ಯಾದವ್ ಈ ತೀರ್ಪು ನೀಡಿದ್ದು, ಇದರ ಅನುಷ್ಠಾನಕ್ಕೆ ಒಂದು ತಿಂಗಳ ಕಾಲಾವಕಾಶ ನೀಡಿದ್ದಾರೆ. ಅಲ್ಲದೆ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅನುವಾಗುವಂತೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ.
ಆದೇಶ ಪ್ರಕಟವಾಗುತ್ತಿದ್ದಂತೆ ಗೌರಿಶಂಕರ್ ಪರ ವಕೀಲರು, ಕರ್ನಾಟಕ ವಿಧಾನಸಭೆಗೆ ಚುನಾವಣೆ ಘೋಷಣೆ ಆಗಿರುವುದರಿಂದ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಪ್ರಜಾಪ್ರತಿನಿಧಿ ಕಾಯಿದೆಯ ಸೆಕ್ಷನ್ 116 (ಬಿ) ಅಡಿ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ಗೆ ಅಧಿಕಾರವಿದೆ ಎಂದು ಕೋರಿದರು.
ಇದಕ್ಕೆ ಆಕ್ಷೇಪಿಸಿದ ಸುರೇಶ್ ಗೌಡ ಪರ ವಕೀಲರು, ಅನರ್ಹತೆಯು ತಕ್ಷಣವೇ ಜಾರಿಗೆ ಬಾರದಿರುವುದರಿಂದ ಗೌರಿಶಂಕರ್ ಚುನಾವಣೆಯಲ್ಲಿ ಸ್ಪರ್ಧಿಸಲು ಯಾವುದೇ ಸಮಸ್ಯೆ ಆಗುವುದಿಲ್ಲ. ಹೀಗಾಗಿ, ಅವರ ಕೋರಿಕೆಯನ್ನು ಪರಿಗಣಿಸಬಾರದು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು, ಪ್ರತಿವಾದಿ ಗೌರಿ ಶಂಕರ್ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದಾರೆ. ಹೀಗಾಗಿ, ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಉದ್ದೇಶಿಸಿರುವುದರಿಂದ ಆದೇಶವನ್ನು ಅಮಾನತಿನಲ್ಲಿ ಇರಿಸಬೇಕು ಎಂದು ಅವರ ವಕೀಲರು ಮಾಡಿದ ಮನವಿ ಪುರಸ್ಕರಿಸಿದ ನ್ಯಾಯಮೂರ್ತಿಗಳು ಆದೇಶ ಜಾರಿಗೆ ಒಂದು ತಿಂಗಳ ಕಾಲಾವಕಾಶ ನೀಡಿದರು.
ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಗೌರಿಶಂಕರ್ ಅವರು 39 ಸಾವಿರ ವಯಸ್ಕರು ಮತ್ತು 16 ಸಾವಿರ ಮಕ್ಕಳಿಗೆ ನಕಲಿ ವಿಮಾ ಪಾಲಿಸಿಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿ ಜಯ ಸಾಧಿಸಿದ್ದಾರೆ. ಇದು ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್ 123ರ ಅಡಿ ಅಪರಾಧವಾಗಿದೆ. ಹೀಗಾಗಿ, ಗೌರಿಶಂಕರ್ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಸುರೇಶ್ ಗೌಡ ಅವರು 2018 ರ ಜುಲೈನಲ್ಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.



