ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಬೇಕಾದರೆ ರಾಜ್ಯ ಸರ್ಕಾರದಲ್ಲಿ ಮೂವರು ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಬೇಕು ಎಂಬ ಬೇಡಿಕೆ ಇದೀಗ ಕಾಂಗ್ರೆಸ್ ನಲ್ಲಿ ಹೊಸ ವಿವಾದ ಸೃಷ್ಟಿಸಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಲಿಂಗಾಯತ ಸಮುದಾಯಕ್ಕೆ ಸೇರಿದ ಮೂರನ್ನು ಡಿಸಿಎಂ ಮಾಡಬೇಕೆಂಬ ಪ್ರಸ್ತಾಪದ ಹಿಂದೆ ಹಾಲಿ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಕೈ ಕಟ್ಟಿ ಹಾಕುವ ತಂತ್ರ ಎಂದೇ ವ್ಯಾಖ್ಯಾನಿಸಲಾಗುತ್ತಿದೆ.
ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಹಾಗೂ ಚುನಾವಣಾ ಕಾರ್ಯತಂತ್ರ ಕುರಿತು ಚರ್ಚಿಸಲು ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿದ ಕಾಂಗ್ರೆಸ್ ನಾಯಕರು ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.
ಇದಕ್ಕೆ ತಿರುಗೇಟು ನೀಡಿರುವ ಡಿ.ಕೆ.ಶಿವಕುಮಾರ್, ಹೆಚ್ಚುವರಿ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಿದ್ದೇ ಆದರೆ ತಾವು ಸಂಪುಟದಿಂದ ಹೊರಗಿರುವುದಾಗಿ ಎಚ್ಚರಿಕೆಯ ಸಂದೇಶ ನೀಡಿದ್ದಾರೆ ಎಂದು ಪಕ್ಷದ ಉನ್ನತಮೂಲಗಳು ಮಾಹಿತಿ ನೀಡಿವೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಬಳಿ ಡಿಸಿಎಂ ಹುದ್ದೆ ಆಕಾಂಕ್ಷಿಗಳು ತಮ್ಮ ಬೇಡಿಕೆ ಮಂಡಿಸಿದ್ದಾರೆ. ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸದೇ ಇದ್ದರೆ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂಬ ಸಂದೇಶ ನೀಡಿದ್ದಾರೆ.
ಇದರ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಹೈಕಮಾಂಡ್ಗೆ ತಮ್ಮ ನಿಲುವು ತಿಳಿಸಿದ್ದು, ಪಕ್ಷಕ್ಕೆ ಅನುಕೂಲವಾಗುವುದಾದರೆ ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಳ್ಳಬಹುದು. ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಿದ್ದೇ ಆದರೆ ತಾವು ಪ್ರಸ್ತುತ ಹುದ್ದೆಯಲ್ಲಿ ಮುಂದುವರೆಯುವುದಿಲ್ಲ. ಹೈಕಮಾಂಡ್ ಬಯಸುವುದಾದರೆ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುತ್ತೇನೆ. ಬೇಡ ಎಂದರೆ ಅದನ್ನೂ ತ್ಯಜಿಸಲು ಸಿದ್ಧ ಎಂದು ತಮ್ಮ ಅಛಲ ನಿರ್ಧಾರವನ್ನು ತಿಳಿಸಿದ್ದಾರೆ ಎನ್ನಲಾಗಿದೆ.
ಸುರ್ಜೇವಾಲಾ ಅವರಿಗೆ ತಮ್ಮ ನಿಲುವು ತಿಳಿಸಿರುವ ಶಿವಕುಮಾರ್ ಇದನ್ನು ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಸಿ.ವೇಣುಗೋಪಾಲ್ ಅವರಿಗೆ ರವಾನಿಸುವಂತೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.



