ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಮಾನದಂಡ ಆಧರಿಸಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುವಂತೆ ಬಿಜೆಪಿ ಕೇಂದ್ರ ನಾಯಕತ್ವ ಸ್ಪಷ್ಟ ಸೂಚನೆ ನೀಡಿದ್ದರೂ ಸೊಪ್ಪು ಹಾಕದ ಹಲವರು ಬಂಡಾಯದ ಬಾವುಟ ಹಾರಿಸಲು ಸಜ್ಜುಗೊಂಡಿದ್ದಾರೆ.
- ಅಮೆರಿಕದಿಂದ 1 ಲಕ್ಷ ಕೋಟಿ ರೂ. ವಾಪಸ್ ಪಡೆಯುವುದಾಗಿ ಮೋದಿ ಶಪಥ ಮಾಡಿದ್ದಾರೆಯೇ?
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ತಮ್ಮ ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ್ದರಿಂದ ಆಕ್ರೋಶಗೊಂಡಿದ್ದು, ನಾಳೆ ತಮ್ಮ ಬೆಂಬಲಿಗರ ಸಭೆ ಕರೆದಿದ್ದಾರೆ.
ಟಿಕೆಟ್ ಹಂಚಿಕೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ಕೈ ಮೇಲಾಗಿದ್ದು, ಅವರು ಹೇಳಿದವರಿಗೆ ಹೈಕಮಾಂಡ್ ಟಿಕೇಟ್ ನೀಡಿದೆ. ಈ ವೇಳೆ ಹಿಂದುತ್ವ ಮತ್ತು ಪಕ್ಷದ ನೀತಿ ಸಿದ್ಧಾಂತವನ್ನು ಗಾಳಿಗೆ ತೂರಲಾಗಿದೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ.
ಅಷ್ಟೇ ಅಲ್ಲ ಯಡಿಯೂರಪ್ಪ ಅವರು ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ಕೊಡಿಸಲು ವಹಿಸಿದ ಮುತವರ್ಜಿಯನ್ನು ತಮ್ಮ ಮಗನಿಗೆ ಟಿಕೆಟ್ ಕೊಡಿಸಲು ವಹಿಸಲಿಲ್ಲ ಎಂದು ಆರೋಪಿಸಿದ್ದಾರೆ.
ಪಕ್ಷದ ಹಿಂದುತ್ವವಾದಿ ನಾಯಕರಾದ ನಳಿನ್ ಕುಮಾರ್ ಕಟೀಲು, ಸಿ.ಟಿ.ರವಿ, ಬಸನಗೌಡ ಪಾಟೀಲ್ ಯತ್ನಾಳ್, ಅನಂತಕುಮಾರ್ ಹೆಗಡೆ, ಪ್ರತಾಪ ಸಿಂಹ ಮೊದಲಾದವರನ್ನು ತುಳಿಯುವ ಪ್ರಯತ್ನ ಮಾಡಲಾಗಿದೆ. ಪಕ್ಷಕ್ಕೆ ಸಂಬಂಧವೇ ಇಲ್ಲದ ಯದುವೀರ್ ಮತ್ತು ಡಾ.ಮಂಜುನಾಥ್ ಅವರಿಗೆ ಟಿಕೆಟ್ ನೀಡಿರುವುದು ಎಷ್ಟು ಸರಿ? ಎಂದು ಪ್ರಶ್ನಿಸಿದಕರು.
ತಮ್ಮ ಪುತ್ರನಿಗೆ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಲಾಗುತ್ತದೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ಕೇಂದ್ರ ನಾಯಕ ರಾಧಾ ಮೋಹನ್ ಸಿಂಗ್ ನೀಡಿರುವ ಆಹ್ವಾನ ತಿರಸ್ಕರಿಸಿರುವ ಈಶ್ವರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧತೆ ಆರಂಭಿಸಿದ್ದಾರೆ.
ಇನ್ನು ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್ ಅವರ ಪತ್ನಿ ಗಾಯತ್ರಿ ಸಿದ್ಧೇಶ್ವರ್ ಅವರಿಗೆ ಟಿಕೆಟ್ ನೀಡಿರುವ ಹೈಕಮಾಂಡ್ ನಡೆ ವಿರುದ್ಧ ಕೆಂಡಮಂಡಲರಾಗಿರುವ ಮಾಜಿ ಸಚಿವ ರೇಣುಕಾಚಾರ್ಯ, ಬಂಡಾಯದ ಮೂಲಕ ಬಿಜೆಪಿ ಅಭ್ಯರ್ಥಿಗೆ ಸೋಲುಣಿಸಲು ತಂತ್ರ ಹೆಣೆಯುತ್ತಿದ್ದಾರೆ.
ರೇಣುಕಾಚಾರ್ಯ ನೇತೃತ್ವದಲ್ಲಿ ಮಾಜಿ ಸಚಿವ ರವೀಂದ್ರನಾಥ ನಿವಾಸದಲ್ಲಿ ಸಭೆ ನಡೆಸಿದ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಮಲ್ಲಿಕಾರ್ಜುನ್, ಮಾಜಿ ಶಾಸಕ ಗುರುಸಿದ್ದನಗೌಡ ಪುತ್ರ ಡಾ.ರವೀಂದ್ರ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಯಾರಾದರೂ ಒಬ್ಬರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಕೊಪ್ಪಳ ಕ್ಷೇತ್ರದ ಹಾಲಿ ಸಂಸದ ಕರಡಿ ಸಂಗಣ್ಣ ತಮಗೆ ಟಿಕೆಟ್ ನಿರಾಕರಿಸಿರುವ ಹೈಕಮಾಂಡ್ ವಿರುದ್ಧ ಆಕ್ರೋಶಗೊಂಡಿದ್ದು, ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿದರು. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂದು ನಿರ್ಧರಿಸಿರುವ ಅವರು ಕಾಂಗ್ರೆಸ್ ಇಲ್ಲವೇ ಜನಾರ್ದನ ರೆಡ್ಡಿ ಅವರ ಪಕ್ಷದಿಂದ ಕಣಕ್ಕಿಳಿಯುವ ಕುರಿತು ಚಿಂತನೆ ನಡೆಸಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರದಿಂದ ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಿರುವ ಕ್ರಮದ ವಿರುದ್ಧ ಕೆಲ ನಿಷ್ಠಾವಂತ ಕಾರ್ಯಕರ್ತರು ಬೇಸರ ಹೊರ ಹಾಕಿದ್ದಾರೆ. ಮಾಜಿ ಸಂಸದ ಸದಾನಂದ ಗೌಡ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸುವ ಸಾಧ್ಯತೆ ಇದ್ದು, ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗುವುದಿಲ್ಲ ಎಂದು ಅವರ ಆಪ್ತ ಮೂಲಗಳು ಹೇಳಿವೆ.
ತುಮಕೂರಿನಲ್ಲೂ ಮಾಜಿ ಸಚಿವ ವಿ ಸೋಮಣ್ಣ ಅವರ ಸ್ಪರ್ಧೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಮಾಜಿ ಸಚಿವ ಮಾಧುಸ್ವಾಮಿ ನೇತೃತ್ವದಲ್ಲಿ ಹಲವರು ಬಂಡಾಯ ಸಾರಲು ಸಜ್ಜಾಗಿದ್ದಾರೆ. ಪ್ರಮುಖವಾಗಿ ಪಕ್ಷದ ಅಧ್ಯಕ್ಷ ವಿಜಯೇಂದ್ರ ಬಣದಲ್ಲಿ ಗುರುತಿಸಿಕೊಂಡಿರುವ ಯುವ ಕಾರ್ಯಕರ್ತರು ಸೋಮಣ್ಣ ಅವರ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸಿದ್ದು, ಚುನಾವಣೆಯಲ್ಲಿ ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆ ಇದೆ.
ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ತಮಗೆ ಟಿಕೆಟ್ ನಿರಾಕರಿಸಿರುವ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ಅವರ ನೇರ ಹಸ್ತಕ್ಷೇಪವಿದೆ ಎಂದು ಆರೋಪಿಸಿದ್ದು, ಪಕ್ಷದ ಅಭ್ಯರ್ಥಿ ಯದುವೀರ್ ಪರ ಯಾವುದೇ ರೀತಿಯ ಪ್ರಚಾರ ನಡೆಸದಿರಲು ತಮ್ಮ ಬೆಂಬಲಿಗರಿಗೆ ಸೂಚನೆ ನೀಡಿದ್ದಾರೆ. ರಾಜಕೀಯವಾಗಿ ತಾವು ಸದ್ಯದಲ್ಲೇ ಒಂದು ನಿರ್ಧಾರ ಕೈಗೊಳ್ಳುತ್ತಿದ್ದು, ಅದಕ್ಕಾಗಿ ಕಾದು ನೋಡುವಂತೆ ಎಲ್ಲರಿಗೂ ತಿಳಿಸುವ ಮೂಲಕ ಅಚ್ಚರಿಗೆ ಕಾರಣರಾಗಿದ್ದಾರೆ.
ಮಂಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ತಮಗೆ ಟಿಕೆಟ್ ನಿರಾಕರಿಸಿದ ನಳಿನ್ ಕುಮಾರ್ ಕಟಿಲ್ ಪಕ್ಷದ ನಿರ್ಧಾರಕ್ಕೆ ತಲೆ ಬಾಗುತ್ತೇನೆ ಎಂದು ಹೇಳಿದ್ದಾರಾದರೂ ಚುನಾವಣೆ ಘೋಷಣೆಯಾದ ನಂತರ ಇವರು ಯಾವ ನಿಲುವು ತಳೆಯಲಿದ್ದಾರೆ ಎನ್ನುವುದು ಕುತೂಹಲ ಕೆರಳಿಸಿದೆ.



