ಬರ ಕಾಣಿಸಿಕೊಂಡಿದ್ದರು ರಾಜ್ಯ ಸರ್ಕಾರ ದಿವ್ಯ ನಿರ್ಲಕ್ಷ್ಯ ವಹಿಸಿದೆ: ಆರ್.ಅಶೋಕ

2 years ago

ಬೆಂಗಳೂರು: ಮಳೆ ಅಭಾವದಿಂದ ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದ್ದರು, ರಾಜ್ಯ ಸರ್ಕಾರ ದಿವ್ಯ ನಿರ್ಲಕ್ಷ್ಯ ವಹಿಸಿ ಮೂರು ತಿಂಗಳ ಕಾಲ ತಡವಾಗಿ ಬರಗಾಲದ ಘೋಷಣೆ ಮಾಡುವ ಮೂಲಕ ಜನರನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕವನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡುವಲ್ಲಿ ವಿಳಂಬ ಮಾಡಿದ ರಾಜ್ಯ ಸರ್ಕಾರ ಇದೀಗ ಕೇಂದ್ರ ಸರ್ಕಾರ ಪರಿಹಾರಕ್ಕೆ ಆರ್ಥಿಕ ನೆರವು ನೀಡುತ್ತಿಲ್ಲ ಎಂದು ಆರೋಪಿಸುವ ಮೂಲಕ ರಾಜಕಾರಣ ಮಾಡುತ್ತಿದೆ ಎಂದರು.

ರಾಜ್ಯದಲ್ಲಿ ಮಳೆ ಅಭಾವ ಉಂಟಾಗಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳು ವರದಿ ನೀಡಿದ ತಕ್ಷಣವೇ ಸರ್ಕಾರ ಕ್ರಮ ಕೈಗೊಂಡಿದ್ದರೆ ಕೇಂದ್ರದಿಂದ ಎಲ್ಲಾ ರೀತಿಯ ನೆರವು ಲಭಿಸುತ್ತಿತ್ತು ಎಂದರು.

ಸಂಪನ್ಮೂಲ ಕ್ರೂಡೀಕರಣದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದರಿಂದ ರಾಜ್ಯದ ಹಣಕಾಸು ಪರಿಸ್ಥಿತಿ ಹದಗೆಟ್ಟು ಹೋಗಿದೆ. ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗದೆ ಮುಖ್ಯಮಂತ್ರಿಗಳು ಕೇಂದ್ರದ ವಿರುದ್ಧ ಆರೋಪ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ. ಹಣದ ಕೊರತೆಯಿಂದಾಗಿ ರಾಜ್ಯದ ಯಾವುದೇ ಬರ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳು ನಡೆಯುತ್ತಿಲ್ಲ ಎಂದರು.

ಬರಗಾಲ ಮತ್ತು ಸಾಲದ ಭಾದೆಯಿಂದ ರಾಜ್ಯದಲ್ಲಿ ಕಳೆದ ಎಂಟು ತಿಂಗಳ ಅವಧಿಯಲ್ಲಿ 900ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಗಮನವೇ ಇಲ್ಲ ರಾಜ್ಯದ ಯಾವುದೇ ಪ್ರದೇಶಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಲೇ ಇಲ್ಲ. ಇದನ್ನು ಮರೆಮಾಚಲು ಮುಖ್ಯಮಂತ್ರಿಗಳು ನನ್ನ ತೆರಿಗೆ ನಮ್ಮ ಹಕ್ಕು ಎಂದು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದರು.

ಕಂದಾಯ ಮಂತ್ರಿ ಕೃಷ್ಣ ಬೈರೇಗೌಡ ಅವರು ಸುಳ್ಳು ದಾಖಲೆಗಳ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಅವರು ಅಷ್ಟೊಂದು ಬುದ್ಧಿವಂತರಾಗಿದ್ದರೆ ಸಂಸತ್ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ಲೋಕಸಭೆಗೆ ತೆರಳಿ ಕೇಂದ್ರ ಸರ್ಕಾರವನ್ನ ಪ್ರಶ್ನೆ ಮಾಡಬಹುದಿತ್ತು. ಅದನ್ನು ಬಿಟ್ಟು ಸಂತೆ ಭಾಷಣ ಮಾಡುವ ರೀತಿಯಲ್ಲಿ ಮಾತನಾಡುತ್ತಿದ್ದಾರೆ ಎಂದರು.

ಅನ್ನ ಭಾಗ್ಯ ಯೋಜನೆ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದೆ. ಆದರೆ ರಾಜ್ಯ ಸರ್ಕಾರ ಇದು ತಮ್ಮ ಯೋಜನೆ ಎಂದು ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದೆ. ಅಷ್ಟೇ ಅಲ್ಲ ಜನರಿಗೆ ಅಕ್ಕಿ ವಿತರಿಸಲು ಸಾಧ್ಯವಾಗದೆ ಕನ್ನ ಭಾಗ್ಯ ನೀಡುತಿದೆ ಎಂದರು.

ವಾಸ್ತವದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ನು ಯುಪಿಎ ಜಾರಿಗೆ ತಂದಿತ್ತು. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಆಹಾರ ಭದ್ರತಾ ಕಾಯ್ದೆಗೆ ಹಣಕಾಸು ನೆರವನ್ನು ಕಡಿಮೆ ಮಾಡುತ್ತಿದೆ. ಯುಪಿಎ ಉದ್ದೇಶಿತ 80 ಕೋಟಿ ಜನರಿಗೆ ಕಡಿಮೆ ದರದಲ್ಲಿ ಆಹಾರ ನೀಡುವ ಯೋಜನೆ ಇದಾಗಿದ್ದು, ಕೇಂದ್ರ ಸರ್ಕಾರ ಹಂತಹಂತವಾಗಿ ಯೋಜನೆಯನ್ನು ನಿಶ್ಶಕ್ತಿಗೆ ಗುರಿಮಾಡುತ್ತಿದೆ.

Leave a Reply