ಬೆಂಗಳೂರು: ತಾವು ಆಯ್ಕೆ ಮಾಡಿದ ನಾಯಕರು ಕ್ಷೇತ್ರಕ್ಕೆ ಏನೂ ಮಾಡಿಲ್ಲ ಎಂಬುದು ಚನ್ನಪಟ್ಟಣ ಮತದಾರರಿಗೆ ಅರ್ಥವಾಗಿದೆ. ಹಾಗಾಗಿ ಕ್ಷೇತ್ರದ ಮತದಾರರು ಈ ಬಾರಿ ಬದಲಾವಣೆ ಬಯಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನ್ಯ ಪಕ್ಷಗಳನ್ನು ತೊರೆದು ಕಾಂಗ್ರೆಸ್ ತತ್ವ, ಸಿದ್ಧಾಂತಗಳ ಮೇಲೆ ವಿಶ್ವಾಸವಿಟ್ಟು ಬಂದವರನ್ನು ಸ್ವಾಗತಿಸಿದರು.
ನಾವೆಲ್ಲಾ ಒಗ್ಗಟ್ಟಾಗಿ ಕೆಲಸ ಮಾಡಿದರೆ ಖಂಡಿತವಾಗಿಯೂ ಈ ಬಾರಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದಾಗಿದೆ. 40% ಕಮಿಷನ್ ದಂಧೆಯಿಂದ ಚನ್ನಪಟ್ಟಣ ಕ್ಷೇತ್ರವೂ ಹೊರತಾಗಿಲ್ಲ. ಭ್ರಷ್ಟ ಬಿಜೆಪಿ ಸರ್ಕಾರದ ಕಮಿಷನ್ ರಾಜಕಾರಣದಿಂದಾಗಿ ರಾಜ್ಯದ ಜನತೆ ಬೇಸತ್ತಿದ್ದಾರೆ ಎಂದರು.
ರಾಜ್ಯ ಸರ್ಕಾರವು ಶೀಘ್ರವೇ ಪಂಚಾಯಿತಿ ಚುನಾವಣೆ ನಡೆಸುವುದಾಗಿ ಘೋಷಿಸಿದೆ. ನಾವು ಚುನಾವಣೆ ಎದುರಿಸಲು ಸಿದ್ಧರಿದ್ದೇವೆ. ಕರ್ನಾಟಕವನ್ನು ದೇಶದ ಭ್ರಷ್ಟಾಚಾರ ರಾಜಧಾನಿಯನ್ನಾಗಿ ಮಾಡಿರುವ ಬಿಜೆಪಿ ಸರ್ಕಾರಕ್ಕೆ ರಾಜ್ಯದ ಜನತೆ ಬುದ್ಧಿ ಕಲಿಸಲಿದ್ದಾರೆ ಎಂದರು.



