ಬೆಂಗಳೂರು: ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ಹಾಗೂ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ ನೀಡುವ ದಿನಾಂಕ ಮತ್ತು ಸ್ಥಳ ನಿಗದಿ ಕುರಿತ ಗೊಂದಲ ಬಗೆಹರಿದಿದೆ.
ಇದೀಗ ಯೋಜನೆಗೆ ಚಾಲನೆ ನೀಡುವ ಅದ್ದೂರಿ ಕಾರ್ಯಕ್ರಮ ಬೆಳಗಾವಿಗೆ ಬದಲಾಗಿ ಮೈಸೂರಿಗೆ ವರ್ಗಾವಣೆಯಾಗಿದೆ. ಯೋಜನೆಗೆ ಚಾಲನೆ ನೀಡಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಾರ್ಯಕ್ರಮದಲ್ಲಿನ ವ್ಯತ್ಯಾಸಗಳಿಂದಾಗಿ ಈ ಬದಲಾವಣೆಯಾಗಿದೆ.
ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಾಂಪ್ರದಾಯಿಕ ಕಲಾಮಂಟಪದಲ್ಲಿ ನಡೆದ ‘ನಮ್ಮೂರ ನಾಗಪಂಚಮಿ-2022’ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ವಿಷಯ ತಿಳಿಸಿದರು.
ನಾಡಿನ ಅಧಿ ದೇವತೆ ಚಾಮುಂಡೇಶ್ವರಿ ತಾಯಿಯ ಕ್ಷೇತ್ರದಲ್ಲಿ ಈ ಯೋಜನೆಗೆ ಚಾಲನೆ ಸಿಗುತ್ತಿರುವುದು ನನ್ನ ಅದೃಷ್ಟ . ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದರು.
ಅದ್ದೂರಿಯಾಗಿ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಸಿದ್ಧತೆ ಕೈಗೊಳ್ಳಲಾಗಿದೆ.ರಾಹುಲ್ ಗಾಂಧಿ ಅವರ ದಿನಾಂಕ ಹೊಂದಾಣಿಕೆ ದೃಷ್ಟಿಯಿಂದ ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿ ಕಾರ್ಯಕ್ರಮವನ್ನು ಮೈಸೂರಿನಲ್ಲಿ ನಿಗದಿಪಡಿಸಲಾಗಿದೆ ಎಂದರು.



