ಚುನಾವಣಾ ಬಾಂಡ್ ಹಗರಣ: ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐ ಆರ್

2 years ago

ಬೆಂಗಳೂರು: ಚುನಾವಣಾ ಬಾಂಡ್ಗಳ ಮೂಲಕ ಬಹುಕೋಟಿ ಸಂಸ್ಥೆಗಳಿಂದ ಸಾವಿರಾರು ಕೋಟಿ ರೂ.ಗಳನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿ ಜನಪರ ಸಂಘಟನೆಯೊಂದು ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆದೇಶಿಸಿದೆ.

2018ರಲ್ಲಿ ಕೇಂದ್ರ ಸರ್ಕಾರ ಚುನಾವಣಾ ಬಾಂಡ್ಗಳ ಮೂಲಕ ಬೇರೆ ಬೇರೆ ಸಂಘ-ಸಂಸ್ಥೆಗಳಿಂದ, ನಾಗರಿಕರಿಂದ ದೇಣಿಗೆ ನೀಡುವ ಪದ್ಧತಿಯನ್ನು ಜಾರಿಗೊಳಿಸಿತ್ತು. ಚುನಾವಣೆ ಸಂದರ್ಭದಲ್ಲಿ ದೇಣಿಗೆಯ ರೂಪದಲ್ಲಿ ಸಂಗ್ರಹಿಸಲಾದ ಸಾವಿರಾರು ಕೋಟಿ ರೂ.ಗಳನ್ನು ಲೂಟಿ ಮಾಡಲಾಗಿದೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಸಂಘಟನೆಯ ಮುಖಂಡ ಆದರ್ಶ ಆರ್.ಐಯ್ಯರ್ ಎಂಬುವವರು ನ್ಯಾಯಾಲಯದಲ್ಲಿ ನಾಗರೀಕ ಹಕ್ಕುಗಳ ಸಂರಕ್ಷಣಾ ಕಾಯ್ದೆಯಡಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.

ಸದರಿ ಆದೇಶದನ್ವಯ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಎ ಫ್ ಐ ಆರ್ ಅನ್ನು ಬೆಂಗಳೂರಿನ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

ಯಾವೆಲ್ಲ ಸೆಕ್ಷನ್ಗಳ ಅಡಿ ಪ್ರಕರಣ ದಾಖಲು?

ಭಾರತೀಯ ದಂಡ ಸಂಹಿತೆಯ ಕಲಂ 384 (ಸುಲಿಗೆ), 170 B (ಕ್ರಿಮಿನಲ್ ಪಿತೂರಿ), 34 (ಏಕ ಉದ್ದೇಶದಿಂದ ಅನೇಕ ವ್ಯಕ್ತಿಗಳು ಸೇರಿ ಮಾಡಿದ ಕೃತ್ಯ) ಸೆಕ್ಷನ್ಗಳ ಅಡಿಯಲ್ಲಿ ದೂರು ದಾಖಲಿಸಲಾಗಿದೆ.

ಆರೋಪಿಗಳ ಪಟ್ಟಿ:
A1 ನಿರ್ಮಲಾ ಸೀತಾರಾಮನ್, ಹಣಕಾಸು ಸಚಿವೆ
A2  ಜಾರಿ ನಿರ್ದೇಶನಾಲಯ ಅಧಿಕಾರಿಗಳು
A3 ಬಿಜೆಪಿ ರಾಷ್ಟ್ರೀಯ ಘಟಕದ ಪದಾಧಿಕಾರಿಗಳು
A4 ನಳಿನ್ ಕುಮಾರ್ ಕಟೀಲ್ ಮಾಜಿ ಸಂಸದ
A5 ಬಿ ವೈ ವಿಜಯೇಂದ್ರ ಪದಾಧಿಕಾರಿಗಳು
A6 ಬಿಜೆಪಿ ರಾಜ್ಯ ಘಟಕದ ಪದಾಧಿಕಾರಿಗಳು

ಕಾಂಗ್ರೆಸ್ ನಿಂದ ಪ್ರತಿಭಟನೆ: ಚುನಾವಣಾ ಬಾಂಡ್ ಹಗರಣದಲ್ಲಿ ಸಿಲುಕಿರುವ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ನೇತೃತ್ವದಲ್ಲಿ ಪ್ರತಿಭಟಿಸಿದರು.

ಸಿಎಂ ಸಿದ್ದರಾಮಯ್ಯನವರ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡುತ್ತಿರುವ ಬಿಜೆಪಿ – ಜೆಡಿಎಸ್ ನ ಕೆಲವು ಭ್ರಷ್ಟಾಚಾರಿಗಳು ಸಿದ್ದರಾಮಯ್ಯನವರ ರಾಜೀನಾಮೆ ನೀಡಬೇಕೆಂದು ಹೋರಾಟ ಮಾಡುತ್ತಿದ್ದಾರೆ. ಆದರೆ ಈಗ ಕೋಟ್ಯಂತರ ಅಕ್ರಮ ಚುನಾವಣಾ ಬಾಂಡ್ ಹಗರಣದಲ್ಲಿ ಭಾಗಿಯಾಗಿರುವ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ರಾಜೀನಾಮೆಗೆ ಯಾಕೆ ನೀವು ಒತ್ತಾಯಿಸುವುದಿಲ್ಲ ಎಂಬುದರ ಬಗ್ಗೆ ಬಿಜೆಪಿ – ಜೆಡಿಎಸ್ ಜನತೆಗೆ ತಿಳಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಕೂಡ ಈ ಹಗರಣದಲ್ಲಿ ಆರೋಪಿಯಾಗಿದ್ದಾರೆ. ಸಾರ್ವಜನಿಕರ ಹಣವನ್ನು ಲೂಟಿ ಮಾಡಿ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಕೇಂದ್ರ ಸರ್ಕಾರದ ಮಂತ್ರಿಗಳು ವಾಮಮಾರ್ಗದಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿರುವುದು ಈಗ ದೇಶದ ಜನತೆಗೆ ತಿಳಿದಿದೆ. ಇವರ ವಿರುದ್ಧ ಪ್ರಧಾನಿ ನರೇಂದ್ರಮೋದಿ ಕ್ರಮ ಕೈಗೊಳ್ಳುತ್ತಾರೆಯೇ ಎಂದು ಪ್ರಶ್ನಿಸಿದರು.

ನಿರ್ಮಲಾ ಸೀತಾರಾಮನ್ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ಸಹ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು, ಭ್ರಷ್ಟಾಚಾರ ಎಂದರೆ ಬಿಜೆಪಿ ಬಿಜೆಪಿ ಎಂದರೆ ಭ್ರಷ್ಟಾಚಾರ ಆಡಳಿತ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸುವ ಬಿಜೆಪಿ ನಾಯಕರು ಈಗ ರಾಜೀನಾಮೆ ಕೇಳುವ ನೈತಿಕತೆ ಕಳೆದುಕೊಂಡಿದ್ದಾರೆ. ಅತಿ ಹೆಚ್ಚು ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿರುವುದು ಬಿಜೆಪಿ ಎಂದು ಈಗ ಮತ್ತೆ ಸಾಬೀತಾಗಿದೆ ಎಂದರು.

ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ಉಮೇಶ್ ಪುಟ್ಟರಾಜು, ನವೀನ್, ಹೇಮರಾಜ್, ಕೌಶಿಕ್, ವಾಸು, ಮಧು, ಗಜೇಂದ್ರ ಮೊದಲಾದವರು ಭಾಗವಹಿಸಿದ್ದರು.

Leave a Reply