ಪರಿಶಿಷ್ಟ ಜಾತಿ, ಪಂಗಡದ ನಾಯಕರ ಅಭಿಪ್ರಾಯಕ್ಕೆ ಮನ್ನಣೆಗೆ ಆಗ್ರಹ

2 years ago

ಬೆಂಗಳೂರು: ಲೋಕಸಭೆ ಚುನಾವಣೆ ಸನ್ನಿಹಿತವಾಗುತ್ತಿರುವ ಬೆನ್ನೆಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ವಿದ್ಯಮಾನಗಳು ಬಿರುಸುಗೊಂಡಿವೆ. ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಹಲವು ವಿಷಯಗಳಲ್ಲಿ ಪಕ್ಷದ ನಾಯಕತ್ವ ತಮ್ಮ ಅಭಿಪ್ರಾಯ ಕೇಳಬೇಕು ಎಂದು ಪರಿಶಿಷ್ಟ ಜಾತಿ ಮತ್ತು ವರ್ಗದ ಸಚಿವರು ಹೈಕಮಾಂಡ್ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ.

ಆಹಾರ ಸಚಿವ ಕೆ.ಎಚ್.ಮುನಿಯಪ್ಪ ನಿವಾಸದಲ್ಲಿ ಉಪಹಾರಕೂಟ ನಡೆಸಿದ ಈ ವರ್ಗಕ್ಕೆ ಸೇರಿದ ಸಚಿವರಾದ ಸತೀಶ್ ಜಾರಕಿಹೊಳಿ, ಡಾ.ಜಿ.ಪರಮೇಶ್ವರ್, ಡಾ.ಎಚ್.ಸಿ.ಮಹದೇವಪ್ಪ ಸೇರಿದಂತೆ ಹಲವು ಸಚಿವರು ಹೈಕಮಾಂಡ್ ಏಕಪಕ್ಷಿಯ ತೀರ್ಮಾನ ಕೈಗೊಳ್ಳಬಾರದು ಎಂದು ಆಗ್ರಹಿಸಲು ನಿರ್ಧರಿಸಿದ್ದಾರೆ.

ಸದ್ಯ ನಡೆಯುತ್ತಿರುವ ರಾಜ್ಯಸಭೆ ಚುನಾವಣೆ ಮತ್ತು ಮುಂಬರುವ ಲೋಕಸಭೆ ಚುನಾವಣೆ ಸಮಯದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಬಂದಾಗ ತಮ್ಮ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕು. ಜಿಲ್ಲಾ ಉಸ್ತುವಾರಿ ಸಚಿವರಾಗಿ ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿರುವ ತಮ್ಮ ಅಭಿಪ್ರಾಯಗಳಿಗೆ ಮಾನ್ಯತೆ ನೀಡಬೇಕು ಎಂದು ವರಿಷ್ಠರ ಮೇಲೆ ಒತ್ತಡ ಹೇರಲು ಸಿದ್ಧತೆನಡೆಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗಕ್ಕೆ ಸೇರಿದ ಮತದಾರರು ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಈ ಹಿಂದೆಯಲ್ಲಿ ಸದ್ಯ ನಡೆಯುತ್ತಿರುವ ರಾಜ್ಯಸಭೆ ಚುನಾವಣೆಯಲ್ಲಿ ಈ ಸಮುದಾಯಕ್ಕೆ ಸೇರಿದವರಿಗೆ ಒಂದು ಸ್ಥಾನ ನೀಡಬೇಕು. ಅದೇ ರೀತಿ ಪಕ್ಷದಲ್ಲಿ ಅತ್ಯಂತ ಹಿರಿಯರಾಗಿರುವ ಬಿ.ಎಲ್.ಶಂಕರ್ ಮತ್ತು ತೀರಾ ಹಿಂದುಳಿದ ಸಮುದಾಯಕ್ಕೆ ಸೇರಿದ ಎಂ.ಸಿ.ವೇಣುಗೋಪಾಲ್ ಅವರಿಗೆ ಅವಕಾಶ ನೀಡಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರಲು ತೀರ್ಮಾನಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಪರಿಶಿಷ್ಟ ವರ್ಗಕ್ಕೆ ಸೇರಿದ ರಾಯಚೂರು ಮತ್ತು ಬಳ್ಳಾರಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಮಾತ್ರವಲ್ಲದೆ ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಅವರ ಅಭಿಪ್ರಾಯ ಅಂತಿಮವಾಗಬೇಕು ಎಂದು ಒತ್ತಡ ಹೇರಲು ನಿರ್ಧರಿಸಿದ್ದಾರೆ.

ಅದೇ ರೀತಿಯಲ್ಲಿ ಚಾಮರಾಜನಗರ ಕ್ಷೇತ್ರದಲ್ಲಿ ಮಹಾದೇವಪ್ಪ ಅವರ ಮಾತು ಅಂತಿಮವಾಗಬೇಕು, ತುಮಕೂರು ಕೋಲಾರ ಚಿತ್ರದುರ್ಗ ಮತ್ತು ವಿಜಯಪುರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ ಮತ್ತು ಆರ್.ಬಿ.ತಿಮ್ಮಾಪುರ ಅವರ ಮಾತುಗಳಿಗೆ ಮಾನ್ಯತೆ ನೀಡಬೇಕು ಎಂದು ವರಿಷ್ಠರ ಮೇಲೆ ಒತ್ತಡ ಹೇರಲು ತೀರ್ಮಾನಿಸಲಾಗಿದೆ.

ಸ್ಥಳೀಯ ಘಟಕಗಳು ಮತ್ತು ಉಸ್ತುವಾರಿ ಸಚಿವರ ಅಭಿಪ್ರಾಯ ಆಲಿಸಲಾಗಿದೆ ಎಂದು ಹೇಳಿ ಪ್ರದೇಶ ಕಾಂಗ್ರೆಸ್ ಈ ಕ್ಷೇತ್ರಗಳಿಗೆ ಕೆಲವು ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಪಟ್ಟಿಮಾಡಿದೆ. ಆದರೆ ಇದರಲ್ಲಿ ತಮ್ಮ ಅಭಿಪ್ರಾಯಗಳಿಗೆ ಸಣ್ಣ ಮಾನ್ಯತೆ ಕೂಡ ಇಲ್ಲವಾಗಿದೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಸದ್ಯದಲ್ಲೇ ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವುದು ಸೂಕ್ತ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವರದಿಯಾಗಿದೆ.

Leave a Reply