ಬೆಂಗಳೂರು: ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಕಾರ್ಯ ವೈಖರಿಯಿಂದ ಅಸಮಾಧಾನಗೊಂಡಿರುವ ಹಲವು ನಾಯಕರು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎಂದು ಹೇಳಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕಾಂಗ್ರೆಸ್ನಲ್ಲಿ ಆಪರೇಷನ್ ಹಸ್ತ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅನೇಕ ಮಂದಿ ಕಾಂಗ್ರೆಸ್ ಸೇರಲು ಒಲವು ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ವಿವಿಧ ಹಂತಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಅನ್ಯ ಪಕ್ಷಗಳಿಂದ ಶಾಸಕರು ಕಾಂಗ್ರೆಸ್ಗೆ ಸೇರುತ್ತಾರೆಂದರೆ ಆ ಕ್ಷೇತ್ರದಲ್ಲಿನ ಕಾರ್ಯಕರ್ತರು, ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಸೇರಿದಂತೆ ಹಲವರ ಅಭಿಪ್ರಾಯಗಳನ್ನು ಗೌರವಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಪಕ್ಷದ ಅಧ್ಯಕ್ಷರು ಸಮಾಲೋಚನೆಗಳನ್ನು ಮಾಡುತ್ತಿದ್ದಾರೆ ಎಂದರು.
ತುಮಕೂರು ಜಿಲ್ಲೆಯಲ್ಲಿನ ಪಕ್ಷ ಸೇರ್ಪಡೆಗೆ ಸಂಬಂಧಪಟ್ಟಂತೆ ಈವರೆಗೂ ಯಾರೂ ತಮ್ಮೊಂದಿಗೆ ಚರ್ಚೆ ಮಾಡಿಲ್ಲ. ಪಕ್ಷದ ಅಧ್ಯಕ್ಷರ ಜೊತೆ ಸಮಾಲೋಚನೆ ಮಾಡಿರಬಹುದು. ಅಧ್ಯಕ್ಷರ ಜೊತೆ ಚರ್ಚೆ ಮಾಡಿದರೆ, ತಮ್ಮ ಜೊತೆಗೆ ಮಾತನಾಡಿದಂತೆಯೇ ಎಂದರು.




