ಬೆಂಗಳೂರು: ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ರಾಜಕೀಯವಾಗಿ ಸಮರ ಸಾರಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಡಿ ಕೆ ಶಿವಕುಮಾರ್ ಅವರ ಸೋದರ ಹಾಗೂ ಮಾಜಿ ಸಂಸದ ಡಿ ಕೆ ಸುರೇಶ್ ಭೇಟಿಯಾಗಿ ಮಾತುಕತೆ ನಡೆಸಿದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಸತೀಶ್ ಜಾರಕಿಹೊಳಿ ಅವರನ್ನು ಅವರ ಸರ್ಕಾರಿ ಗೃಹದಲ್ಲಿ ಭೇಟಿಯಾದ ಡಿ ಕೆ ಸುರೇಶ್ ಹಲವು ರಾಜಕೀಯ ವಿಚಾರಗಳ ಕುರಿತು ಮಾತುಕತೆ ನಡೆಸಿದ್ದಾರೆ. ಪ್ರಮುಖವಾಗಿ ಕರ್ನಾಟಕ ಹಾಲು ಒಕ್ಕೂಟದ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಉಭಯ ನಾಯಕರ ನಡುವೆ ಮಾತುಕತೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಲೋಕಸಭೆ ಚುನಾವಣೆಯಲ್ಲಿ ಸೋತ ನಂತರ ಡಿ ಕೆ ಸುರೇಶ್ ಅವರು ರಾಜಕೀಯವಾಗಿ ಯಾವುದೇ ಅಧಿಕಾರ ಹೊಂದಿಲ್ಲ. ಹೀಗಾಗಿ ಅವರನ್ನು ಸದ್ಯದಲ್ಲೇ ನಡೆಯಲಿರುವ ಕೆಎಂಎಫ್ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಡಿ ಕೆ ಶಿವಕುಮಾರ್ ಸೂಚಿಸಿದ್ದು, ಅವರಿಗೆ ಅಧ್ಯಕ್ಷ ಸ್ಥಾನ ದೊರಕಿಸುವ ಕೊಡುವ ಕುರಿತಂತೆ ತಂತ್ರಗಾರಿಕೆ ಆರಂಭಿಸಿದ್ದಾರೆ.
ಈ ನಡುವೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಎಂಎಫ್ ಅಧ್ಯಕ್ಷರಾಗಿದ್ದ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹುದ್ದೆ ತೊರೆದಿದ್ದರು. ಇದೀಗ ಬದಲಾದ ಲೆಕ್ಕಾಚಾರದಲ್ಲಿ ಅವರು ಮತ್ತೊಮ್ಮೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸಜ್ಜುಗೊಂಡಿದ್ದಾರೆ. ಇದಕ್ಕೆ ಅವರ ಸೋದರ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸಹಮತ ಇದೆ ಎನ್ನಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಡಿ ಕೆ ಸುರೇಶ್ ಅವರು ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಭೇಟಿ ನಂತರ ಪ್ರತಿಕ್ರಿಯಿಸಿದ ಡಿ ಕೆ ಸುರೇಶ್, ತಮ್ಮ ಈ ಭೇಟಿಯಲ್ಲಿ ಯಾವುದೇ ರಾಜಕೀಯ ಇರಲಿಲ್ಲ. ತಮ್ಮ ಕ್ಷೇತ್ರ ವ್ಯಾಪ್ತಿಯ ಹಲವು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವ ಕುರಿತಂತೆ ಮಾತುಕತೆ ನಡೆಸಿದ್ದೇನೆ ಎಂದರು.
ಸತೀಶ್ ಜಾರಕಿಹೊಳಿ ಅವರು ಲೋಕೋಪಯೋಗಿ ಮಂತ್ರಿಯಾಗಿರುವ ಕಾರಣಕ್ಕೆ ಅವರನ್ನು ಹಲವು ಬಾರಿ ಭೇಟಿ ಮಾಡಿ ಅಭಿವೃದ್ಧಿ ಯೋಜನೆಗಳ ಕುರಿತು ಸಮಾಲೋಚನೆ ನಡೆಸಿದ್ದೇನೆ. ಅದೇ ರೀತಿ ಇಂದೂ ಕೂಡ ಮಾತುಕತೆ ನಡೆಸಿದ್ದು ಇದರಲ್ಲಿ ವಿಶೇಷವೇನಿಲ್ಲ ಎಂದರು.
ಸತೀಶ್ ಜಾರಕಿಹೊಳಿ ಈ ಭೇಟಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಸುರೇಶ್ ಅವರು ನಮ್ಮ ಪಕ್ಷದ ನಾಯಕ ಹಾಗೂ ಮಾಜಿ ಸಂಸದ. ಅವರನ್ನು ಹಲವಾರು ವಿಚಾರಗಳಿಗೆ ಸಂಬಂಧಿಸಿದಂತೆ ಆಗಿಂದಾಗ್ಗೆ ಸಂಪರ್ಕಿಸಿ ಮಾತುಕತೆ ನಡೆಸುತ್ತಿರುತ್ತೇನೆ. ಅದೇ ರೀತಿಯಲ್ಲಿ ಇಂದು ಕೂಡ ಬೇಟಿಯಾಗಿ ಮಾತುಕತೆ ನಡೆಸಿದ್ದೇವೆ. ಇದರಲ್ಲಿ ವಿಶೇಷ ಎನೂ ಇಲ್ಲ ಎಂದರು.




