ಬೆಂಗಳೂರು: ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಸರ್ಕಾರಿ ನೌಕರರ ವರ್ಗಾವಣೆಗೆ ಚುನಾವಣೆ ಆಯೋಗ ಬ್ರೇಕ್ ಹಾಕಿದೆ. ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಅಧಿಕಾರಿ, ನೌಕರರ ವರ್ಗಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ತನ್ನ ಅಸಮಾಧಾನ ವ್ಯಕ್ತಪಡಿಸಿದೆ. ಇನ್ನು ಮುಂದೆ ಚುನಾವಣಾ ಆಯೋಗದ ಅನುಮತಿ ಪಡೆಯದೆ ವರ್ಗಾವಣೆ ಮಾಡಕೂಡದು ಎಂದು ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.
ಈ ಸಂಬಂಧ ರಾಜ್ಯ ಚುನಾವಣಾಕಾರಿ ಮನೋಜ್ ಕುಮಾರ್ ಮೀನಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಗೆ ಪತ್ರ ಬರೆದಿದ್ದಾರೆ. ಆಯೋಗದ ಅನುಮತಿ ಪಡೆಯದೆ ವರ್ಗಾವಣೆಗೊಳಿಸಿದರೆ ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಕೇಂದ್ರ ಚುನಾವಣಾ ಆಯೋಗವು ಶೀಘ್ರದಲ್ಲೇ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಿದ್ದು, ಚುನಾವಣಾ ಕಾರ್ಯದಲ್ಲಿ ನಿರತರಾದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಮುಖ್ಯ ಚುನಾವಣಾಕಾರಿಯವರ ಸಹಮತಿ ಪಡೆಯದೆ ವರ್ಗಾವಣೆ ಮಾಡುತ್ತಿರುವುದು ಕಂಡುಬಂದಿದೆ ಎಂದು ಪತ್ರದಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ.
ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮಾಡುವಾಗ ಮುಖ್ಯ ಚುನಾವಣಾಕಾರಿಯವರ ಸಹಮತ ಪಡೆಯಬೇಕೆಂದು ನಿರ್ದೇಶನ ನೀಡಿದ್ದರೂ ಇತ್ತೀಚೆಗೆ ನಮ್ಮ ನಿರ್ದೇಶನ ಪಡೆಯದೆ ಹಲವಾರು ಇಲಾಖೆಗಳ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಮುಂದೆ ಚುನಾವಣಾಕಾರಿಗಳ ಗಮನಕ್ಕೆ ತಾರದೆ ವರ್ಗಾವಣೆಗೊಳಿಸಿದರೆ ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರಲಾಗುವುದು. ತತ್ಕ್ಷಣವೇ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಪತ್ರದಲ್ಲಿ ತಿಳಿಸಿದ್ದಾರೆ.



